ಉಪ ಚುನಾವಣೆ : ನಾಮಪತ್ರ ವಾಪಸ್ ಗಡುವು ಅಂತ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.19- ರಾಜರಾಜೇಶ್ವರಿನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರವನ್ನು ವಾಪಸ್ ಪಡೆಯುವ ಅವಧಿ ಇಂದು ಮುಕ್ತಾಯವಾಯಿತು. ಇಂದು ಸಂಜೆ ವೇಳೆಗೆ ಆಯಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ಅಂತಿಮ ವಾಗಿ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಿದ್ದಾರೆ.

ಅ.9ರಿಂದ 16ರವರೆಗೆ ಎರಡೂ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಅ.17ರಂದು ಪರಿಶೀಲನೆ ನಡೆಸಿದ್ದು, ನಾಲ್ಕು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕøತಗೊಂಡಿದ್ದವು.

ಶಿರಾ ಕ್ಷೇತ್ರದಲ್ಲಿ 17 ಅಭ್ಯರ್ಥಿಗಳು ಹಾಗೂ ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ 23 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿದ್ದವು. ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ.ಜಯಚಂದ್ರ, ಬಿಜೆಪಿಯಿಂದ ಡಾ.ರಾಜೇಶ್‍ಗೌಡ, ಜೆಡಿಎಸ್ ಅಭ್ಯರ್ಥಿಯಾಗಿ ಅಮ್ಮಾಜಮ್ಮ ಸೇರಿದಂತೆ 17 ಮಂದಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.

ರಾಜರಾಜೇಶ್ವರಿನಗರದಲ್ಲಿ ಕಾಂಗ್ರೆಸ್‍ನಿಂದ ಎಚ್.ಕುಸುಮಾ, ಬಿಜೆಪಿಯಿಂದ ಮುನಿರತ್ನ ಹಾಗೂ ಜೆಡಿಎಸ್‍ನಿಂದ ವಿ.ಕೃಷ್ಣಮೂರ್ತಿ ಅಭ್ಯರ್ಥಿಯಗಳಾ ಸ್ಪರ್ಧಿಸಿದ್ದಾರೆ. ಈಗಾಗಲೇ ಚುನಾವಣಾ ಕಣದಲ್ಲಿರುವ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.

ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪ ನಿರಂತರವಾಗಿ ನಡೆಯುತ್ತಿದೆ. ನ.3ರಂದು ಎರಡೂ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ನ.10ರಂದು ಮತ ಎಣಿಕೆ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ.

Facebook Comments