Saturday, April 27, 2024
Homeರಾಜ್ಯಅಧಿವೇಶನ ಅರ್ಥಪೂರ್ಣವಾಗಿ ನಡೆಸಲು ಮುಖ್ಯಮಂತ್ರಿಗೆ ಸಭಾಪತಿ ಸಲಹಾ ಪತ್ರ

ಅಧಿವೇಶನ ಅರ್ಥಪೂರ್ಣವಾಗಿ ನಡೆಸಲು ಮುಖ್ಯಮಂತ್ರಿಗೆ ಸಭಾಪತಿ ಸಲಹಾ ಪತ್ರ

ಬೆಂಗಳೂರು, ನ. 21- ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4ರಿಂದ 10 ದಿನಗಳ ಕಾಲ ನಡೆಯುವ ಚಳಿಗಾಲದ ಅಧಿವೇಶನವನ್ನು ವ್ಯವಸ್ಥಿತ ಹಾಗೂ ಅರ್ಥಪೂರ್ಣವಾಗಿ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರಿಗೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಎಸ್. ಹೊರಟ್ಟಿ ಅವರು ಸಲಹೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿರುವ ಸಭಾಪತಿ, ಅಧಿವೇಶನದ ಅತ್ಯಮೂಲ್ಯವಾದ ಸಮಯವು ಕೇವಲ ಪ್ರತಿಭಟನೆ, ಸತ್ಯಾಗ್ರಹ, ಧರಣಿಗಳಿಗೆ ವ್ಯರ್ಥವಾಗುತ್ತಿದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಹಿನ್ನೆಲೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಅಧಿವೇಶನ ವ್ಯವಸ್ಥಿತ ಹಾಗೂ ಅರ್ಥಪೂರ್ಣವಾಗಿ ನಡೆಸಲು ಸಲಹೆ ನೀಡಿದ್ದಾರೆ.

ಅಧಿವೇಶನದ ಸಂದರ್ಭದಲ್ಲಿ ಕೃಷಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಲವಾರು ಸಂಘಟನೆಗಳು ಧರಣಿ, ಸತ್ಯಾಗ್ರಹ ನಡೆಸುವುದು ಸಾಮಾನ್ಯವಾಗಿದೆ.

ಕೇಂದ್ರದ ಹಣ ಬಿಡುಗಡೆ ವಿಳಂಬವಾದರೆ ರಾಜ್ಯ ಸರ್ಕಾರದಿಂದಲೇ ಬರ ಪರಿಹಾರ: ಸಚಿವ ಚಲುವರಾಯಸ್ವಾಮಿ

ಈ ಹಿನ್ನಲೆಯಲ್ಲಿ ಅಧಿವೇಶನ ಆರಂಭಗೊಳ್ಳುವ ಮುಂಚೆಯೇ ಸಂಬಂಧಪಟ್ಟ ಸಂಘಟನೆಗಳ ಪ್ರಮುಖರ ಸಭೆ ಕರೆದು ಅವರ ಬೇಡಿಕೆ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಿ ಅವುಗಳ ಪರಿಹಾರಕ್ಕೆ ಪ್ರಯತ್ನಿಸಬೇಕು. ಆ ಮೂಲಕ ಸಂಘಟನೆಗಳು ಅಧಿವೇಶನದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಹೊರಗಡೆ ಧರಣಿ, ಸತ್ಯಾಗ್ರಹ ನಡೆಸದಂತೆ ಸಂಘಟನೆಗಳ ಮುಖಂಡರಲ್ಲಿ ಮನವಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಚಿವ ಸಂಪುಟದ ಸಚಿವರಿಗೆ ಸೂಚಿಸಬೇಕು ಹಾಗೂ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಪತ್ರದಲ್ಲಿ ಕೋರಿದ್ದಾರೆ.

ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಹೊರಗಡೆ ಪ್ರತಿಭಟನೆಗಳ ಸಂಖ್ಯೆ ಇಳಿಮುಖವಾದರೆ ಹಾಗೂ ಸದನದ ಒಳಗಡೆ ಜನಸಾಮಾನ್ಯರ ಹಾಗೂ ಜ್ವಲಂತ ಸಮಸ್ಯೆಗಳ ಕುರಿತು ಅರ್ಥಪೂರ್ಣ ಹಾಗೂ ಗಂಭೀರ ಚರ್ಚೆ ನಡೆದು ಪರಿಹಾರ ಕಂಡುಕೊಂಡರೆ ಉತ್ತರ ಕರ್ನಾಟಕ ಭಾಗದಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಸಿದ್ದು ಸಾರ್ಥಕವಾಗುತ್ತದೆ.

ಇದರಿಂದ ಸರ್ಕಾರಕ್ಕೆ ಗೌರವ ಹಾಗೂ ಒಳ್ಳೆಯ ಹೆಸರು ಬರುತ್ತದೆ ಎಂದು ಬಸವರಾಜ ಎಸ್. ಹೊರಟ್ಟಿ ಅವರು ಪತ್ರದ ಮೂಲಕ ಕೋರಿದ್ದಾರೆ ಎಂದು ಸಭಾಪತಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

RELATED ARTICLES

Latest News