ಮಳೆ-ಕೊರೊನಾ : ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.10- ಮುಂದಿನ ದಿನಗಳಲ್ಲಿ ರಾಜ್ಯದ ನಾನಾ ಕಡೆ ಇನ್ನು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೂಡಲೇ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ.

ಹವಾಮಾನ ಇಲಾಖೆ ಪ್ರಕಾರ ರಾಜ್ಯದ 15ರಿಂದ 20 ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಿ ಪ್ರವಾಹ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಹೀಗಾಗಿ ಜಿಲ್ಲಾಧಿಕಾರಿಗಳು ಕೂಡಲೇ ಪೂರ್ವ ಸಿದ್ದತೆಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದರು.

ಗೃಹಕಚೇರಿ ಕೃಷ್ಣದಲ್ಲಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಜೊತೆ ಕೋವಿಡ್ ನಿಯಂತ್ರಣ, ಪ್ರವಾಹ ಪರಿಸ್ಥಿತಿ ಕುರಿತಂತೆ ಜಿಲ್ಲಾಧಿಕಾರಿಗಳು , ಜಿಲ್ಲಾಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳ ಚರ್ಚೆ ನಡೆಸಿದರು.

ಕಳೆದ ತಿಂಗಳು ಕರಾವಳಿ, ಮಲೆನಾಡು, ಮಧ್ಯ ಕರ್ನಾಟಕ, ಉತ್ತರ ಕರ್ನಾಟಕ ಸೇರಿದಂತೆ ಒಟ್ಟು 12 ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ ಹೆಚ್ಚಿನ ನಷ್ಟ ಸಂಭವಿಸಿತ್ತು. ಮುಂದಿನ ದಿನಗಳಲ್ಲಿ ಪ್ರವಾಹ ಉಂಟಾಗದಂತೆ ಸಿದ್ದತೆಗಳನ್ನು ಮಾಡಿಕೊಳ್ಳಬೇಕು.

ರಾಜ್ಯದಲ್ಲಿ ಒಟ್ಟು 9 ಎನ್‍ಡಿಆರ್‍ಎಫ್ ತಂಡಗಳು ನಿಯೋಜನೆಯಾಗಿವೆ, 8 ಐಎಎಫ್ ಹೆಲಿಕಾಪ್ಟರ್‍ಗಳಿವೆ. ಅವುಗಳನ್ನು ಅಗತ್ಯವಿರುವ ಕಡೆ ನಿಯೋಜನೆ ಮಾಡಿಕೊಳ್ಳಬೇಕು ಎಂದು ಹೇಳಿದರು.  ತಗ್ಗು ಪ್ರದೇಶಗಳಲ್ಲಿರುವ ಜನರನ್ನು ಮುಂಜಾಗ್ರತಾ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು, ಅಗತ್ಯವಿರುವ ಕಡೆ ಗಂಜಿ ಕೇಂದ್ರಗಳನ್ನು ತೆರೆಯಬೇಕು, ಪ್ರವಾಹ ಉಂಟಾದ ವೇಳೆ ತಡಬಡಿಸುವ ಬದಲು ಈಗಲೇ ಎಚ್ಚೆತ್ತುಕೊಳ್ಳಿ. ಅಗತ್ಯವಿರುವ ಹಣವನ್ನು ಸರ್ಕಾರ ಬಿಡುಗಡೆ ಮಾಡಲು ಸಿದ್ದವಿದೆ ಎಂದು ಹೇಳಿದರು.

ಮಾಫಿಯಾಕ್ಕೆ ಕಡಿವಾಣ ಹಾಕಿ: ಇನ್ನು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಜೊತೆ ಸಂವಾದ ನಡೆಸಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಡ್ರಗ್ ಮಾಫಿಯಾಕ್ಕೆ ಕಡಿವಾಣ ಹಾಕಲೇಬೇಕೆಂದು ತಾಕೀತು ಮಾಡಿದರು.

ಕರ್ನಾಟಕಕ್ಕೆ ಅದರಲ್ಲೂ ಬೆಂಗಳೂರಿನಲ್ಲಿ ಮಾದಕವಸ್ತುಗಳ ಪ್ರಕರಣ ಹೆಚ್ಚಾಗುತ್ತಿರುವುದು ಅತ್ಯಂತ ನೋವಿನ ಸಂಗತಿ. ತಕ್ಷಣವೇ ಈ ಮಾಫಿಯಾದಲ್ಲಿ ಯಾರೇ ಭಾಗಿಯಾಗಿದ್ದರೂ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರನ್ನು ಬಿಡಲೇಬಾರದು ಎಂದು ಆದೇಶಿಸಿದರು.

ಗಡಿ ಭಾಗಗಳಲ್ಲಿರುವ ಪೊಲೀಸ್ ಠಾಣೆಗಳಿಗೆ ಹೆಚ್ಚಿನ ಸಿಬ್ಬಂದಿ ನಿಯೋಜನೆ, ಚೆಕ್‍ಪೋಸ್ಟ್‍ಗಳಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ತಪಾಸಣೆ, ವಿಶೇಷವಾಗಿ ಕಲಬುರಗಿ, ಬೀದರ್, ಬಳ್ಳಾರಿ, ರಾಯಚೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಸೇರಿದಂತೆ ಹೊರರಾಜ್ಯಗಳ ಜೊತೆ ಗಡಿ ಹಂಚಿಕೊಂಡಿರುವ ಜಿಲ್ಲೆಗಳಲ್ಲಿ ಹದ್ದಿನ ಕಣ್ಣಿಡಬೇಕೆಂದು ಹೇಳಿದರು.

ಮಾದಕವಸ್ತುಗಳು ಎಲ್ಲಿಂದ ಬರುತ್ತವೆ, ಇದರ ಹಿಂದಿರುವ ಜಾಲ, ಇದಕ್ಕೆ ಯಾರ ಕುಮ್ಮಕ್ಕಿದೆ ಎಲ್ಲವನ್ನೂ ಪತ್ತೆಹಚ್ಚಬೇಕು. ಕರ್ನಾಟಕ ಮಾದಕದ್ರವ್ಯ ಹಾಗೂ ವ್ಯಸನ ಮುಕ್ತ ರಾಜ್ಯವನ್ನಾಗಿ ಮಾಡಲು ಎಲ್ಲಾ ದಿಟ್ಟ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಕೋವಿಡ್ ನಿಯಂತ್ರಿಸಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿವೆ. ಲಾಕ್‍ಡೌನ್ ತೆರವುಗೊಳಿಸಿದ ನಂತರ ಕೆಲವು ಜಿಲ್ಲೆಗಳಲ್ಲಿ ನಿರೀಕ್ಷೆಗೂ ಮೀರಿದ ಪ್ರಕರಣ ಬರುತ್ತಿವೆ. ಲಾಕ್‍ಡೌನ್ ವೇಳೆ ಸಾರ್ವಜನಿಕರ ಎಲ್ಲ ಚಟುವಟಿಕೆಗಳಿಗೂ ನಿಯಂತ್ರಣ ಹಾಕಲಾಗಿತ್ತು.

ಆದರೆ ಇಂದು ಅಂತಹ ಪರಿಸ್ಥಿತಿ ಇಲ್ಲ. ಸಾಧ್ಯವಾದಷ್ಟು ಸೂಕ್ತ ಕ್ರಮಗಳ ಮೂಲಕವೇ ಕಡಿವಾಣ ಹಾಕಬೇಕೆಂದು ಹೇಳಿದರು.  ಸಭೆಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎನ್.ವಿಜಯಭಾಸ್ಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Facebook Comments