ರಾಜ್ಯದಲ್ಲಿ ನಾಳೆಯವರೆಗೂ ಮೋಡ ಕವಿದ ವಾತಾವರಣ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.4-ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ಬುರೇವಿ ಚಂಡ ಮಾರುತದ ತೀವ್ರತೆ ಕಡಿಮೆಯಾಗಿದ್ದು, ನಾಳೆಯವರೆಗೂ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಕಳೆದೆರಡು ದಿನಗಳಿಂದ ಮೋಡ ಕವಿದಿದ್ದು, ತಂಪಾದ ವಾತಾವರಣವಿದೆ. ಕೆಲವೆಡೆ ಆಗಾಗ್ಗೆ ತುಂತುರು ಮಳೆಯಾಗುತ್ತಿದೆ.

ಹವಾ ಮುನ್ಸೂಚನೆ ಪ್ರಕಾರ ನಾಳೆಯವರೆಗೂ ಮೋಡ ಮುಸುಕಿದ ವಾತಾವರಣ ಕಂಡುಬರಲಿದ್ದು, ಚದುರಿದಂತೆ ಅಲ್ಲಲ್ಲಿ ಹಗುರ ಮಳೆಯಾಗಬಹುದು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು.

ಬುರೇವಿ ಚಂಡ ಮಾರುತ ಭೂ ಸ್ಪರ್ಶವಾದ ನಂತರ ಅದರ ತೀವ್ರತೆ ಕಡಿಮೆಯಾಗಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಆದರೆ ತಂಪಾದ ಹವೆ ಹೆಚ್ಚಾಗಿರುವುದರಿಂದ ಗರಿಷ್ಠ ತಾಪಮಾನದಲ್ಲಿ ಇಳಿಕೆಯಾಗಿದ್ದು, ಚಳಿ ಹೆಚ್ಚಾಗಿದೆ ಎಂದರು.

ಮುಂಗಾರು ಹಂಗಾಮಿನ ವಿವಿಧ ಬೆಳೆಗಳ ಕೊಯ್ಲಿನ ಸಮಯವಾಗಿರುವುದರಿಂದ ರೈತರು ಸಹಜವಾಗಿ ಆತಂಕಕ್ಕೆ ಒಳಗಾಗಿದ್ದಾರೆ. ಆದರೆ, ಆತಂಕ ಪಡುವಷ್ಟು ಭಾರೀ ಪ್ರಮಾಣದ ಮಳೆಯಾಗುವುದಿಲ್ಲ ಎಂದರು.

ಭಾನುವಾರ ವಾತಾವರಣ ಸಹಜ ಸ್ಥಿತಿಗೆ ಮರಳಲಿದ್ದು, ಮೋಡದ ಪ್ರಮಾಣ ಕಡಿಮೆಯಾಗಿ ಬಿಸಿಲು ಬರಲಿದೆ. ಆ ನಂತರ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿ ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗುವುದರಿಂದ ಚಳಿಯ ತೀವ್ರತೆ ಹೆಚ್ಚಾಗಲಿದೆ ಎಂದು ಹೇಳಿದರು.

Facebook Comments