ಸಿಎಂ ದೆಹಲಿ ಪ್ರವಾಸ : ಸಂಪುಟ ವಿಸ್ತರಣೆ ಹಾಗೂ ನೆರೆ ಪರಿಹಾರ ಬಗ್ಗೆ ಚರ್ಚೆ

ಈ ಸುದ್ದಿಯನ್ನು ಶೇರ್ ಮಾಡಿ

ಕಲಬುರಗಿ,ಸೆ.17-ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಸಮಯ ಅವಕಾಶ ನಿಗದಿಯಾಗಿದ್ದು, ಸಚಿವ ಸಂಪುಟ ವಿಸ್ತರಣೆ ಹಾಗೂ ನೆರೆ ಪರಿಹಾರ ಬಿಡುಗಡೆ ಮಾಡುವ ಸಂಬಂಧ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಮತ್ತು ನಾಳೆ ದೆಹಲಿಯಲ್ಲೇ ತಂಗಲಿದ್ದೇನೆ. ಪ್ರಧಾನಿ ಸೇರಿದಂತೆ ಕೇಂದ್ರ ಸಚಿವರ ಭೇಟಿಗೂ ಸಮಯ ನಿಗದಿಯಾಗಿದೆ ಎಂದು ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆ ಆಗಲಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ, ಪಕ್ಷದ ವರಿಷ್ಠರ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು. ಕೆಲವು ಮಹತ್ವದ ಬೆಳವಣಿಗೆಗಳ ಬಗ್ಗೆ ಚರ್ಚಿಸುವುದಕ್ಕಾಗಿಯೇ ದೆಹಲಿಗೆ ಹೋಗುತ್ತೇನೆ ಎಂದರು.

ರಾಜ್ಯಕ್ಕೆ ಬಾಕಿ ಇರುವ ನೆರೆ ಪರಿಹಾರ ಬಿಡುಗಡೆ ಹಾಗೂ ನೆನೆಗುದಿಗೆ ಬಿದ್ದಿರುವ ಯೋಜನೆಗಳ ತ್ವರಿತ ಅನುಷ್ಠಾನಕ್ಕಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಲಾಗುವುದು. ನೀರಾವರಿ, ರೈಲ್ವೆ ಸೇರಿದಂತೆ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಸಂಬಂಧಪಟ್ಟವರಿಗೆ ಮನವಿ ಮಾಡಲಾಗುವುದು ಎಂದು ಸಿಎಂ ಹೇಳಿದರು.

ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ಇಲ್ಲಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳಿದರು.

Facebook Comments