ಬಿಎಸ್‍ವೈಗೆ ಸಿಕ್ಕಿಲ್ಲ ಹೈಕಮಾಂಡ್ ಸಿಗ್ನಲ್, ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.13- ಉಪಚುನಾವಣೆ ಪೂರ್ಣಗೊಂಡ ಕೂಡಲೇ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಭರವಸೆ ನೀಡಿದ್ದರು. ಆದರೆ, ಇದೀಗ ನವೆಂಬರ್ 20ಕ್ಕೆ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.  ಕಾಂಗ್ರೆಸ್ ಬಂದ ಬಂಡಾಯಶಾಸಕರು ಆಡಳಿತಾರೂಢ ಬಿಜೆಪಿ ಪಕ್ಷದ ಮೇಲೆ ಒತ್ತಡ ಹೇರುತ್ತಿದ್ದಾರೆಂದು ಹೇಳಲಾಗುತ್ತಿದೆ. ಸಂಪುಟ ವಿಸ್ತರಣೆ ಕುರಿತು ಕೇಂದ್ರೀಯ ನಾಯಕತ್ವ ಮುಖ್ಯಮಂತ್ರಿಗಳ ಕೈಗಳನ್ನು ಕಟ್ಟಿಹಾಕಿದಂತಾಗಿದೆ.

ಬಿಹಾರ ರಾಜ್ಯದಲ್ಲಿ ಸರ್ಕಾರ ರಚನೆ ಹಾಗೂ ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ತಡವಾಗುತ್ತಿದೆ ಎಂದು ಹೇಳಲಾಗುತ್ತಿದೆ. ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವುದರಿಂದ ಮತ್ತಷ್ಟು ಶಕ್ತಿ ಹೆಚ್ಚಿಸಿಕೊಂಡಿರುವ ಬಿಜೆಪಿಯಲ್ಲಿ ಮಹತ್ತರ ಬೆಳವಣಿಗೆಗಳು ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹೇಳಿದ್ದು, ಸಚಿವ ಸ್ಥಾನ ಆಕಾಂಕ್ಷಿಗಳ ಓಡಾಟ ಹೆಚ್ಚಿಸುವಂತೆ ಮಾಡಿದೆ.

ಕೇಂದ್ರೀಯ ನಾಯಕರು ಸಂಪುಟ ವಿಸ್ತರಣಗೆ ಗ್ರೀನ್ ಸಿಗ್ನಲ್ ನೀಡುವವರೆಗೂ ಮುಖ್ಯಂತ್ರಿಗಳು ಏನನ್ನೂ ಮಾಡಲು ಸಾಧ್ಯವಿಲ್ಲ. ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರೀಯ ನಾಯಕರನ್ನು ಭೇಟಿ ಮಾಡಿ ಈ ಬಗ್ಗೆ ಅನುಮತಿ ಕೋರಿದ್ದಾರೆ. ಆದರೆ, ನವೆಂಬರ್ 20ರವರೆಗೂ ಅನುಮತಿ ನೀಡಲು ಸಾಧ್ಯವಿಲ್ಲ ಎಂದಿದ್ದು, ಬಿಹಾರ ರಾಜ್ಯದಲ್ಲಿ ಸರ್ಕಾರ ರಚನೆಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಕಳೆದ ಬಾರಿ ಕೂಡ ಸಂಪುಟ ವಿಸ್ತರಣೆ ಮಾಡಲು ಯಡಿಯೂರಪ್ಪ ಅವರಿಗೆ ಕೇಂದ್ರೀಯ ನಾಯಕರು ಒಪ್ಪಿಗೆ ನೀಡಿರಲಿಲ್ಲ. ದೆಹಲಿಗೆ ಯಡಿಯೂರಪ್ಪ ಅವರು ಭೇಟಿ ನೀಡಿದಾಗಲೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಬಿಜೆಪಿಗೆ ಹೊಸದಾಗಿ ಸೇರ್ಪಡೆಗೊಂಡಿರುವ ಮುನಿರತ್ನ ಹಾಗೂ ಮೂವರು ಎಂಎಲ್¿ಸಿಗಳ ಹೊರತಾಗಿ ಉಮೇಶ್ ಕತ್ತಿಯವರಿಗೂ ಸಚಿವ ಸ್ಥಾನ ನೀಡಬೇಕೆಂಬ ಆಗ್ರಹಗಳು ಕೇಳಿ ಬರುತ್ತಿವೆ.

ಈ ಹಿಂದೆ ಸಂಪುಟ ವಿಸ್ತರಣೆ ವಿಚಾರ ಬರುತ್ತಿದ್ದಂತೆ ಆಕಾಂಕ್ಷಿಗಳು, ಸಿಎಂ ಬಿಎಸ್ ವೈ ಮನೆ ಅಥವಾ ಡೆಲ್ಲಿಗೆ ದೌಡಾಯಿಸುತ್ತಿದ್ದರು. ಈ ಮೂಲಕ ಸಚಿವ ಸ್ಥಾನ ರೇಸ್ ನಲ್ಲಿ ತಾವೂ ಇದ್ದೇವೆ ಎಂದು ಗುರುತಿಸಿಕೊಳ್ಳುತ್ತಿದ್ದರು. ಅದರೆ ಇದೀಗ ಹೊಸ ಬಿಜೆಪಿ ಶಾಸಕರಿಗೆ ಹೊಸ ದಾರಿ ಕಂಡುಕೊಂಡಿದ್ದಾರೆ. ಹೌದು, ಕಾಂಗ್ರೆಸ್ ನಿಂದ ಬಿಜೆಪಿಗೆ ವಲಸೆ ಬಂದು ಸಚಿವರಾಗಿರುವ ¾ಸಾಹುಕಾರ್¿ ರಮೇಶ್ ಜಾರಕಿಹೊಳಿ ಈಗ ಪಕ್ಷದಲ್ಲಿ ಪ್ರಭಾವ ಹೆಚ್ಚಿಸಿಕೊಂಡಿದ್ದಾರೆ.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಶಾಸಕರಾದ ರಾಜುಗೌಡ, ಪೂರ್ಣಿಮಾ ಶ್ರೀನಿವಾಸ್, ಶಿವರಾಜ್ ಪಾಟೀಲ್ ಇತರರು ರಮೇಶ್ ಜಾರಕಿಹೊಳಿ ಅವರ ಸದಾಶಿವನಗರ ನಿವಾಸದಲ್ಲಿ ಬುಧವಾರ ಮಧ್ಯಾಹ್ನ ಸಭೆ ನಡೆಸಿದ್ದರು. ಸಭೆ ಬಳಿಕ ರಮೇಶ್ ಜಾರಕಿಹೊಳಿ ಸೇರಿದಂತೆ ಇತರರು ಗುರುವಾರ ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಚರ್ಚಿಸಲಾಗಿದೆ.

ಸಚಿವ ಸ್ಥಾನ, ಪುನಾರಚನೆ ಇತರೆ ವಿಚಾರಗಳ ಬಗ್ಗೆ ಚರ್ಚಿಸಿಲ್ಲ ಎಂದು ಹೇಳಿಕೆ ನೀಡಿದ್ದರೂ ದಿಢೀರ್ ಭೋಜನಕೂಟಗಳು ಇದೀಗ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗಷ್ಟೇ ಉಪಚುನಾವಣೆಯಲ್ಲಿ ಜಯ ಸಾಧಿಸಿದ ಮುನಿರತ್ನ ಅವರು ಕೂಡಾ ಗುರುವಾರ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದಾರೆ. ಈ ಎಲ್ಲಾ ಬೆಳವಣಿಗೆಗಳು ಕೆಲವರ ಹುಬ್ಬೇರುವಂತೆ ಮಾಡಿದೆ.

ಈ ನಡುವೆ ಸಚಿವಾಕಾಂಕ್ಷಿಗಳಾದ ಎಂಎಲ್¿ಸಿ ಆರ್.ಶಂಕರ್ ಹಾಗೂ ಹೆಚ್.ವಿಶ್ವನಾಥ್ ಅವರು ಬುಧವಾರವಷ್ಟೇ ದೆಹಲಿಯಿಂದ ರಾಜ್ಯಕ್ಕೆ ಹಿಂತಿರುಗಿದ್ದು, ಅಮಿತ್ ಶಾ ಅವರನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ ಎನ್ನಲಾಗಿದೆ. ಬಳಿಕ ವಿಶ್ವನಾಥ್ ಅವರು ಬಂಡಾಯ ಶಾಸಕರ ನಾಯಕ ಜಾರಕಿಹೊಳಿಯವರನ್ನು ಭೇಟಿ ಮಾಡಿದ್ದಾರೆಂದು ತಿಳಿದುಬಂದಿದೆ.

Facebook Comments