ಅಮಿತ್ ಶಾ ಭೇಟಿಯಾದ ಬಿ.ವೈ. ವಿಜಯೇಂದ್ರ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಡಿ.14- ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಯಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಅವರು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಅಮಿತ್ ಷಾ ಅವರ ಸೂಚನೆ ಮೇರೆಗೆ ನವದೆಹಲಿಗೆ ತೆರಳಿದ್ದ ವಿಜಯೇಂದ್ರ ಸುಮಾರು ಹತ್ತು ನಿಮಿಷಗಳ ಕಾಲ ರಾಷ್ಟ್ರೀಯ ಅಧ್ಯಕ್ಷರ ಜೊತೆ ಪಕ್ಷದ ಬೆಳವಣಿಗೆ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದಾರೆ.

ಜೆಡಿಎಸ್‍ನ ಭದ್ರಕೋಟೆಯಾಗಿದ್ದ ಕೆ.ಆರ್.ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ಗೆಲುವಿಗೆ ವಿಜಯೇಂದ್ರರ ಪಾತ್ರ ಪ್ರಮುಖವಾಗಿತ್ತು. ಸದ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿರುವ ವಿಜಯೇಂದ್ರ ಉಪ ಚುನಾವಣೆ ಫಲಿತಾಂಶದ ಬಳಿಕ ಪ್ರಮುಖ ನಾಯಕರಾಗಿ ಹೊರಹೊಮ್ಮಿದ್ದಾರೆ.

ಪಕ್ಷದೊಳಗಿನ ಒಂದು ಗುಂಪು ವಿಜಯೇಂದ್ರ ಅವರನ್ನು ಮೇಲ್ಮನೆಗೆ ನಾಮಕರಣ ಮಾಡಿ ಸಚಿವರನ್ನಾಗಿ ಮಾಡಬೇಕೆಂಬ ಒತ್ತಡ ಹಾಕಿದೆ. ಆದರೆ ಸಿಎಂ ಯಡಿಯೂರಪ್ಪ ಮಾತ್ರ ಇದಕ್ಕೆ ಸೊಪ್ಪು ಹಾಕಿಲ್ಲ. ವೀರಶೈವ ಸಮುದಾಯದ ಯುವ ನಾಯಕನಾಗಿ ಹೊರಹೊಮ್ಮುತ್ತಿರುವ ಅವರನ್ನು ಮುಂಚೂಣಿಗೆ ತರಬೇಕೆಂಬುದು ಕೇಂದ್ರ ನಾಯಕರ ಉದ್ದೇಶವಾಗಿದೆ.

ಹೀಗಾಗಿ ಪಕ್ಷ ಸಂಘಟನೆಯನ್ನು ಬಲಪಡಿಸುವ ಕುರಿತಂತೆ ಅಮಿತ್ ಷಾ ವಿಜಯೇಂದ್ರರಿಗೆ ಕೆಲವು ಸೂಕ್ತವಾದಂತಹ ಸಲಹೆ ಮತ್ತು ಮಾರ್ಗದರ್ಶನ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Facebook Comments