ಕೊರೋನಾ ಆತಂಕದ ನಡುವೆಯೂ ರಾಜ್ಯದಾದ್ಯಂತ ಸಿಇಟಿ ಪರೀಕ್ಷೆ ಆರಂಭ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.30- ಕೊರೊನಾ ಆತಂಕದ ನಡುವೆಯೂ ಇಂದಿನಿಂದ ಆರಂಭವಾದ ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ನಿರಾಳವಾಗಿ ಪರೀಕ್ಷೆ ಬರೆದರು. ವೃತ್ತಿಪರ ಶಿಕ್ಷಣ ಕೋರ್ಸ್‍ಗಳಿಗೆ ಪ್ರವೇಶ ಕಲ್ಪಿಸುವ ನಿಟ್ಟಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ 1,94,356 ವಿದ್ಯಾರ್ಥಿಗಳು ಹಾಜರಾದರು.

ರಾಜಧಾನಿ ಬೆಂಗಳೂರು ಜಿಲ್ಲೆ, ತಾಲ್ಲೂಕು ಸೇರಿದಂತೆ ರಾಜ್ಯಾದ್ಯಂತ 497 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರ ಭಾರೀ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಪರೀಕ್ಷೆಗೆ ಯಾವುದೇ ತೊಂದರೆಯಾಗಲಿಲ್ಲ.

ಮೊದಲೇ ಗುರುತಿಸಿದ್ದ ಸೋಂಕಿತ 40 ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗಿತ್ತು. ಕಂಟೈನ್ಮೆಂಟ್ ಝೋನ್ ವಿದ್ಯಾರ್ಥಿಗಳಿಗೂ ಕೂಡ ಪ್ರತ್ಯೇಕ ಪರೀಕ್ಷಾ ವ್ಯವಸ್ಥೆ ಕಲ್ಪಿಸಲಾಗಿತ್ತು.

ಪರೀಕ್ಷೆಗೆ ಹಾಜರಾಗುವ ಪ್ರತಿ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ ಪರೀಕ್ಷಾ ಕೇಂದ್ರಗಳ ಒಳಬಿಡಲಾಗುತ್ತಿತ್ತು. ವಿದ್ಯಾರ್ಥಿಗಳು ಕಡ್ಡಾಯವಾಗಿ ಪರೀಕ್ಷಾ ಕೇಂದ್ರಗಳಿಗೆ ಮಾಸ್ಕ್ ಧರಿಸಿ ಬರಬೇಕು. ಪರೀಕ್ಷಾ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಬಸ್ ವ್ಯವಸ್ಥೆಯನ್ನು ಕೂಡ ಸರ್ಕಾರ ಕಲ್ಪಿಸಿತ್ತು.

ಬೆಂಗಳೂರು, ಚಿತ್ರದುರ್ಗ, ಕೊಪ್ಪಳ ಮುಂತಾದ ಕಡೆ ಸೋಂಕಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು. ಬೆಂಗಳೂರಿನಲ್ಲಿ ಜಿಕೆವಿಕೆ ಹಾಗೂ ಜ್ಞಾನಭಾರತಿ ಪರೀಕ್ಷಾ ಕೇಂದ್ರಗಳಲ್ಲಿ ಕೊರೊನಾ ಸೋಂಕಿತ ವಿದ್ಯಾರ್ಥಿಗಳಿಗೆ ಎರಡು ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಅಲ್ಲಿ ಸೋಂಕಿತ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.

ನೆಗಡಿ, ಕೆಮ್ಮು, ಜ್ವರ ಲಕ್ಷಣವಿದ್ದ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಗಳಲ್ಲಿ ಕೂರಿಸಿ ಪರೀಕ್ಷೆ ಬರೆಸುವ ವ್ಯವಸ್ಥೆ ಮಾಡಲಾಗಿತ್ತಾದರೂ ಅಂತಹ ಯಾವುದೇ ಘಟನೆಗಳು ಕಂಡುಬರಲಿಲ್ಲ.

ಬೆಳಗ್ಗೆ 10.30ಕ್ಕೆ ನಿಗದಿಯಂತೆ ಪರೀಕ್ಷೆ ಆರಂಭವಾಗಿ ಜೀವಶಾಸ್ತ್ರ ಮತ್ತು ಗಣಿತ ಪರೀಕ್ಷೆಯನ್ನು ವಿದ್ಯಾರ್ಥಿಗಳು ನಿರಾತಂಕವಾಗಿ ಬರೆದರು. ಇಂದು ಎರಡು ವಿಷಯಗಳ ಪರೀಕ್ಷೆ ಮುಗಿದಿದ್ದು, ನಾಳೆ ಭೌತಶಾಸ್ತ್ರ ಹಾಗೂ ರಾಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಆಗಸ್ಟ್ 1 ಶನಿವಾರ ಬೆಳಗ್ಗೆ 11.30 ರಿಂದ 12.30ರ ವರೆಗೆ ಹೊರನಾಡು ಹಾಗೂ ಗಡಿನಾಡು ವಿದ್ಯಾರ್ಥಿಗಳಿಗೆ ಕಡ್ಡಾಯ ಕನ್ನಡ ಪರೀಕ್ಷೆ ನಡೆಯಲಿದೆ.

1088 ಗಡಿನಾಡು ವಿದ್ಯಾರ್ಥಿಗಳಿದ್ದು, ಅವರಿಗೆ ಗಡಿಭಾಗದಲ್ಲಿರುವ ಬಳ್ಳಾರಿ, ಬೆಳಗಾವಿ, ಬೆಂಗಳೂರು, ಮಂಗಳೂರು, ಬೀದರ್ ಭಾಗಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

ವಿವಿಧ ಕಾರಣಗಳಿಂದ ಸುಮಾರು 26 ಸಾವಿರ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಂಡಿದ್ದಾರೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಪರೀಕ್ಷೆ ಪ್ರಾರಂಭಕ್ಕೂ ಮುನ್ನ ಮತ್ತು ಪರೀಕ್ಷೆಯ ನಂತರ ಎಲ್ಲ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಜ್ ಮಾಡಲಾಗುವುದು. ಎಲ್ಲ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಮಾಸ್ಕ್ ಧರಿಸಿ ಬರುವುದನ್ನು ಕಡ್ಡಾಯಗೊಳಿಸಲಾಗಿತ್ತು.

Facebook Comments

Sri Raghav

Admin