ಇನ್ನೆರಡು ದಿನದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.21-ನಾಳೆ ಅಥವಾ ನಾಳಿದ್ದು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದಿಲ್ಲಿ ಹೇಳಿದರು. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಇಲ್ಲವೆ, ಶುಕ್ರವಾರ ಸಚಿವರುಗಳಿಗೆ ಖಾತೆ ಹಂಚಿಕೆ ಮಾಡಲಿದ್ದೇನೆ. ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು.

ಸರ್ಕಾರದಲ್ಲಿ ಅಸಮಾಧಾನ ಇದ್ದೇ ಇರುತ್ತದೆ. ಎಲ್ಲವನ್ನು ಸರಿಪಡಿಸಿಕೊಂಡು ಮುನ್ನಡೆಸಬೇಕು. ನಮ್ಮಲ್ಲಿ ಯಾವುದೇ ರೀತಿಯ ಭಿನ್ನಮತ, ಒಳಜಗಳ ಇಲ್ಲ. ಅಸಮಾಧಾನಗೊಂಡಿದ್ದ ಕೆಲವರನ್ನು ನಾನೇ ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಅವೆಲ್ಲವೂ ಮುಗಿದ ಅಧ್ಯಾಯ ಎಂದು ಸ್ಪಷ್ಟಪಡಿಸಿದರು.

ಬಳಿಕ ಯಡಿಯೂರಪ್ಪ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಈ ವೇಳೆ ಸಚಿವರಾದ ಆರ್.ಅಶೋಕ್, ಬಸವರಾಜಬೊಮ್ಮಾಯಿ, ವಿ.ಸೋಮಣ್ಣ ಸೇರಿದಂತೆ ಬಿಜೆಪಿ ಮುಖಂಡರು ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು.
ಶ್ರೀಗಳೊಂದಿಗೆ ಕೆಲಕಾಲ ಯಡಿಯೂರಪ್ಪ ರಹಸ್ಯವಾಗಿ ಮಾತುಕತೆ ನಡೆಸಿದರು.

Facebook Comments