ಸಂಪುಟ ವಿಸ್ತರಣೆ ವಿಚಾರ ಸಿಎಂಗೆ ಬಿಟ್ಟಿದ್ದು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.25- ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿದರೆ ತಪ್ಪೇನು ಎಂದು ಪರೋಕ್ಷವಾಗಿ ತಾವು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂಬ ಸುಳಿವನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು. ಯಾವಾಗ ಸಂಪುಟ ವಿಸ್ತರಣೆ ಮಾಡಬೇಕೆಂಬುದನ್ನು ಪಕ್ಷದ ಮುಖಂಡರ ಜೊತೆ ಚರ್ಚಿಸಿ ಸೂಕ್ತ ಸಮಯದಲ್ಲಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡುವಂತೆ ಹೇಳುವುದರಲ್ಲಿ ತಪ್ಪೇನಿಲ್ಲ. ಅಷ್ಟಕ್ಕೂ ರಾಜಕಾರಣದಲ್ಲಿ ಯಾರೂ ಕೂಡ ಸನ್ಯಾಸಿಗಳಿಲ್ಲ ಎಂದರು.

ನಮ್ಮನ್ನು ಮಂತ್ರಿ ಮಾಡಿ ಎಂದು ನಾವು ಯಾರ ಬಳಿಯೂ ಅರ್ಜಿ ಹಾಕಿಲ್ಲ. ಅಥವಾ ನಾಳೆ ನಾಡಿದ್ದು ಸಂಪುಟ ವಿಸ್ತರಣೆಯಾಗುತ್ತದೆ ಎಂದು ನಾವು ಕಾಯುತ್ತಾ ಕುಳಿತಿಲ್ಲ. ಅಷ್ಟಕ್ಕೂ ನಾವೆಲ್ಲರೂ ಜಾತ್ರೆ ಮಾಡುವ ರಾಜಕೀಯ ಪಕ್ಷಕ್ಕೆ ಸೇರಿದವರಲ್ಲ ಎಂದು ಪರೋಕ್ಷವಾಗಿ ಕಾಂಗ್ರೆಸ್, ಜೆಡಿಎಸ್‍ಗೆ ಟಾಂಗ್ ನೀಡಿದರು.

Facebook Comments