ಇಂದು ಬಿಜೆಪಿ ಮಹತ್ವದ ಕೋರ್ ಕಮಿಟಿ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ.6- ರಾಜ್ಯಸಭೆ ಮತ್ತು ವಿಧಾನಪರಿಷತ್ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಇಂದು ರಾಜ್ಯ ಬಿಜೆಪಿ ಮಹತ್ವದ ಕೋರ್ ಕಮಿಟಿ ಸಭೆ ನಡೆಯಲಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮುಖ್ಯಮಂತ್ರಿ ಯಡಿಯೂರಪ್ಪ, ಕೋರ್ ಕಮಿಟಿ ಸದಸ್ಯರಾದ ಕೆ.ಎಸ್.ಈಶ್ವರಪ್ಪ, ಜಗದೀಶ್ ಶೆಟ್ಟರ್, ಆರ್.ಅಶೋಕ್, ಗೋವಿಂದ ಕಾರಜೋಳ, ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್, ಕೇಂದ್ರ ಸಚಿವರಾದ ಸದಾನಂದಗೌಡ, ಪ್ರಹ್ಲಾದ್ ಜೋಷಿ ಮತ್ತಿತರರು ಆಗಮಿಸುವರು.

ಸಭೆಯಲ್ಲಿ ಮುಖ್ಯವಾಗಿ ಇದೇ 19ರಂದು ನಡೆಯಲಿರುವ ರಾಜ್ಯಸಭೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡುವ ಸಂಭವವಿದೆ.ರಾಜ್ಯಸಭೆಯ ಒಂದು ಸ್ಥಾನಕ್ಕೆ ಈಗಾಗಲೇ ಪ್ರಭಾಕರ್ ಕೋರೆ ಮರು ಆಯ್ಕೆ ಬಹುತೇಕ ಖಚಿತ ಎನ್ನಲಾಗುತ್ತಿದ್ದು, ಉಳಿದಂತೆ ಕೆ.ವಿ ಕಾಮತ್, ಸುಧಾಮೂರ್ತಿ ತೇಜಸ್ವಿನಿ ಅನಂತ್ಕುಮಾರ್, ಪ್ರಕಾಶ್ ಶೆಟ್ಟಿ, ಉದ್ಯಮಿ ವಿಜಯ್ ಸಂಕೇಶ್ವರ್ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರರಾವ್ ಸೇರಿದಂತೆ ಹಲವರ ಹೆಸರು ಕೇಳಿ ಬಂದಿವೆ.

ರಾಜ್ಯಸಭಾ ಸ್ಥಾನಕ್ಕೆ ಆಕಾಂಕ್ಷಿಗಳು ಹೆಚ್ಚಾಗಿದ್ದು, ಯಾರನ್ನು ಆಯ್ಕೆ ಮಾಡಬೇಕು. ಯಾರಿಗೆ ಟಿಕೆಟ್ ಫೈನಲ್ ಮಾಡಬೇಕು ಎನ್ನುವ ಕುರಿತು ಮಹತ್ವದ ಚರ್ಚೆ ನಡೆಸಲಾಗುತ್ತದೆ. ಇದೇ ವೇಳೆ ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಮಾಲೋಚನೆ ನಡೆಸಲಾಗುತ್ತದೆ.  ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿದ ವಿಷಯಗಳ ಆಧಾರದಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್‍ಗೆ ರವಾನಿಸಲಾಗುತ್ತಿದ್ದು, ಅಂತಿಮವಾಗಿ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್ ಪ್ರಕಟ ಮಾಡಲಿದೆ.

ಬಿಜೆಪಿ ಕೋರ್ ಕಮಿಟಿ ಸಭೆ ಹಿನ್ನೆಲೆಯಲ್ಲಿ, ಶಾಸಕ ಉಮೇಶ್ ಕತ್ತಿ ತಮ್ಮ ಸಹೋದರ ರಮೇಶ್ ಕತ್ತಿ ಪರವಾಗಿ ಲಾಭಿ ಮುಂದುವರಿಸಿದ್ದಾರೆ. ಕೋರ್ ಕಮಿಟಿ ಸದಸ್ಯರಾದ ಸಚಿವ ಜಗದೀಶ್ ಶೆಟ್ಟರ್ ನಿವಾಸಕ್ಕೆ ಸಹೋದರ ರಮೇಶ್ ಕತ್ತಿ ಜೊತೆ ತೆರಳಿದ ಉಮೇಶ್ ಕತ್ತಿ, ಕೋರ್ ಕಮಿಟಿ ಸಭೆಯಲ್ಲಿ ತಮ್ಮ ಪರ ಒಲವು ವ್ಯಕ್ತಪಡಿಸಬೇಕು ಎಂದು ಕೋರಿದ್ದಾರೆ.

ಹಾಲಿ ಸದಸ್ಯ ಪ್ರಭಾಕರ್ ಕೋರೆ ಅಧಿಕಾರಾವಧಿ ಕೊನೆಗೊಳ್ಳಲಿದ್ದು, ಪುನಃ ಮತ್ತೊಂದು ಅವಧಿಗೆ ಅವರನ್ನೇ ಆಯ್ಕೆ ಮಾಡುವ ಬಗ್ಗೆ ಚರ್ಚೆ ನಡೆಯಲಿದೆ. ಈ ನಡುವೆ ಶಾಸಕ ಉಮೇಶ್ ಕತ್ತಿ ಸಹೋದರ ರಮೇಶ್ ಕತ್ತಿ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದು, ಈಗಾಗಲೂ ತಾವು ಕೂಡ ಆಕಾಂಕ್ಷಿ ಎಂಬುದನ್ನು ಬಹಿರಂಗವಾಗಿಯೇ ಹೇಳಿದ್ದಾರೆ.

ವಿಧಾನಸಭೆಯಿಂದ ವಿಧಾನಪರಿಷತ್ಗೆ ನಾಲ್ವರನ್ನು ಆಯ್ಕೆ ಮಾಡಲು ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಕುರಿತು ಕೋರ್ಕಮಿಟಿ ತೀರ್ಮಾನಿಸಲಿದೆ. ಆಪರೇಷನ್ ಕಮಲದಲ್ಲಿ ಮುಖ್ಯ ಪಾತ್ರ ವಹಿಸಿದ್ದ ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್, ಎಚ್.ವಿಶ್ವನಾಥ್, ಎಂ.ಟಿ.ಬಿ.ನಾಗರಾಜ್, ಮಾಜಿ ಪರಿಷತ್ ಸದಸ್ಯರಾದ ಗೋ.ಮಧುಸೂದನ್, ಭಾರತಿ ಶೆಟ್ಟಿ, ಚಿತ್ರನಟಿ ಶೃತಿ ಸೇರಿದಂತೆ ಅನೇಕರು ಆಕಾಂಕ್ಷಿಗಳಾಗಿದ್ದಾರೆ.

ಶಿಕ್ಷಣ, ಸಾಹಿತ್ಯ, ಪತ್ರಿಕೋದ್ಯಮ, ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಐವರನ್ನು ವಿಧಾನಪರಿಷತ್ಗೆ ನಾಮನಿರ್ದೇಶನ ಮಾಡಲು ಅವಕಾಶವಿದೆ. ಈಗಾಗಲೇ ನಾಮನಿರ್ದೇಶನ ಮಾಡಲು ಮುಖ್ಯಮಂತ್ರಿಗೆ ಸಚಿವ ಸಂಪುಟ ಸಭೆ ಸಂಪೂರ್ಣ ಅಧಿಕಾರ ನೀಡಿದೆ. ಔಪಚಾರಿಕವಾಗಿ ಪಕ್ಷದ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

Facebook Comments