ಸರ್ಕಾರಿ ಶಾಲೆಗೆ ಮಕ್ಕಳನ್ನು ಆಕರ್ಷಿಸಲು ಸಿಎಂ ಸಲಹೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.11- ಶಾಲೆಗಳಲ್ಲಿ ಶಿಕ್ಷಕರ ವಿರುದ್ಧ ಕಳಂಕ ಬರದಂತೆ, ಮಕ್ಕಳ ಸ್ನೇಹಿ ವಾತಾವರಣವನ್ನು ರೂಪಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ತಿಳಿಸಿದರು. ವಿಧಾನಸೌಧದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರದಾನ ಮಾಡಿ ಅವರು ಮಾತನಾಡಿದರು.

ಶಿಕ್ಷಣ ಇಲಾಖೆಯು ಶಿಕ್ಷಣ, ವಿದ್ಯಾರ್ಥಿ ಹಾಗೂ ಸಮುದಾಯ ಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು. ಶಿಕ್ಷಣ ಇಲಾಖೆ ಸುಧಾರಣೆಯಿಂದಾಗಿ ಮಕ್ಕಳು ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳತ್ತ ಮುಖ ಮಾಡಿರುವುದು ಇಲಾಖೆಯ ದ್ಯೋತಕವಾಗಿದೆ ಎಂದು ಹೇಳಿದರು.

ಯಾವುದೇ ಒಂದು ರಾಷ್ಟ್ರದ ಭವ್ಯ ಭವಿಷ್ಯ ನಿರ್ಧಾರವಾಗುವುದು ಶಾಲಾ ಕೊಠಡಿಗಳಲ್ಲಿ ಎಂಬುದು ಸಾರ್ವಕಾಲಿಕ ಸತ್ಯ ಎಂದರು. ಮಾನವ ಸಂಪನ್ಮೂಲ ಅಭಿವೃದ್ಧಿಯನ್ನು ಶಿಕ್ಷಣ ಇಲಾಖೆ ಮಾಡುತ್ತಿದೆ. ಶಿಕ್ಷಕ ವೃತ್ತಿ ಪವಿತ್ರವಾದುದು. ಈ ವೃತ್ತಿಗೆ ಘನತೆಯನ್ನು ರಾಧಾಕೃಷ್ಣನ್ ಅವರು ತಂದುಕೊಟ್ಟಿದ್ದಾರೆ ಎಂದು ಹೇಳಿದರು.

ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಇಡೀ ದೇಶದ ಶೈಕ್ಷಣಿಕ ವ್ಯವಸ್ಥೆ ಹದಗೆಟ್ಟಿದೆ. ಆದರೆ, ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ದೇಶ ಮೆಚ್ಚುವಂತೆ ನಡೆಸಲಾಯಿತು. ಇದಕ್ಕಾಗಿ ಪ್ರಾಥಮಿಕ ಪ್ರೌಢ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಅವರನ್ನು ಅಭಿನಂದಿಸಲಾಗುವುದು ಎಂದು ತಿಳಿಸಿದರು.

ಶಾಲೆಯಿಂದ ಮಕ್ಕಳು ದೂರ ಉಳಿದಿರುವ ಸಂದರ್ಭದಲ್ಲಿ ನೂತನ ಕಲಿಕಾ ವಿಧಾನವಾದ ವಿದ್ಯಾಗಮ ಅಳವಡಿಸಿಕೊಳ್ಳಲಾಗಿದೆ. ಶಿಕ್ಷಣವಾಹಿನಿ ಎಂಬ ಸಹಾಯವಾಣಿ ಮೂಲಕ ಸಾರ್ವಜನಿಕರು ದೂರುಗಳನ್ನು ಸಲ್ಲಿಸಬಹುದಾಗಿದೆ. ಶಿಕ್ಷಕರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಶಿಕ್ಷಕ ಮಿತ್ರ ಆಪ್‍ಅನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದರು.

ಉತ್ತಮ ರಾಷ್ಟ್ರ ಶಿಕ್ಷಕ ಪ್ರಶಸ್ತಿ ಪಡೆದಿರುವ ಜಾಲಹಳ್ಳಿ ಕೇಂದ್ರೀಯ ವಿದ್ಯಾಲಯದ ಮುಖ್ಯ ಶಿಕ್ಷಕಿ ಚೆಮ್ಮಲಾರ್ ಷಣ್ಮುಗಂ, ಅಬ್ಜಲ್‍ಪುರ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ಸುರೇಖಾ ಜಗನ್ನಾಥ್, ಬೆಳ್ತಂಗಡಿಯ ಯಾಕೂಬ್ ಎಸ್. ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

2020-21ನೇ ಸಾಲಿನ ರಾಜ್ಯಮಟ್ಟದ ಪ್ರಾಥಮಿಕ ಶಾಲಾ ವಿಭಾಗದಲ್ಲಿ 20 ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಯಿತು. ಪ್ರೌಢಶಾಲಾ ವಿಭಾಗದಲ್ಲಿ 10 ಶಿಕ್ಷಕರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಇಬ್ಬರು ಪ್ರಾಂಶುಪಾಲರಿಗೆ ಉತ್ತಮ ಪ್ರಾಂಶುಪಾಲ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಂಟು ಮಂದಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರಿಗೆ ಉತ್ತಮ ಉಪನ್ಯಾಸಕರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‍ಕುಮಾರ್, ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಎಂ.ಆರ್. ದೊರೆಸ್ವಾಮಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Facebook Comments