ಸಚಿವಾಕಾಂಕ್ಷಿಗಳಿಗೆ ನಿರಾಸೆಯನ್ನುಂಟುಮಾಡಿದ ಉಪಚುನಾವಣೆ ಘೋಷಣೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.1- ರಾಜ್ಯದ ರಾಜರಾಜೇಶ್ವರಿ ನಗರ ಮತ್ತು ತುಮಕೂರು ಜಿಲ್ಲೆ ಯ ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಹಾಗೂ ವಿಧಾನ ಪರಿಷತ್‍ನ ಪದವೀಧರ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಿರುವುದರಿಂದ ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗಲಿರುವುದು ಸಚಿವಾಕಾಂಕ್ಷಿ ಶಾಸಕರಲ್ಲಿ ನಿರಾಸೆ ಮೂಡಿಸಿದೆ.

ಮುಖ್ಯಮಂತ್ರಿ ಯಡಿಯೂರಪ್ಪನವರು ಇದೇ ಶುಕ್ರವಾರ ಇಲ್ಲವೆ ಶನಿವಾರ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆಗೆ ಅನುಮತಿ ಪಡೆದು ಅಕ್ಟೋಬರ್ ಮೊದಲ ವಾರದಲ್ಲಿ ಸಂಪುಟ ವಿಸ್ತರಿಸಲು ಉದ್ದೇಶಿಸಿದ್ದರು.

ಆದರೆ, ನಿನ್ನೆ ಕೇಂದ್ರ ಚುನಾವಣಾ ಆಯೋಗ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದು ಚುನಾವಣಾ ದಿನಾಂಕ ನಿಗದಿ ಮಾಡಿ ಘೋಷಣೆ ಹೊರಡಿಸಿರುವುದರಿಂದ ಸಂಪುಟ ವಿಸ್ತರಣೆ ಸದ್ಯಕ್ಕೆ ಆಗುವ ಸಾಧ್ಯತೆಗಳು ಕಡಿಮೆ ಎಂದು ಹೇಳಲಾಗುತ್ತಿದೆ.

ಸಂಪುಟ ವಿಸ್ತರಣೆ ವಿಚಾರವಾಗಿ ವರಿಷ್ಠರೊಂದಿಗೆ ಸಂಪರ್ಕದಲ್ಲಿದ್ದೇನೆ. ಒಂದೆರಡು ದಿನದಲ್ಲೇ ದೆಹಲಿಗೆ ತೆರಳುವ ಯೋಚನೆಯಿತ್ತು. ಆದರೆ, ಈಗ ಉಪ ಚುನಾವಣೆ ಘೋಷಣೆಯಾಗಿದೆ. ವರಿಷ್ಠರು ಬರಲು ಹೇಳಿದರೆ ಹೋಗಿ ಚರ್ಚಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

ಉಪ ಚುನಾವಣೆ ಘೋಷಣೆಯಾಗಿದೆ ಎಂಬ ಸಿಎಂ ಹೇಳಿಕೆಯಲ್ಲೇ ಸಂಪುಟ ವಿಸ್ತರಣೆ ಮುಂದೂಡಿಕೆಯ ಸುಳಿವೂ ಇದೆ. ಆಕಾಂಕ್ಷಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ದೃಷ್ಟಿಯಿಂದ ದಿಲ್ಲಿಗೆ ಹೋಗುವ ಬಗ್ಗೆ ಅವರು ಪ್ರಸ್ತಾಪಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

 

Facebook Comments

Sri Raghav

Admin