ನಾಳೆ ಬಿಜೆಪಿಯ ಮಹತ್ವದ ಕೋರ್ ಕಮಿಟಿ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜ.15-ಸಚಿವ ಸಂಪುಟ ವಿಸ್ತರಣೆ, ಪೌರತ್ವ ತಿದ್ದುಪಡಿ ಕಾಯ್ದೆ ವಿವಾದ, ಸ್ಥಳೀಯ ಸಂಸ್ಥೆಗಳ ಚುನಾವಣೆ, ನೂತನ ಪದಾಧಿಕಾರಿಗಳ ನೇಮಕಾತಿ, ಪಕ್ಷ ಸಂಘಟನೆ ಸೇರಿದಂತೆ ಪ್ರಮುಖ ವಿಷಯಗಳ ಕುರಿತು ಚರ್ಚಿಸಲು ನಾಳೆ ಬಿಜೆಪಿಯ ಮಹತ್ವದ ಕೋರ್ ಕಮಿಟಿ ಸಭೆ ನಡೆಯಲಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯಲಿರುವ ಸಭೆಗೆ ಮುಖ್ಯಮಂತ್ರಿ ಯಡಿಯೂರಪ್ಪ , ಸಚಿವರಾದ ಡಿ.ವಿ.ಸದಾನಂದಗೌಡ, ಪ್ರಹ್ಲಾದ್ ಜೋಷಿ, ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, ಆರ್.ಅಶೋಕ್, ಕೆ.ಎಸ್.ಈಶ್ವರಪ್ಪ ಸೇರಿದಂತೆ ಮತ್ತಿತರ ಪ್ರಮುಖರು ಭಾಗವಹಿಸಲಿದ್ದಾರೆ.

ನಾಳೆ 5 ಗಂಟೆಗೆ ಪಕ್ಷದ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಮುಖ್ಯವಾಗಿ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆ, ಸಚಿವರ ಕಾರ್ಯ ವೈಖರಿ, ಶಾಸಕರ ಬೇಡಿಕೆಗಳು ಸೇರಿದಂತೆ ಪ್ರಮುಖ ವಿಷಯಗಳ ಮೇಲೆ ಚರ್ಚೆ ನಡೆಯಲಿದೆ.ದೇಶಾದ್ಯಂತ ಭಾರೀ ವಿವಾದ ಎಬ್ಬಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳಲು 17ರಿಂದ ಎರಡು ದಿನಗಳ ಕಾಲ ರಾಜ್ಯಕ್ಕೆ ಆಗಮಿಸಲಿರುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಕೇಂದ್ರ ಗೃಹ ಸಚಿವರಾಗಿರುವ ಅಮಿತ್ ಷಾ ಅವರ ಹುಬ್ಬಳ್ಳಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಸಭೆಯಲ್ಲಿ ಚರ್ಚಿಸಲಾಗುವುದು.

ಶನಿವಾರ ನಡೆಯಲಿರುವ ಹುಬ್ಬಳ್ಳಿ ಸಮಾವೇಶದಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರನ್ನು ಸೇರಿಸಿ ಕಾಯ್ದೆ ಕುರಿತಂತೆ ಪ್ರತಿಪಕ್ಷಗಳು ಮಾಡುತ್ತಿರುವ ಆರೋಪಗಳಿಗೆ ಸಮಾರಂಭದಲ್ಲಿ ಅಮಿತ್ ಷಾ ತಿರುಗೇಟು ನೀಡುವ ಸಾಧ್ಯತೆಗಳಿವೆ. ಈ ಸಮಾರಂಭವನ್ನು ಯಶಸ್ವಿಯಾಗಿ ನಡೆಸುವ ಮೂಲಕ ಪಕ್ಷದ ಶಕ್ತಿ ಪ್ರದರ್ಶಿಸಬೇಕೆಂಬ ನಿರ್ಣಯವೂ ಆಗಲಿದೆ.

ಇನ್ನು ಸಭೆಯಲ್ಲಿ ಮುಖ್ಯವಾಗಿ ಜೂನ್ ತಿಂಗಳಿನಲ್ಲಿ ನಡೆಯಲಿರುವ ಮೂರು ಪದವೀಧರ ಹಾಗೂ ಒಂದು ಶಿಕ್ಷಕರ ಕ್ಷೇತ್ರ ಸೇರಿ ಒಟ್ಟು 4 ಕ್ಷೇತ್ರಗಳ ವಿಧಾನಪರಿಷತ್ ಚುನಾವಣೆ ಹಾಗೂ ಅಭ್ಯರ್ಥಿಗಳ ಆಯ್ಕೆ ಬಗ್ಗೆಯೂ ಚರ್ಚೆ ನಡೆಯಲಿದೆ.ಜೂನ್ ತಿಂಗಳಿನಲ್ಲಿ ನಡೆಯಲಿರುವ ಬೆಂಗಳೂರು(ಶಿಕ್ಷಕರ ಕ್ಷೇತ್ರ) ಆಗ್ನೇಯ, ನೈರುತ್ಯ ಹಾಗೂ ಈಶಾನ್ಯ ಪದವೀಧರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಬಗ್ಗೆ ಸಭೆಯಲ್ಲಿ ತೀರ್ಮಾನವಾಗುವ ನಿರೀಕ್ಷೆಯಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಹಾಲಿ ಸದಸ್ಯ ಪುಟ್ಟಣ್ಣ ಅವರು ಕಣಕ್ಕಿಳಿಯಲಿದ್ದಾರೆ. ಉಳಿದಂತೆ ಮೂರು ಕ್ಷೇತ್ರಗಳಿಗೆ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗಿದ್ದು, ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.ಇದರ ಜೊತೆಗೆ ನಿನ್ನೆಯಷ್ಟೇ ಚುನಾವಣಾ ಆಯೋಗ ಸ್ಥಳೀಯ ಸಂಸ್ಥೆಗಳ ಚುನಾವಣೆ ದಿನಾಂಕವನ್ನು ಪ್ರಕಟಿಸಿದೆ.

ಈ ಚುನಾವಣೆಯಲ್ಲೂ ಪಕ್ಷ ಗೆಲ್ಲುವ ಮೂಲಕ ಮತದಾರರ ನಾಡಿಮಿಡಿತ ಸರ್ಕಾರದ ಪರವಾಗಿದೆ ಎಂಬುದನ್ನು ಬಿಂಬಿಸಲು ತಂತ್ರ ರೂಪಿಸಲಿದೆ. ಎಲ್ಲಕ್ಕಿಂತ ಮುಖ್ಯಮಂತ್ರಿ ಸಿಎಎ ಕುರಿತು ವಿರೋಧ ಪಕ್ಷಗಳು ಮಾಡುತ್ತಿರುವ ಆರೋಪಗಳಿಗೆ ಮನೆ ಮನೆಗೆ ತೆರಳಿ ಸಾರ್ವಜನಿಕರಲ್ಲಿ ಮನವರಿಕೆ ಮಾಡುವಂತೆ ಪದಾಧಿಕಾರಿಗಳಿಗೆ ಸೂಚನೆ ಕೊಡಲಿದ್ದಾರೆ.

ಈಗಾಗಲೇ ಮನೆ ಮನೆಗೆ ತೆರಳಿ ನಡೆಸುತ್ತಿರುವ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದನ್ನು ಇನ್ನಷ್ಟು ಪರಿಣಾಮಕಾರಿಗೊಳಿಸಲು ಸಭೆಯಲ್ಲಿ ಚರ್ಚೆ ಮಾಡಲಾಗುವುದು. ಮೂರು ದಿನಗಳ ಹಿಂದಷ್ಟೇ ಕೆಲವು ಜಿಲ್ಲೆಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿತ್ತು. ಉಳಿದಂತೆ ನೂತನ ಪದಾಧಿಕಾರಿಗಳ ನೇಮಕ ಮಾಡುವ ಬಗ್ಗೆಯೂ ಚರ್ಚೆ ನಡೆಯಲಿದೆ.

Facebook Comments

Sri Raghav

Admin