ಘಟಾನುಘಟಿ ನಾಯಕರ ಎಂಟ್ರಿಯಿಂದ ರಂಗೇರಲಿದೆ ಉಪಚುನಾವಣಾ ಕಣ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.16- ಪ್ರತಿಷ್ಠೆಯ ಕಣವಾಗಿರುವ ಸಿಂಧಗಿ ಹಾಗೂ ಹಾನಗಲ್ ಉಪ ಚುನಾವಣಾ ಪ್ರಚಾರ ಕಣಕ್ಕೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ನಾಯಕರು ಧುಮುಕಿದ್ದಾರೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರತಿಷ್ಠೆಯಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಸವಾಲಾಗಿರುವ ಜೆಡಿಎಸ್‍ಗೆ ಅಸ್ತಿತ್ವದ ಪ್ರಶ್ನೆಯಾಗಿರುವ ಈ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಶತಾಯ ಗತಾಯ ಗೆಲುವು ಸಾಸಬೇಕೆಂಬ ಹಿನ್ನೆಲೆಯಲ್ಲಿ ಮೂರೂ ಪಕ್ಷಗಳ ಮುಖಂಡರು ತಂತ್ರ-ಪ್ರತಿತಂತ್ರಗಳನ್ನು ಹೆಣೆದಿದ್ದು , ಪ್ರಚಾರದ ಅಬ್ಬರ ಜೋರಾಗಿದೆ.

ರಾಜಕೀಯ ನಾಯಕರುಗಳ ಆರೋಪ-ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ. ಪರಸ್ಪರ ರಾಜಕೀಯ ಕೆಸರೆರಚಾಟ ತೀವ್ರಗೊಂಡಿದೆ.
ಬಹಿರಂಗ ಸಭೆ, ರೋಡ್ ಶೋ ಮೂಲಕ ರಾಜಕೀಯ ಪಕ್ಷಗಳ ನಾಯಕರು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು , ಮತ್ತೊಂದೆಡೆ ಸ್ಥಳೀಯ ಮುಖಂಡರೊಂದಿಗೆ ಸಭೆ, ಸಮುದಾಯಗಳ ನಾಯಕರೊಂದಿಗೆ ಸಮಾಲೋಚನೆ ನಡೆಸುವ ಮೂಲಕ ಚುನಾವಣೆ ಗೆಲ್ಲುವ ರಣತಂತ್ರದಲ್ಲಿ ತೊಡಗಿದ್ದಾರೆ.

ಎರಡು ಕ್ಷೇತ್ರಗಳ ಹಳ್ಳಿ ಹಳ್ಳಿಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಪ್ರಚಾರ ಬಿರುಸುಗೊಂಡಿದೆ. ಈಗಾಗಲೇ ಸ್ಥಳೀಯ ನಾಯಕರು ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಹಾನಗಲ್ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪಕ್ಷದ ಅಭ್ಯರ್ಥಿ ಶ್ರೀನಿವಾಸ್ ಮಾನೆ ಪರ ಇಂದು ಪ್ರಚಾರ ನಡೆಸಿದರು.

ಸಿಂಧಗಿಯಲ್ಲಿ ಡಿ.ಕೆ.ಶಿವಕುಮಾರ್ ಅಬ್ಬರದ ಪ್ರಚಾರ ನಡೆಸಿದರು. ಎರಡು ಕ್ಷೇತ್ರಗಳಲ್ಲಿ ಬಹಿರಂಗ ಸಭೆ, ರೋಡ್ ಶೋ ನಡೆಸುವ ಮೂಲಕ ತಮ್ಮ ಅಭ್ಯರ್ಥಿಗಳ ಪರ ಮತ ಯಾಚನೆ ಮಾಡಿದರು.ಎಚ್.ಕೆ.ಪಾಟೀಲ್, ದಾವಣಗೆರೆ ಹಾಗೂ ಹುಬ್ಬಳ್ಳಿಯ ಕಾಂಗ್ರೆಸ್ ಮುಖಂಡರು, ನಾಡಗೌಡ, ಶಿವಾನಂದ ಪಾಟೀಲ್, ಎಂ.ಬಿ.ಪಾಟೀಲ್, ಪ್ರಕಾಶ್ ರಾಥೋಡ್ ಮತ್ತಿತರ ಹಲವು ಗಣ್ಯರು ಸಾಥ್ ನೀಡಿದರು.

ಕಳೆದ ಒಂದು ವಾರದಿಂದ ಹಾನಗಲ್‍ನಲ್ಲಿ ಬೀಡು ಬಿಟ್ಟಿರುವ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು ಅಭ್ಯರ್ಥಿ ಶ್ರೀನಿವಾಸ್ ಮಾನೆ ಪರ ವ್ಯಾಪಕ ಪ್ರಚಾರ ನಡೆಸುತ್ತಿದ್ದಾರೆ.ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲಾ ಹಾಗೂ ಕಾಂಗ್ರೆಸ್‍ನ ವರಿಷ್ಠರು ಸಿಂಧಗಿ ಹಾಗೂ ಹಾನಗಲ್ ಕ್ಷೇತ್ರಕ್ಕೆ ಆಗಮಿಸಿ ಪ್ರಚಾರ ನಡೆಸಲಿದ್ದಾರೆ ಎಂದು ಅವರು ಹೇಳಿದರು.

ಜನರು ಬಿಜೆಪಿ ಸರ್ಕಾರದ ಬಗ್ಗೆ ಭ್ರಮ ನಿರಸನ ಹೊಂದಿದ್ದು , ಬದಲಾವಣೆ ಬಯಸುತ್ತಿದ್ದಾರೆ. ಇಂಧನ ಬೆಲೆಗಳು ಹೆಚ್ಚಾಗಿದೆ. ಕೋವಿಡ್ ಪರಿಸ್ಥಿತಿ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ. ರಾಜ್ಯ, ಕೇಂದ್ರ ಸರ್ಕಾರಗಳ ವೈಫಲ್ಯಗಳು ನಮ್ಮ ಗೆಲುವಿಗೆ ಪೂರಕವಾಗಿವೆ ಎಂದು ಹೇಳಿದ್ದಾರೆ.

ಜೆಡಿಎಸ್ ಎರಡು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದೆ. ಸಿಂಧಗಿಯಲ್ಲಿ ಈಗಾಗಲೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಎರಡು ದಿನಗಳ ಕಾಲ ಮೊಕ್ಕಾಂ ಹೂಡಿ ಪ್ರಚಾರ ನಡೆಸಿದ್ದಾರೆ.ಪಕ್ಷದ ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಿ ತಮ್ಮ ಅಭ್ಯರ್ಥಿಯ ಗೆಲುವಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಯುವ ನಾಯಕರಾದ ನಿಖಿಲ್ ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ ಎರಡು ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.ಬಿಜೆಪಿ ಅಭ್ಯರ್ಥಿ ಪರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಸದಾನಂದಗೌಡ, ನಳಿನ್‍ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿ.ವೈ.ವಿಜಯೇಂದ್ರ, ಸಿ.ಟಿ.ರವಿ ಮುಂತಾದ ಪ್ರಮುಖರು ಪ್ರಚಾರದ ಅಖಾಡಕ್ಕೆ ಇಳಿಯಲಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ ಪರ ರಾಮಲಿಂಗಾರೆಡ್ಡಿ , ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ , ಆರ್.ಧೃವನಾರಾಯಣ್, ಮಲ್ಲಿಕಾರ್ಜುನ ಖರ್ಗೆ, ಆರ್.ವಿ.ದೇಶಪಾಂಡೆ, ದಿನೇಶ್ ಗುಂಡೂರಾವ್, ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್ ಮುಂತಾದವರು ಪ್ರಚಾರದ ಅಖಾಡದಲ್ಲಿ ಮತ ಯಾಚನೆ ಮಾಡಲಿದ್ದಾರೆ.

Facebook Comments

Sri Raghav

Admin