17 ಕ್ಷೇತ್ರಗಳ ಉಪಚುನಾವಣೆ ಗೆಲುವಿಗೆ ಬಿಜೆಪಿ ರಣತಂತ್ರ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.6-ಮುಂಬರುವ 17 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಬಿಬಿಎಂಪಿಯಲ್ಲಿ ಅಧಿಕಾರ ಗದ್ದುಗೆ ಹಿಡಿಯುವುದು, ಪಕ್ಷ ಸಂಘಟನೆ, ಸದಸ್ಯತ್ವವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಸುವುದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವುದು ಸೇರಿದಂತೆ ಮಹತ್ವದ ವಿಷಯಗಳ ಬಗ್ಗೆ ಇಂದು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಯಿತು.

ಬಿಜೆಪಿ ನೂತನ ರಾಜಾಧ್ಯಕ್ಷರಾಗಿ ನಳೀನ್‍ಕುಮಾರ್ ಆಯ್ಕೆಯಾದ ಬಳಿಕ ನಡೆದ ಮೊದಲ ಸಭೆಗೆ ಕೋರ್‍ಕಮಿಟಿ ಸದಸ್ಯರಾದ ಡಿ.ವಿ.ಸದಾನಂದಗೌಡ, ಪ್ರಹ್ಲಾದ್ ಜೋಷಿ, ಜಗದೀಶ್ ಶೆಟ್ಟರ್, ಈಶ್ವರಪ್ಪ, ಆರ್.ಅಶೋಕ್, ಅರವಿಂದ ಲಿಂಬಾವಳಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು. ಸಭೆಯಲ್ಲಿ ಮುಖ್ಯವಾಗಿ ಯಾವ ಯಾವ ಭಾಗದಲ್ಲಿ ಪಕ್ಷ ಸಂಘಟನೆ ಹಿನ್ನಡೆಯಾಗಿದೆಯೋ ಅಂತಹ ಕಡೆ ಒತ್ತು ಕೊಟ್ಟು ಸದಸ್ಯತ್ವವನ್ನು ಹೆಚ್ಚು ಪರಿಣಾಮಕಾರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ.

ಮುಖ್ಯವಾಗಿ ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಮಂಡ್ಯ ಸೇರಿದಂತೆ ಮತ್ತಿತರ ಭಾಗಗಳಲ್ಲಿ ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸಲು ಪದಾಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. ಇನ್ನು ಕಾಂಗ್ರೆಸ್- ಜೆಡಿಎಸ್‍ನ 17 ಅನರ್ಹ ಶಾಸಕರ ವಿಚಾರಣೆ ಇದೇ 11 ರಿಂದ ಸುಪ್ರೀಂಕೋರ್ಟ್‍ನಲ್ಲಿ ಆರಂಭವಾಗಲಿದೆ.

ಒಂದು ವೇಳೆ ಹಿಂದಿನ ವಿಧಾನಸಭೆ ಸ್ಪೀಕರ್ ರಮೇಶ್‍ಕುಮಾರ್ ನೀಡಿರುವ ಆದೇಶವನ್ನು ನ್ಯಾಯಾಲಯ ರದ್ದುಪಡಿಸಿದರೆ ಸಚಿವ ಸಂಪುಟ ವಿಸ್ತರಣೆ, ತೆರವಾಗಿರುವ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ. ಉಪಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆಯೂ ಚರ್ಚೆ ನಡೆಸಲಾಯಿತು.

ಬೆಂಗಳೂರಿನ ರಾಜರಾಜೇಶ್ವರಿನಗರ, ಮಹಾಲಕ್ಷ್ಮಿಲೇಔಟ್, ಕೆ.ಆರ್.ಪುರಂ, ಯಶವಂತಪುರ, ಶಿವಾಜಿನಗರ, ಕೆ.ಆರ್.ಪೇಟೆ, ಹುಣಸೂರು, ಮಸ್ಕಿ, ಗೋಕಾಕ್, ಅಥಣಿ, ಕಾಗವಾಡ, ಹಿರೇಕೆರೂರು, ಯಲ್ಲಾಪುರ, ವಿಜಯನಗರ, ಹೊಸಕೋಟೆ, ಚಿಕ್ಕಬಳ್ಳಾಪುರ ಹಾಗೂ ರಾಣೆಬೆನ್ನೂರು ಕ್ಷೇತ್ರಗಳಿಗೆ ಯಾವುದೇ ಸಂದರ್ಭದಲ್ಲಿ ಚುನಾವಣಾ ಆಯೋಗ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ. ಹೀಗಾಗಿ ಕ್ಷೇತ್ರಗಳಿಗೆ ಯಾವ ಯಾವ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು? ಒಂದು ವೇಳೆ ನ್ಯಾಯಾಲಯ ಸ್ಪೀಕರ್ ಆದೇಶವನ್ನು ಎತ್ತಿ ಹಿಡಿದರೆ ಅನರ್ಹ ಶಾಸಕರ ಕುಟುಂಬದವರಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ಚರ್ಚೆ ನಡೆಯಿತು.

ಮುಂದಿನ ದಿನಗಳಲ್ಲಿ ಸರ್ಕಾರ ಸುಭದ್ರವಾಗಿರಬೇಕಾದರೆ 17 ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನು ಗಳಿಸಬೇಕು. ಇದರಿಂದ ಸರ್ಕಾರಕ್ಕೆ ಅಸ್ಥಿರತೆ ಭೀತಿ ಎದುರಾಗುವುದಿಲ್ಲ. ನಿಗಮ ಮಂಡಳಿ ಸೇರಿದಂತೆ ಸರ್ಕಾರದ ಆಯಾ ಕಟ್ಟಿನಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೂ ಆದ್ಯತೆ ನೀಡಲು ತೀರ್ಮಾನಿಸಲಾಗಿದೆ.

ಅಧಿಕಾರದ ಆಸೆಗಾಗಿ ಬೇರೆ ಪಕ್ಷದಿಂದ ಬಂದವರಿಗೆ ಆದ್ಯತೆ ನೀಡದೆ ಪಕ್ಷನಿಷ್ಠರಿಗೆ ನಿಗಮ ಮಂಡಳಿಯಲ್ಲಿ ಆದ್ಯತೆ ನೀಡಿ ಪಕ್ಷ ಸಂಘಟನೆಗೆ ಒತ್ತು ಕೊಡಬೇಕು. ಇದೇ ತಿಂಗ¼ ನಡೆಯಲಿರುವ ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಗದ್ದುಗೆ ಹಿಡಿಯಲು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕೆಂಬ ಸೂಚನೆಯನ್ನು ನೀಡಲಾಗಿದೆ.

Facebook Comments