ಮಹದಾಯಿ ನೀರು ಹಂಚಿಕೆ ಸಂಬಂಧ ಕಾನೂನು ತಜ್ಞರ ಜೊತೆ ಚರ್ಚೆ : ಸಿಎಂ ಬಿಎಸ್‌ವೈ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.12- ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಕಾನೂನು ತಜ್ಞರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದಲ್ಲಿ ಇತ್ಯರ್ಥವಾಗುವವರೆಗೂ ಮಹದಾಯಿ, ಕಳಸಾಬಂಡೂರಿ ನಾಲಾ ನದಿ ನೀರು ಯೋಜನೆಯ ಅಧಿಸೂಚನೆ ಹೊರಡಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿರುವುದು ರಾಜ್ಯ ಸರ್ಕಾರದ ಗಮನಕ್ಕೆ ಬಂದಿದೆ.

ನ್ಯಾಯಾಲಯದಲ್ಲಿ ಹೋರಾಟ ನಡೆಸುವ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚೆ ಮಾಡುವುದಾಗಿ ತಿಳಿಸಿದರು. ಮೂರು ದಿನಗಳ ಹಿಂದಷ್ಟೇ ಸಂಸತ್‍ನಲ್ಲಿ ಕೇಂದ್ರ ಸರ್ಕಾರ ಮಹದಾಯಿ ನದಿನೀರು ವಿವಾದವು ನ್ಯಾಯಾಧೀಕರಣದಲ್ಲಿ ಇತ್ಯರ್ಥವಾಗುವವರೆಗೂ ಅಧಿಸೂಚನೆ ಹೊರಡಿಸಲು ಸಾಧ್ಯವೇ ಇಲ್ಲ ಎಂದು ಹೇಳಿತ್ತು.

ಗೋವಾ, ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ವಿಚಾರಣೆ ನಡೆಯುತ್ತಿದೆ. ಈ ವಿವಾದ ಇತ್ಯರ್ಥವಾಗಿ ಅಂತಿಮ ತೀರ್ಪು ಬರುವವರೆಗೂ ಕೇಂದ್ರ ಸರ್ಕಾರ ಯಾವುದೇ ಅಧಿಸೂಚನೆಯನ್ನು ಪ್ರಕಟಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಕೇಂದ್ರ ಸರ್ಕಾರವೇ ಅಧಿಸೂಚನೆ ಹೊರಡಿಸಲು ಸಾಧ್ಯವಿಲ್ಲ ಎಂದು ಹೇಳಿರುವಾಗ ಉತ್ತರ ಕರ್ನಾಟಕದ ಹುಬ್ಬಳ್ಳಿ-ಧಾರವಾಡ, ಗದಗ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡುವ ಮಹದಾಯಿ ನದಿನೀರು ಯೋಜನೆ ಮತ್ತೆ ನೆನೆಗುದಿಗೆ ಬೀಳುವ ಆತಂಕ ಎದುರಾಗಿದೆ.

Facebook Comments