ರೆಸ್ಟ್ ಮಾಡಿ ರಿಲ್ಯಾಕ್ಸ್ ಆದ ಸಿಎಂ, ನಾಳೆ ಉಪಸಮರದ ಅಖಾಡಕ್ಕೆ ಎಂಟ್ರಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 12- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎರಡು ದಿನಗಳ ಕಾಲ ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮೈತ್ರಿ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಮಡಿಕೇರಿಯ ರೆಸಾರ್ಟ್‍ನಲ್ಲಿ ಕುಟುಂಬ ಸದಸ್ಯರೊಂದಿಗೆ ವಿಶ್ರಾಂತಿ ಪಡೆಯುತ್ತಿರುವ ಕುಮಾರಸ್ವಾಮಿ, ಇಂದು ರಾತ್ರಿ ಬೆಂಗಳೂರಿಗೆ ವಾಪಸಾಗಲಿದ್ದು, ನಾಳೆ ಮಧ್ಯಾಹ್ನ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ಪ್ರವಾಸ ಕೈಗೊಳ್ಳಲಿದ್ದಾರೆ.

ನಾಳೆ ಸಂಜೆ ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಚನ್ನಬಸಪ್ಪ ಶಿವಳ್ಳಿ ಅವರ ಪರವಾಗಿ ಬಹಿರಂಗ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮತ ಯಾಚಿಸಲಿದ್ದಾರೆ.

ಹುಬ್ಬಳ್ಳಿಯಲ್ಲೇ ನಾಳೆ ರಾತ್ರಿ ವಾಸ್ತವ್ಯ ಹೂಡಲಿರುವ ಮುಖ್ಯಮಂತ್ರಿ ಮಂಗಳವಾರ ಬೆಳಗ್ಗೆ ಕಲಬುರಗಿಗೆ ತೆರಳಿ ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿರುವ ಚುನಾವಣಾ ಪ್ರಚಾರದ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಚಿಂಚೋಳಿ ವಿಧಾನಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸುಭಾಷ್ ವಿ.ರಾಠೋಡ ಅವರ ಪರವಾಗಿ ಮುಖ್ಯಮಂತ್ರಿ ಮತಯಾಚನೆ ಮಾಡಲಿದ್ದಾರೆ.
ಮಂಗಳವಾರ ರಾತ್ರಿ ಬೆಂಗಳೂರಿಗೆ ಮುಖ್ಯಮಂತ್ರಿ ಮರಳುವ ಕಾರ್ಯಕ್ರಮವಿದೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಉಭಯ ಪಕ್ಷಗಳ ನಾಯಕರು ಜಂಟಿ ಚುನಾವಣಾ ಪ್ರಚಾರ ನಡೆಸಿದರು. ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದ ಕಾರಣ ಎರಡೂ ಕ್ಷೇತ್ರಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ ಕಾಂಗ್ರೆಸ್‍ಗೆ ಬೆಂಬಲ ನೀಡಿದೆ.

ಮೈತ್ರಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ ನಂತರ ಜೆಡಿಎಸ್ ನಾಯಕರು ಚುನಾವಣಾ ಪ್ರಚಾರಕ್ಕೆ ಬರುತ್ತಿಲ್ಲ ಎಂಬ ಬೇಸರ ಕಾಂಗ್ರೆಸ್ ವಲಯದಲ್ಲಿ ಕೇಳಿಬಂದಿತ್ತು.

ಲೋಕಸಭೆ ಚುನಾವಣೆ ರೀತಿಯಲ್ಲಿ ವಿಧಾನಸಭೆ ಉಪಚುನಾವಣೆಯಲ್ಲಿ ಜೆಡಿಎಸ್ ವರಿಷ್ಠರು ಸಹಕಾರ ನೀಡುತ್ತಿಲ್ಲ ಎಂಬ ಅಸಮಾಧಾನ ಕಾಂಗ್ರೆಸ್‍ನಿಂದ ಕೇಳಿಬಂದ ಬೆನ್ನಲ್ಲೇ ಮುಖ್ಯಮಂತ್ರಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಎರಡು ದಿನಗಳ ಕಾಲ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಕುಮಾರಸ್ವಾಮಿ ಅವರೊಂದಿಗೆ ಉತ್ತರ ಕರ್ನಾಟಕ ಭಾಗದ ಜೆಡಿಎಸ್‍ನ ಹಲವು ನಾಯಕರು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.

Facebook Comments