ತಿರುಪತಿಯಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಸಿಎಂ ಬಿಎಸ್‍ವೈ ಶಂಕುಸ್ಥಾಪನೆ

ಈ ಸುದ್ದಿಯನ್ನು ಶೇರ್ ಮಾಡಿ

ತಿರುಪತಿ, ಸೆ.24-ರಾಜ್ಯದಿಂದ ಆಗಮಿಸುವ ತಿಮ್ಮಪ್ಪನ ಭಕ್ತರ ಅನುಕೂಲಕ್ಕಾಗಿ ತಿರುಪತಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕರ್ನಾಟಕ ಭವನ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಆಂಧ್ರಜಗನ್ ಮೋಹನ್ ರೆಡ್ಡಿ ಇಂದು ಶಂಕು ಸ್ಥಾಪನೆ ನೆರವೇರಿಸಿದರು.

7.5 ಎಕರೆ ಪ್ರದೇಶದಲ್ಲಿ ಈ ವಸತಿ ಗೃಹ ನಿರ್ಮಾಣವಾಗಲಿದ್ದು, ತಿರುಪತಿಯಲ್ಲಿ ಕರ್ನಾಟಕದ ಭಕ್ತರಿಗೆ ಉಳಿದುಕೊಳ್ಳುವ ವ್ಯವಸ್ಥೆ ಕಲ್ಪಿಸಲು, ಈ ಭವನ ನಿರ್ಮಾಣ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. 3 ಲಕ್ಷ ಚದರ ಅಡಿ ಜಾಗದಲ್ಲಿ ಸಂಪಿಗೆ, ಸೇವಂತಿಗೆ, ತಾವರೆ ಮತ್ತು ಮಲ್ಲಿಗೆ ಹೆಸರಿನ ನಾಲ್ಕು ಭವ್ಯ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ.

ಈ ನಾಲ್ಕು ಹೊಸ ಕಟ್ಟಡ ನಿರ್ಮಾಣ ಹೊಣೆಯನ್ನು ಟಿಟಿಡಿ ವಹಿಸಿಕೊಂಡಿದೆ. ಈ ಹಿಂದೆ ಇದ್ದ ಕನಕಾಂಬರ ಎಂಬ ಹೆಸರಿನ ಕಟ್ಟಡವನ್ನು ನವೀಕರಣ ಮಾಡಲಾಗುತ್ತದೆ. ರಾಜ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ತಿಮ್ಮಪ್ಪನ ದರ್ಶನಕ್ಕೆ ಭಕ್ತರು ತೆರಳುತ್ತಾರೆ.  ಆದರೆ ಎಲ್ಲರಿಗೂ ಕರ್ನಾಟಕ ಭವನದಲ್ಲಿ ಉಳಿದುಕೊಳ್ಳಲು ಕೊಠಡಿಗಳು ಸಿಗುತ್ತಿಲ್ಲ.

ಈ ಹಿನ್ನೆಲೆಯಲ್ಲಿ ರಾಜ್ಯದ ಭಕ್ತರಿಗೆ ಕರ್ನಾಟಕ ಭವನದಲ್ಲೇ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ. ನೂತನ ಭವನ ನಿರ್ಮಾಣವಾದರೆ ಪ್ರತೀ ದಿನ 1,800 ಭಕ್ತರು ಉಳಿದುಕೊಳ್ಳಬಹುದು. ಕಾರ್ಯಕ್ರಮದಲ್ಲಿ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳಲ್ಲದೆ ಟಿಟಿಡಿ ಚೇರ್ಮನ್ ಸುಬ್ಬಾ ರೆಡ್ಡಿ, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಗಣ್ಯರು ಹಾಜರಿದ್ದರು.

ಶಿಲಾನ್ಯಾಸ ಕಾರ್ಯಕ್ರಮಕ್ಕೂ ಮುನ್ನ ಯಡಿಯೂರಪ್ಪ ಹಾಗೂ ಜಗನಮೋಹನ್ ರೆಡ್ಡಿ ತಿಮ್ಮಪ್ಪನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಹಿಂದೆ ಅಂದರೆ 1964ರಲ್ಲಿ ನ್ಯೂ ಮೈಸೂರು ಚೌಲ್ಟ್ರಿಗೆ ಅಂದಿನ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಶಂಕುಸ್ಥಾಪನೆ ನೆರವೇರಿಸಿದ್ದರು.

Facebook Comments