ಉಪಚುನಾವಣೆ ನಡೆಯುವ ಕ್ಷೇತ್ರಗಳಿಗೆ ಡಿ.5 ರಂದು ರಜೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.3-ಉಪಚುನಾವಣೆ ನಡೆಯುತ್ತಿರುವ ರಾಜ್ಯದ ಹದಿನೈದು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುವ ಡಿ.5 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಅಥಣಿ, ಕಾಗವಾಡ, ಗೋಕಾಕ, ಯಲ್ಲಾಪುರ, ಹಿರೇಕೆರೂರು, ರಾಣೆಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆ.ಆರ್.ಪುರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಶಿವಾಜಿನಗರ, ಕೃಷ್ಣರಾಜಪೇಟೆ ಹಾಗೂ ಹುಣಸೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.

ಶಿವಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿನ ಸರ್ಕಾರಿ, ಸಂಸ್ಥೆಗಳನ್ನು ಹೊರತುಪಡಿಸಿ ಉಪಚುನಾವಣೆ ನಡೆಯುತ್ತಿರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ , ಶಾಲಾ-ಕಾಲೇಜುಗಳಿಗೆ, ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆಯನ್ನು ಸಿಬ್ಬಂದಿಮತ್ತು ಆಡಳಿತಾ ಸುಧಾರಣಾ ಇಲಾಖೆ ಘೋಷಿಸಿದೆ.

ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿನ ಸರ್ಕಾರಿ ಕಚೇರಿ, ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಹಾಗೂ ಉಪಚುನಾವಣೆ ನಡೆಯುವ ಕ್ಷೇತ್ರಗಳ ಹೊರಗಡೆ ಕೆಲಸ ನಿರ್ವಹಿಸುತ್ತಿರುವ ನೋಂದಾಯಿತ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಡಿ.5 ರಂದು ವೇತನ ಸಹಿತ ರಜೆಯನ್ನು ಘೋಷಿಸಿ ಆದೇಶಿಸಿದೆ.

ಉಪಚುನಾವಣೆ ನಡೆಯುವ ವಿಧಾನಸಭಾ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಖಾಯಂ ಹಾಗೂ ದಿನಗೂಲಿ ಮೇಲೆ ಕೆಲಸ ಮಾಡುವ ನೌಕರರಿಗೂ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಲು ಆದೇಶದಲ್ಲಿ ತಿಳಿಸಲಾಗಿದೆ.

ತುರ್ತು ಸೇವೆಗಳಿಗೆ ಈ ರಜೆಯು ಅನ್ವಯಿಸುವುದಿಲ್ಲ. ಆದರೆ ತುರ್ತು ಸೇವೆಯಡಿ ಕಾರ್ಯನಿರ್ವಹಿಸುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ.

Facebook Comments

Sri Raghav

Admin