ಎಚ್‌ಡಿಕೆ ಭೇಟಿಗೆ ವಿಶೇಷ ಅರ್ಥ ಕಲ್ಪಿಸ ಬೇಡಿ : ಸಿಎಂ ಬಿಎಸ್‍ವೈ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಸೆ.18- ನಮ್ಮ ಪಕ್ಷಕ್ಕೆ ಸ್ಪಷ್ಟ ಬಹುಮತ ಇರುವುದರಿಂದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿರುವುದರಲ್ಲಿ ಯಾವುದೇ ವಿಶೇಷ ಅರ್ಥವಿಲ್ಲ. ಇದಕ್ಕೆ ರಾಜಕೀಯ ಬಣ್ಣ ಕಟ್ಟುವುದು ಬೇಡ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಪ್ರತಿಪಕ್ಷದ ನಾಯಕರಾಗಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾತನಾಡಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಡಿ ಎಂದು ಮಾಧ್ಯಮಗಳಿಗೆ ಅವರು ಮನವಿ ಮಾಡಿದರು.

ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ರಾಜ್ಯಕ್ಕೆ ಬಿಡುಗಡೆಯಾಗಬೇಕಾದ ನೆರೆ ಪರಿಹಾರ ಮತ್ತಿತರ ನೆರೆಪರಿಹಾರ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೇರಿದಂತೆ ಮತ್ತಿತರ ನಾಯಕರನ್ನು ಭೇಟಿ ಮಾಡಲಿದ್ದೇನೆ ಎಂದರು.  ಪ್ರಧಾನಿ ಹಾಗೂ ಕೆಲವು ನಾಯಕರನ್ನು ಭೇಟಿಯಾದ ವೇಳೆ ಯಾವ ವಿಷಯ ಚರ್ಚೆ ಮಾಡಲಾಗುತ್ತದೆ ಎಂಬುದನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಆಧಾರರಹಿತ ಆರೋಪ: ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ಸರ್ಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬುದು ಆಧಾರರಹಿತ ಆರೋಪ. ಅವರು ಸೂಪರ್ ಸಿಎಂ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದರು.

ಪಕ್ಷದ ಉಪಾಧ್ಯಕ್ಷರಾಗಿ ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಕೆಲವರು ವಿನಾಕಾರಣ ವಿಜಯೇಂದ್ರ ಸರ್ಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಹೇಳುತ್ತಿರುವುದು ಸರಿಯಲ್ಲ ಎಂದು ಯಡಿಯೂರಪ್ಪ ಆಕ್ಷೇಪಿಸಿದರು.

Facebook Comments