ತಿರುಪತಿಯಲ್ಲಿ ಕಾವೇರಿ ಎಂಪೋರಿಯಂ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು , ಜ.8- ತಿರುಪತಿಯಲ್ಲಿ ಹೊಸದಾಗಿ ನಿರ್ಮಿಸುತ್ತಿರುವ ಯಾತ್ರಾರ್ಥಿ ಗೃಹದಲ್ಲಿ ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ಕಾವೇರಿ ಎಂಪೋರಿಯಂ ಮಾರಾಟ ಮಳಿಗೆಯನ್ನು ತೆರೆಯಲು ಅವಕಾಶ ನೀಡುವಂತೆ ಇಂದು ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮ ಅಧ್ಯಕ್ಷ ಬೇಳೂರು ರಾಘವೇಂದ್ರಶೆಟ್ಟಿ ಅವರು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ವಿಧಾನಸೌಧದಲ್ಲಿಂದು ಸಚಿವರನ್ನು ಭೇಟಿ ಮಾಡಿ ದೇಶ ಹಾಗೂ ವಿದೇಶಗಳಿಂದ ಲಕ್ಷಾಂತರ ಭಕ್ತರು ತಿರುಪತಿಗೆ ಭೇಟಿ ನೀಡುತ್ತಾರೆ. ಈ ಸಂದರ್ಭದಲ್ಲಿ ನಮ್ಮ ಕರ್ನಾಟಕದ ಗುಡಿ ಕೈಗಾರಿಕೆ, ಕರಕುಶಲ ಮತ್ತು ಇತರ ಉತ್ಪನ್ನಗಳನ್ನು ಮಾರಾಟ ಮಾಡಲು ಸ್ಥಳಾವಕಾಶ ನೀಡಿದರೆ ಇದರಿಂದ ನಿಗಮಕ್ಕೂ ಲಾಭದಾಯಕ ಹಾಗೂ ಕಲಾವಿದರಿಗೂ ಅನುಕೂಲವಾಗುತ್ತದೆ ಎಂದು ಮನವರಿಕೆ ಮಾಡಿಕೊಟ್ಟರು.

ರಾಜ್ಯದ ಹಲವು ಭಾಗಗಳಲ್ಲಿರುವ ಕಾವೇರಿ ಎಂಪೋರಿಯಂನಲ್ಲಿರುವ ಉತ್ಪನ್ನಗಳಿಗೆ ಸಾಕಷ್ಟು ಬೇಡಿಕೆ ಇದೆ. ವಿದೇಶಗಳಿಗೂ ರಫ್ತಾಗುತ್ತದೆ. ಇದನ್ನು ಮತ್ತಷ್ಟು ವಿಸ್ತರಿಸುವ ಮತ್ತು ಬೆಳೆಸುವ ನಿಟ್ಟಿನಲ್ಲಿ ನಿಗಮ ಹೊಸ ಯೋಜನೆಗಳನ್ನು ಹಮ್ಮಿಕೊಂಡಿದೆ. ಅದಕ್ಕೆ ರಾಜ್ಯ ಸರ್ಕಾರ ಕೂಡ ಸಹಕಾರ ನೀಡುತ್ತಿದೆ ಎಂದು ಅಧ್ಯಕ್ಷರು ತಿಳಿಸಿದರು.

Facebook Comments