ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಫಿಕ್ಸ್ : ಸಿಎಂ ಬಿಎಸ್ವೈ
ಬೆಂಗಳೂರು, ಫೆ.28- ರಾಜ್ಯದ ನಾಲ್ಕು ಕ್ಷೇತ್ರಗಳ ಉಪಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಬಿಜೆಪಿ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗಕ್ಕೆ ತೆರಳುವ ಮುನ್ನ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ, ಮಸ್ಕಿ, ಬಸವಕಲ್ಯಾಣ ಮತ್ತು ಸಿಂಧಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆದ್ದೇ ಗೆಲ್ಲಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ತಿಳಿಸಿದರು.
ಯಾವುದೇ ಸಂದರ್ಭದಲ್ಲೂ ಉಪಚುನಾವಣೆ ಎದುರಾದರೂ ನಾವು ಸಿದ್ಧರಾಗಿದ್ದೇವೆ. ಅಭ್ಯರ್ಥಿಗಳ ಆಯ್ಕೆ ವಿಚಾರವನ್ನು ಪಕ್ಷದ ಮುಖಂಡರು ನೋಡಿಕೊಳ್ಳುತ್ತಾರೆ ಎಂದರು.ಉಪಚುನಾವಣೆ ನಡೆಯುವ ಕ್ಷೇತ್ರಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುತ್ತೀರಾ ಎಂಬ ಮಾಧ್ಯಮವರ ಪ್ರಶ್ನೆಗೆ ಯಾವುದೇ ವಿಶೇಷ ಪ್ಯಾಕೇಜ್ ಘೋಷಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಈಗಾಗಲೇ ಉಪಚುನಾವಣೆ ಕ್ಷೇತ್ರಗಳಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಮುಂದಿನ ಬಜೆಟ್ ಮಂಡನೆಗೆ ಸಂಬಂಸಿದಂತೆ ಎಲ್ಲ ಚರ್ಚೆ ಮುಗಿದಿದೆ. ಶಿವಮೊಗ್ಗ ಪ್ರವಾಸ ಕೈಗೊಂಡಿದ್ದು, ಸೊರಬ ತಾಲ್ಲೂಕಿನಲ್ಲಿ ಕಾರ್ಯಕ್ರಮ ಇದೆ. ಸೊರಬದಿಂದ ಶಿವಮೊಗ್ಗಕ್ಕೆ ಬಂದು ಸಮಾರಂಭದಲ್ಲಿ ಭಾಗವಹಿಸುತ್ತೇನೆ. ಪ್ರವಾಸದಿಂದ ಮರಳಿ ನಾಳೆ ಬಜೆಟ್ ಸಿದ್ಧತೆ ಅಂತಿಮಗೊಳಿಸುವುದಾಗಿ ಮಾಹಿತಿ ನೀಡಿದರು.
ಲಿಂಗಾಯತ ಪಂಚಮಸಾಲಿ ಸಮುದಾಯದ ಮೀಸಲಾತಿಗೆ ಸಂಬಂಸಿದಂತೆ ಶ್ರೀಗಳ ಬೆದರಿಕೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ನಿರ್ಗಮಿಸಿದರು.