ಮಳೆ ಹಾನಿ : ಪರಿಹಾರ ಕಾರ್ಯ ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.17- ರಾಜ್ಯದ ನಾನಾಕಡೆ ಮಳೆಯಾಗಿ ಅಪಾರ ಪ್ರಮಾಣದ ಹಾನಿಯಾಗಿದ್ದು, ತಗ್ಗು ಪ್ರದೇಶ ಸೇರಿದಂತೆ ಮತ್ತಿತರ ಕಡೆ ಪರಿಹಾರ ಕಾರ್ಯ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಹಲವು ದಿನಗಳಿಂದ ರಾಜ್ಯದ ನಾನಾ ಕಡೆ ಮಳೆಯಾಗುತ್ತಿದೆ. ಮುಂದಿನ ನಾಲ್ಕೈದು ದಿನಗಳ ಕಾಲ ಇನ್ನೂ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೀಗಾಗಿ ತಗ್ಗು ಪ್ರದೇಶ, ನದಿಪಾತ್ರ ಸೇರಿದಂತೆ ಮತ್ತಿತರ ಕಡೆ ಜನರು ಸುರಕ್ಷಿತವಾಗಿಡಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಹೆಚ್ಚಿನ ಪರಿಣಾಮ ಬೀರಿದೆ. ನಾನು ಅಧಿಕಾರಿಗಳ ಜತೆ ಸಭೆ ನಡೆಸಿ ಎನ್‍ಡಿಆರ್‍ಎಫ್ ತಂಡಕ್ಕೂ ಜನರನ್ನು ಸುರಕ್ಷಿತವಾಗಿ ಕಾಪಾಡಲು ಸೂಚಿಸಿದ್ದೇನೆ. ನದಿ ಪಾತ್ರಗಳಲ್ಲಿ ಜನರು ಎಚ್ಚರ ವಹಿಸಬೇಕು ಎಂದು ಮನವಿ ಮಾಡಿದರು.

ಮಳೆ ನಿಂತ ತಕ್ಷಣ ಗುಂಡಿ ಬಿದ್ದಿರುವ ರಸ್ತೆಗಳು ರಿಪೇರಿಯಾಗಬೇಕು. 180 ಕೋಟಿ ರೂ. ಮೊತ್ತದ ಟೆಂಡರ್‍ಗೆ ಅನುಮತಿ ನೀಡಲಾಗಿದೆ. ಬೇರೆ ಬೇರೆ ಜಿಲ್ಲೆಗಳಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸಿದ್ದೇವೆ. ಅದಕ್ಕೆ ಪರಿಹಾರ ನೀಡುವ ಬಗ್ಗೆಯೂ ಚರ್ಚೆ ನಡೆಯುತ್ತದೆ ಎಂದು ಮಾಹಿತಿ ನೀಡಿದರು.

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪತ್ರ ಬರೆಯುವ ಮೊದಲೇ ನಾವು ಬೆಳೆ ಸಮೀಕ್ಷೆ ನಡೆಸಿ ಅಧಿಕಾರಿಗಳ ಬಳಿ ಮಾಹಿತಿ ಪಡೆದಿದ್ದೇವೆ. ಇಂದು ಸಂಜೆ ಭತ್ತ ಖರೀದಿ ಬಗ್ಗೆ ಸಭೆ ನಡೆಸುತ್ತೇವೆ. ತರಕಾರಿಗಳ ಬಗ್ಗೆ ಕೃಷಿ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.

Facebook Comments

Sri Raghav

Admin