ಪ್ರವಾಹ ಪರಿಸ್ಥಿತಿಯನ್ನು ಸರ್ಕಾರ ಶಕ್ತಿಮೀರಿ ನಿಭಾಯಿಸುತ್ತಿದೆ : ಸಿಎಂ ಬಿಎಸ್‍ವೈ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.18- ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ನೆರೆಹಾವಳಿಯಿಂದ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಸರ್ಕಾರ ಶಕ್ತಿಮೀರಿ ನಿಭಾಯಿಸುತ್ತಿದ್ದು, ಸಂತ್ರಸ್ತರು ಆತಂಕಕ್ಕೆ ಒಳಗಾಗಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮನವಿ ಮಾಡಿದ್ದಾರೆ.  ಶಿಕಾರಿಪುರಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು, ಶಾಸಕರು, ಅಧಿಕಾರಿಗಳು ಈಗಾಗಲೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಕೊಟ್ಟು ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿದ್ದಾರೆ ಎಂದು ಹೇಳಿದರು.

ಸರ್ಕಾರ ಶಕ್ತಿಮೀರಿ ನೆರೆ ಹಾವಳಿ ಪರಿಸ್ಥಿತಿಯನ್ನು ನಿಭಾಯಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಜಲ ಪ್ರವಾಹದಲ್ಲಿ ಸಿಲುಕಿರುವವರನ್ನು ಮೊದಲು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವುದು, ಪರಿಹಾರ ಕೇಂದ್ರ ಸ್ಥಾಪನೆ, ಆಹಾರ, ವಸತಿ, ಬಟ್ಟೆ, ಹೊದಿಕೆಗಳನ್ನು ನೀಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಅಗತ್ಯವಿರುವ ಕಡೆ ಈಗಾಗಲೇ ಪರಿಹಾರ ಕೇಂದ್ರ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ. ಅಧಿಕಾರಿಗಳು ಕೂಡ ಅಹೋರಾತ್ರಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಈ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸುತ್ತಿದೆ.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಮಗನ ಆರೋಗ್ಯ ಸ್ಥಿತಿ ಗಂಭೀರವಾಗಿರುವುದರಿಂದ ನೆರೆ ಪೀಡಿತ ಸ್ಥಳಗಳಿಗೆ ಭೇಟಿ ಕೊಡಲು ಸಾಧ್ಯವಾಗಿಲ್ಲ. ಆದರೂ ಅವರು ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದು ಪರಿಸ್ಥಿತಿ ನಿಭಾಯಿಸುತ್ತಿದ್ದಾರೆ. ಚೆನ್ನೈನಲ್ಲಿ ಅವರ ಪುತ್ರ ಚಿಕಿತ್ಸೆ ಪಡೆಯುತ್ತಿರುವುದರಿಂದ ಪ್ರವಾಹ ಸ್ಥಳಕ್ಕೆ ತೆರಳಲು ಸಾಧ್ಯವಾಗಿಲ್ಲ.

ಸಚಿವರು ಮತ್ತು ಶಾಸಕರು ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ಕೊಡುತ್ತಿಲ್ಲ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರತಿಪಕ್ಷದ ನಾಯಕರಾಗಿ ಅವರು ತಮ್ಮ ಕೆಲಸ ಮಾಡುತ್ತಿದ್ದಾರೆ. ಅದರಲ್ಲಿ ತಪ್ಪೇನಿಲ್ಲ. ಸರ್ಕಾರ ಏನು ಮಾಡಬೇಕೋ ಅದನ್ನು ಮಾಡುತ್ತಿದೆ. ನಾನು ಬುಧವಾರ ವೈಮಾನಿಕ ಸಮೀಕ್ಷೆ ನಡೆಸಲಿದ್ದೇನೆ. ಅಧಿಕಾರಿಗಳಿಂದ ವಸ್ತುಸ್ಥಿತಿ ಮಾಹಿತಿ ಪಡೆಯಲಿದ್ದೇವೆ ಎಂದು ತಿಳಿಸಿದರು.

Facebook Comments