ಇಂದೇ ಹೊಸ ಸಿಎಂ ಹೆಸರು ಫೈನಲ್..!?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.27- ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಇಂದು ರಾತ್ರಿ ಖಾಸಗಿ ಹೊಟೇಲ್‍ನಲ್ಲಿ ನಡೆಯಲಿದ್ದು, ಬಹುತೇಕ ನೂತನ ನಾಯಕನ ಆಯ್ಕೆ ಇಂದೇ ಆಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆ ಹೆಚ್ಚಿನ ಮಹತ್ವ ಪಡೆದುಕೊಂಡಿದ್ದು, ರಾಜಕೀಯವಾಗಿ ತೀವ್ರ ಕುತೂಹಲ ಕೆರಳಿಸಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ರಾಜೀನಾಮೆ ನೀಡಿರುವುದರಿಂದ ನೂತನ ನಾಯಕನ ಆಯ್ಕೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಈ ಸಂಬಂಧ ಇಂದು ಸಂಜೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ಶಾಸಕಾಂಗ ಪಕ್ಷದ ನೂತನ ನಾಯಕನನ್ನು ಆಯ್ಕೆ ಮಾಡುವ ಸಂಬಂಧ ಶಾಸಕರ ಅಭಿಪ್ರಾಯ ಪಡೆಯಲಾಗುತ್ತದೆ.

ರಾಜ್ಯ ಉಸ್ತುವಾರಿ ಅರುಣ್‍ಸಿಂಗ್, ಸಹ ಉಸ್ತುವಾರಿ ಡಿ.ಕೆ.ಅರುಣ, ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಕಿಶನ್‍ರೆಡ್ಡಿ, ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಸೇರಿದಂತೆ ಪ್ರಮುಖ ನಾಯಕರು ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ನೂತನ ನಾಯಕನ ಆಯ್ಕೆ ಸಂಬಂಧ ಶಾಸಕರ ಅಭಿಪ್ರಾಯ ಪಡೆಯುವ ಸಂದರ್ಭದಲ್ಲಿ ಒಬ್ಬರ ಹೆಸರು ಸಭೆಯಲ್ಲಿ ಅಂತಿಮವಾದರೆ ಇಂದೇ ನೂತನ ನಾಯಕನ ಆಯ್ಕೆಯಾಗಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಒಂದು ವೇಳೆ ಒಂದಕ್ಕಿಂತ ಹೆಚ್ಚು ಹೆಸರುಗಳು ಸಭೆಯಲ್ಲಿ ಕೇಳಿಬಂದರೆ ದೆಹಲಿಯಲ್ಲಿ ಅಂತಿಮವಾಗಿ ನೂತನ ನಾಯಕನ ಆಯ್ಕೆ ಪ್ರಕಟವಾಗುವ ಸಾಧ್ಯತೆಗಳಿವೆ.

ಹೀಗಾಗಿ ರಾತ್ರಿ ನಡೆಯುವ ಶಾಸಕಾಂಗ ಪಕ್ಷದ ಸಭೆಯ ನಿರ್ಧಾರದ ಬಗ್ಗೆ ತೀವ್ರ ಕುತೂಹಲ ಕೆರಳಿಸಿದ್ದು, ಎಲ್ಲರ ದೃಷ್ಟಿ ಶಾಸಕಾಂಗ ಪಕ್ಷದ ಸಭೆಯತ್ತ ನೆಟ್ಟಿದೆ.ಈಗಾಗಲೇ ಕೇಳಿಬಂದಿರುವಂತೆ ಮುಂದಿನ ಮುಖ್ಯಮಂತ್ರಿಯಾಗುವವರ ಪಟ್ಟಿಯಲ್ಲಿ ಹಲವು ಹೆಸರುಗಳು ಪ್ರಸ್ತಾಪವಾಗಿವೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಾಜಿ ಸಚಿವರಾದ ಬಸವರಾಜ ಬೊಮ್ಮಾಯಿ, ಮುರುಗೇಶ್ ನಿರಾಣಿ, ಸಿ.ಟಿ.ರವಿ, ಶಾಸಕರಾದ ಸುನಿಲ್‍ಕುಮಾರ್, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಹೆಸರುಗಳು ಪ್ರಮುಖವಾಗಿ ಕೇಳಿಬಂದಿವೆ.

ಹೀಗಾಗಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾವ ನಿರ್ಧಾರ ಹೊರಬರಲಿದೆ, ಬಿಜೆಪಿಯ ಕೋರ್ ಕಮಿಟಿ ಯಾವ ನಿಲುವು ತಳೆಯಲಿದೆ ಮತ್ತು ಸಂಸದೀಯ ಮಂಡಳಿಯಿಂದ ಹೊರಬರುವ ನೂತನ ನಾಯಕನ ಹೆಸರು ಯಾವುದು ಎಂಬ ಕಾತರವೂ ಹೆಚ್ಚಾಗಿದೆ. ಕೊನೆ ಕ್ಷಣದವರೆಗೂ ಮುಂದಿನ ಮುಖ್ಯಮಂತ್ರಿ ಯಾರೆಂಬ ರಹಸ್ಯ ಉಳಿದುಕೊಂಡು ಬರುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ.

ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಈಗಾಗಲೇ ಜಾತಿವಾರು, ಪ್ರಾದೇಶಿಕತೆ, ಜನಪ್ರಿಯತೆ ಮೊದಲಾದ ಆಯಾಮಗಳಲ್ಲಿ ಚರ್ಚೆ ನಡೆದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ನೂತನ ಮುಖ್ಯಮಂತ್ರಿ ಆಯ್ಕೆ ಕುರಿತಂತೆ ಬಿಜೆಪಿ ಕೇಂದ್ರದ ನಾಯಕರು ಸಭೆಗಳನ್ನು ನಡೆಸಿ ಈಗಾಗಲೇ ಸಮಾಲೋಚನೆ ನಡೆಸಿದ್ದಾರೆ. ಕೇಂದ್ರದ ವೀಕ್ಷಕರು ಶಾಸಕರ ಅಭಿಪ್ರಾಯ ಸಂಗ್ರಹಿಸಿದ ನಂತರ ಹೊರಬೀಳುವ ನಿರ್ಧಾರ ಹೆಚ್ಚಿನ ಮಹತ್ವ ಪಡೆದುಕೊಳ್ಳಲಿದೆ.

Facebook Comments