ಕರೇಗುಡ್ಡ ಗ್ರಾಮದಲ್ಲಿ ಸಿಎಂ ಗ್ರಾಮವಾಸ್ತವ್ಯಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ

ಈ ಸುದ್ದಿಯನ್ನು ಶೇರ್ ಮಾಡಿ

ರಾಯಚೂರು,ಜೂ.24.- ಇದೇ ಜೂನ್ 26ರಂದು ಜಿಲ್ಲೆಯ ಮಾನವಿ ತಾಲೂಕಿನ ಕರೇಗುಡ್ಡ ಗ್ರಾಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಕೈಗೊಳ್ಳಲಿರುವ ಗ್ರಾಮವಾಸ್ತವ್ಯ, ಸಾರ್ವಜನಿಕ ಕುಂದು ಕೊರತೆಗಳ ಆಲಿಕೆ ಹಾಗೂ ಸರ್ಕಾರದ ವತಿಯಿಂದ ವಿವಿಧ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ವತಿಯಿಂದ ಸಕಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್.ಬಿ ಹೇಳಿದರು.

ಅವರಿಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಮುಖ್ಯಮಂತ್ರಿಗಳು ಜೂನ್ 26 ರಂದು ಬೆಳಿಗ್ಗೆ ರಾಯಚೂರಿಗೆ ಆಗಮಿಸಿ ಸಾರಿಗೆ ಬಸ್ ಮೂಲಕ ಕರೇಗುಡ್ಡ ಗ್ರಾಮಕ್ಕೆ ತೆರಳಲಿದ್ದು, ಕರೇಗುಡ್ಡ ಗ್ರಾಮದಲ್ಲಿ ಸಮಾರಂಭದ ಬೃಹತ್ ವೇದಿಕೆ ನಿರ್ಮಿಸಲಾಗಿದೆ ಎಂದರು.

ಜನತಾ ದರ್ಶನಕ್ಕೆ ಅರ್ಜಿ ಸಲ್ಲಿಸಲು ಸಾರ್ವಜನಿಕರು, ಸಂಘ ಸಂಸ್ಥೆಗಳು ಹೆಚ್ಚಾಗಿ ಆಗಮಿಸಲಿದ್ದು ಅವರಿಗೆ ಅನುಕೂಲವಾಗುವಂತೆ ಜಿಲ್ಲಾಡಳಿತದ ವತಿಯಿಂದ 14 ಕೌಂಟರ್‍ಗಳನ್ನು ತೆರೆಯಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಟೋಕನ್ ನೀಡಲಾಗುತ್ತಿದೆ.

ಟೋಕನ್ ಸಂಖ್ಯೆಗಳ ಮೂಲಕ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದ್ದು, ಇದಕ್ಕಾಗಿ 3 ಫಾರ್ಮೇಟ್‍ಗಳನ್ನು ರೂಪಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಮಹಿಳೆ, ವೃದ್ಧರು ಹಾಗೂ ವಿಕಲಚೇನರಿಗಾಗಿ ಪ್ರತ್ಯೇಕ ಅವಕಾಶ ಕಲ್ಪಿಸಲಾಗಿದೆ ಎಂದವರು ಹೇಳಿದರು.

ಕಾರ್ಯಕ್ರಮಕ್ಕೆ 15 ಸಾವಿರಕ್ಕಿಂತ ಹೆಚ್ಚು ಜನ ಬರಲಿದ್ದು ಇವರಿಗೆ ಊಟ ಹಾಗೂ ಕುಳಿತ ಭಾಗದಲ್ಲಿಯೇ ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಗಿದೆ. ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸವಲತ್ತುಗಳ ವಿತರಣೆ ಕಾರ್ಯಕ್ರಮವೂ ಜರುಗಲಿದ್ದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ನಂತರ ಮುಖ್ಯಮಂತ್ರಿಗಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಜೂನ್ 27 ರಂದು ಬೆಳಿಗ್ಗೆ ಹೆಲಿಕ್ಯಾಪ್ಟರ್ ಮೂಲಕ ಪ್ರಯಾಣ ಬೆಳೆಸುವರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಉಪಸ್ಥಿತರಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin