ಬಂದ್ ಬಂದೋಬಸ್ತ್ ಗೆ ಕಮಿಷನರ್ ಸೂಚನೆ
ಬೆಂಗಳೂರು, ಡಿ.3- ಕನ್ನಡಪರ ಸಂಘಟ ನೆಗಳ ಒಕ್ಕೂಟ ಡಿ.5ರಂದು ನಡೆಸಲಿರುವ ಕರ್ನಾಟಕ ಬಂದ್ಗೆ ಸೂಕ್ತ ಬಂದೋಬಸ್ತ್ ಮಾಡಿಕೊಳ್ಳಬೇಕೆಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ಪಂಥ್ ಅವರು ನಗರದ ಎಲ್ಲ ಠಾಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಆಸ್ತಿ ಪಾಸ್ತಿ ಕಾಪಾಡುವಂತೆ ಆಯುಕ್ತರು ಆದೇಶಿಸಿದ್ದಾರೆ.
ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಮಾಡಿರುವುದರಿಂದ ಖಂಡಿಸಿ ಕನ್ನಡ ಸಂಘಟನೆಗಳ ಒಕ್ಕೂಟ ಡಿ.5ರಂದು ಕರ್ನಾಟಕ ಬಂದ್ಗೆ ಕರೆ ನೀಡಿದ್ದು, ನಾಳೆ ಮಧ್ಯರಾತ್ರಿಯಿಂದಲೇ ಸಶಸ್ತ್ರ ಪೊಲೀಸ್ ಸಿಬ್ಬಂದಿಗಳನ್ನು ಆಯಾಕಟ್ಟಿನ ಸ್ಥಳಗಳಲ್ಲಿ ಕರ್ತವ್ಯಕ್ಕೆ ನಿಯೋಜಿಸಬೇಕೆಂದು ಆಯುಕ್ತರು ಸೂಚಿಸಿದ್ದಾರೆ.
ಡಿ.5ರಂದು ಬೆಳಗ್ಗೆ 4.30ರ ವೇಳೆಗೆ ಎಲ್ಲ ಠಾಣಾಧಿಕಾರಿಗಳು ಚೀತಾ ಮತ್ತು ಹೊಯ್ಸಳ ವಾಹನಗಳೊಂದಿಗೆ ತಮ್ಮ ತಮ್ಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಸ್ತಿನಲ್ಲಿರಬೇಕು. ವಿಶೇಷವಾಗಿ ಕೆಎಸ್ಆರ್ಟಿಸಿ, ಬಿಎಂಟಿಸಿ ಡಿಪೋಗಳು, ಬಸ್ ನಿಲ್ದಾಣಗಳು, ಮೆಟ್ರೋ ಮತ್ತು ರೈಲ್ವೆ ನಿಲ್ದಾಣಗಳ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ಬಂದ್ಗೆ ಬೆಂಬಲ ವ್ಯಕ್ತಪಡಿಸದೆ ವಾಹನ ಚಾಲನೆ ಮಾಡುವವರನ್ನು ಬಲವಂತವಾಗಿ ತಡೆಯುವ ಸಾಧ್ಯತೆಗಳಿರುವುದರಿಂದ ನಗರಾದ್ಯಂತ ಎಲ್ಲ ಸ್ಥಳಗಳಲ್ಲಿ ಸೂಕ್ತ ಬಂದೋಬಸ್ತ್ ಏರ್ಪಡಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವಂತೆ ಠಾಣಾಧಿಕಾರಿಗಳಿಗೆ ತಿಳಿಸಿದ್ದಾರೆ.
ಬಂದ್ ಸಂಬಂಧ ಸಿಟಿ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್ ವರೆಗೆ ಅಥವಾ ಟೌನ್ಹಾಲ್ ಬಳಿಯಿಂದ ಮೈಸೂರು ಬ್ಯಾಂಕ್ ಸರ್ಕಲ್ ಮೂಲಕ ಫ್ರೀಡಂಪಾರ್ಕ್ ವರೆಗೆ ಪ್ರತಿಭಟನಾ ಮೆರವಣಿಗೆ ಮಾಡುವ ಸಾಧ್ಯತೆಯಿದ್ದು, ಈ ಬಗ್ಗೆ ಮುಂಚಿತವಾಗಿ ಮಾಹಿತಿ ಸಂಗ್ರಹಿಸಿ ಅಗತ್ಯ ಪೊಲೀಸ್ ಬಂದೋಬಸ್ತ್ ಮತ್ತು ಸಂಚಾರ ವ್ಯವಸ್ಥೆ ಕಾಪಾಡುವುದು ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಅವರು ತಮ್ಮ ತಮ್ಮ ಠಾಣಾ ವ್ಯಾಪ್ತಿಯಲ್ಲಿ ವಿಡಿಯೋ ಚಿತ್ರೀಕರಣ ಮಾಡಿಸುವಂತೆ ಕಮಲ್ಪಂಥ್ ಅವರು ಸೂಚಿಸಿದ್ದಾರೆ.