ಬಿಜೆಪಿಯಲ್ಲಿ ಮೂಲ-ವಲಸಿಗ ಎಂಬ ಪ್ರಶ್ನೆಯೇ ಬರುವುದಿಲ್ಲ : ಬಿ.ವೈ.ವಿಜಯೇಂದ್ರ
ಬೆಂಗಳೂರು,ನ.28- ಬಿಜೆಪಿಗೆ ಬಂದ ಮೇಲೆ ಮೂಲ-ವಲಸಿಗ ಎಂಬ ಪ್ರಶ್ನೆಯೇ ಬರುವುದಿಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಮುಖ್ಯಮಂತ್ರಿ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಸಿದ್ದಾಂತವನ್ನು ಒಪ್ಪಿಕೊಂಡು ಬಂದ ಮೇಲೆ ಮೂಲ-ವಲಸಿಗ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಅವರು ಕೂಡ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲವೆಂದು ಸ್ಪಷ್ಟಪಡಿಸಿದರು.
ನಿನ್ನೆ ರಾತ್ರಿ ಸಚಿವರು ಸಭೆ ನಡೆಸಿರುವ ಬಗ್ಗೆ ಯಾವುದೆ ಮಾಹಿತಿ ಇಲ್ಲ. ನಾವು ಪಕ್ಷ ಸೂಚಿಸಿದ ನಿರ್ದೇಶನಗಳನ್ನು ಪಾಲನೆ ಮಾಡುತ್ತೇವೆ. ನಾನು ಒಬ್ಬ ಸಾಮಾನ್ಯ ಕಾರ್ಯಕರ್ತ. ಬೇರೆ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡುವಷ್ಟು ದೊಡ್ಡವನಲ್ಲ ಎಂದು ಸ್ಪಷ್ಟಪಡಿಸಿದರು.
ಯಾರಿಗೆ ಯಾವ ಸಂದರ್ಭದಲ್ಲಿ ಏನು ಸ್ಥಾನಮಾನ ಕೊಡಬೇಕು ಎಂಬುದನ್ನು ಪಕ್ಷದ ವರಿಷ್ಠರು ಹಾಗೂ ಮುಖ್ಯಮಂತ್ರಿಯವರು ನಿರ್ಧರಿಸುತ್ತಾರೆ. ನಾನು ಯಾವುದೇ ವಿಷಯದಲ್ಲೂ ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದರು. ಬಿಜೆಪಿಗೆ ಬಂದು ಅವರೆಲ್ಲರೂ ಶಕ್ತಿ ತುಂಬಿರುವಾಗ ಊಹಾಪೋಹಗಳ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆಗೆ ಪ್ರಯತ್ನ ನಡೆಸಿರುವುದು ನನಗೂ ಕೂಡ ಆಶ್ಚರ್ಯ ತಂದಿದೆ ಎಂದು ಹೇಳಿದರು.
ಯಾವ ಕಾರಣಕ್ಕಾಗಿ ಅವರು ಇಂಥ ಪ್ರಯತ್ನ ಮಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಸದ್ಯ ಆರೋಗ್ಯ ಸ್ಥಿತಿ ಸುಧಾರಿಸಿದೆ. ಎಲ್ಲವೂ ಸುಖಾಂತ್ಯ ಕಾಣಲಿದೆ ಎಂಬ ವಿಶ್ವಾಸವನ್ನು ವ್ಯಕ್ತಿಪಡಿಸಿದರು.