ರೈತ ಮುಖಂಡರೊಂದಿಗೆ ಸಿಎಂ ಸಭೆ, ಅನ್ನದಾತರಿಗೆ ಭರವಸೆ ನೀಡಿದ ಬಿಎಸ್ವೈ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಸರ್ಕಾರದ ಇತಿಮಿತಿಯಲ್ಲಿ ರೈತರಿಗೆ ಎಲ್ಲ ರೀತಿಯಲ್ಲೂ ಬೆಂಬಲ ನೀಡಲಾಗುವುದು ಮತ್ತು ಶೀಘ್ರದಲ್ಲೇ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ.ಗುರುವಾರ ತಮ್ಮ ಗೃಹ ಕಚೇರಿ ಕೃಷ್ಣದಲ್ಲಿ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ರೈತ ಮುಖಂಡರೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ರೈತರಿಗಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು. ಕೃಷಿ ಕ್ಷೇತ್ರದ ಸಮಸ್ಯೆಗಳನ್ನು ಆಲಿಸಿದ ಅವರು, ಕೊರೊನಾ ವೈರಸ್‌ ನಿಂದ ಲಾಕ್ ಡೌನ್ ಘೋಷಣೆಯಾದಾಗ ಕೃಷಿ ಮತ್ತು ಪೂರಕ ಚಟುವಟಿಕೆಗಳು ಯಾವುದೇ ಅಡಚಣೆ ಇಲ್ಲದೆ ಮುಂದುವರೆಸಲು ಅನುಮತಿ ನೀಡಲಾಗಿದೆ.

ಮುಂಗಾರು ಹಂಗಾಮಿನ ಚಟುವಟಿಕೆಗಳು ಅವ್ಯಾಹತವಾಗಿ ನಡೆದಿದೆ ಎಂದು ಹೇಳಿದರು. ಇದಲ್ಲದೆ ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ಕೃಷಿ ಇಲಾಖೆ ಕಚೇರಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ಬಾಡಿಗೆ ಆಧಾರಿತ ಯಂತ್ರೋಪಕರಣಗಳ ಸೇವಾ ಕೇಂದ್ರಗಳು, ಕೃಷಿ ಪರಿಕರ ಮಾರಾಟ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ
ಎಂದು ತಿಳಿಸಿದರು.

ಹಿಂಗಾರು / ಬೇಸಿಗೆ ಹಂಗಾಮಿನ ಬೆಳೆಗಳ ಕಟಾವು ಕಾರ್ಯ ಪ್ರಗತಿಯಲ್ಲಿದ್ದು, ಶೇ. 80 ರಷ್ಟು ಕಟಾವು ಪೂರ್ಣಗೊಂಡಿದೆ.ಇದಕ್ಕೆ ಬೇರೆ ರಾಜ್ಯಗಳಿಂದ ಕಟಾವು ಯಂತ್ರಗಳನ್ನು ತರಿಸಲು ಸಹ ವ್ಯವಸ್ಥೆ ಮಾಡಲಾಗಿದೆ ಎಂದರು.

ರೈತರ ಸಮಸ್ಯೆಗಳನ್ನು ಬಗೆಹರಿಸಲು ಅಗ್ರಿ ವಾರ್ ರೂಂ ಸ್ಥಾಪಿಸಲಾಗಿದೆ. ಈ ಬಗ್ಗೆ ರೈತ ಮುಖಂಡರು ಮೆಚ್ಚುಗೆ ವ್ಯಕ್ತಪಡಿಸಿದರು. ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಲಭ್ಯವಿದೆ.ರಾಜ್ಯದಲ್ಲಿ ಬೆಳೆಯುವ ಹೂವು ಹಣ್ಣು ತರಕಾರಿಗಳನ್ನು ಇತರ ರಾಜ್ಯಗಳಿಗೆ ಸಾಗಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಮುಖ್ಯಮಂತ್ರಿ ರೈತ ನಿಯೋಗಕ್ಕೆ ಭರವಸೆ ನೀಡಿದರು.

ಹಾಪ್ ಕಾಮ್ಸ್ ಮೂಲಕ ಹಣ್ಣು, ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ.ರೈತ ಉತ್ಪಾದನಾ ಸಂಸ್ಥೇಗಳ ಮೂಲಕ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಮಾಹಿತಿ ನೀಡಿದರು.

ರಾಯಚೂರು, ಕೊಪ್ಪಳ,ಬಳ್ಳಾರಿ ಮೊದಲಾದ ಜಿಲ್ಲೆಗಳಲ್ಲಿ ಇತ್ತೀಚೆಗೆ ಅಕಾಲಿಕ ಮಳೆಯಿಂದ ನಾಶವಾಗಿರುವ ಭತ್ತದ ಬೆಳೆಗೆ ಪರಿಹಾರ ನೀಡಲು ಕ್ರಮ ವಹಿಸಲಾಗಿದೆ.ಕೇಂದ್ರ ಸರ್ಕಾರದ ಪಿಎಂ-ಕಿಸಾನ್ ಯೋಜನೆಯಡಿ ವಿವಿಧ ಕಂತುಗಳಲ್ಲಿ 50.77 ಲಕ್ಷ ರೈತರಿಗೆ ಒಟ್ಟು 3755.16 ಕೋಟಿ ರೂ. ಆರ್ಥಿಕ ನೆರವು ನೀಡಲಾಗಿದೆ ಎಂದು ಹೇಳಿದರು.

2020-21ನೇ ಸಾಲಿನಲ್ಲಿ 47.81 ಲಕ್ಷ ರೈತರಿಗೆ ಎರಡು ಸಾವಿರ ರೂಪಾಯಿಯಂತೆ ಒಟ್ಟು 956.32 ಕೋಟಿ ರೂ. ವರ್ಗಾಯಿಸಲಾಗಿದೆ.ರಾಜ್ಯ ಸರ್ಕಾರದ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಈ ವರೆಗೆ 44.67 ಲಕ್ಷ ರೈತರಿಗೆ 893.95 ಕೋಟಿ ರೂ. ಆರ್ಥಿಕ ನೆರವು ಒದಗಿಸಲಾಗಿದೆ.

ಮೆಕ್ಕೆಜೋಳ ಖರೀದಿಗೆ ಕೆಎಂಎಫ್ ಗೆ ಸೂಚಿಸಲಾಗಿದೆ.ಯಾವುದೇ ಕಾರಣಕ್ಕೂ ರೈತರು ಆತಂಕಕ್ಕೆ ಒಳಗಾಗಬಾರದೆಂದು ಮುಖ್ಯಮಂತ್ರಿ ಅವರು ಮನವಿ ಮಾಡಿದರು.  ಸಭೆಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್, ತೋಟಗಾರಿಕೆ ಸಚಿವ ನಾರಾಯಣಗೌಡ, ಕಂದಾಯ ಸಚಿವ ಆರ್. ಅಶೋಕ್ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮಾ ಭಾಗವಹಿಸಿದ್ದರು.

Facebook Comments

Sri Raghav

Admin