ಪ್ರವಾಹ ಪೀಡಿತ ಜಿಲ್ಲೆಗಳಿಗೆ ನಾಳೆ ಸಿಎಂ ಬಿಎಸ್‍ವೈ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.20- ಉತ್ತರಕರ್ನಾಟಕದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.  ನಾಳೆ ಬೆಳಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಕಲಬುರಗಿಗೆ ತೆರಳಲಿರುವ ಅವರು ಭಾರತೀಯ ವಾಯುಪಡೆಗೆ ಸೇರಿದ ವಿಶೇಷ ಹೆಲಿಕಾಪ್ಟರ್‍ನಲ್ಲಿ ವೈಮಾನಿಕ ಸಮೀಕ್ಷೆ ನಡೆಸುವರು.  ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಬಿಜಾಪುರ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ನಂತರ ಅಧಿಕಾರಿಗಳಿಂದ ನಷ್ಟದ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

ಮುಖ್ಯಮಂತ್ರಿಗಳು ಆಗಮಿಸುವ ಹಿನ್ನಲೆಯಲ್ಲಿ ನಾಲ್ಕು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಸಹಾಯಕ ಆಯುಕ್ತರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಬೇಕೆಂದು ಸೂಚಿಸಲಾಗಿದೆ.  ಕಳೆದ ಒಂದು ವಾರದಿಂದ ಕಲ್ಯಾಣ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಸೇರಿದಂತೆ ಮತ್ತಿತರ ಕಡೆ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ಅನೇಕ ಕಡೆ ಪ್ರವಾಹ ಉಂಟಾಗಿ ಭಾರೀ ಪ್ರಮಾಣದ ನಷ್ಟ ಸಂಭವಿಸಿದೆ.

ಬೆಳೆಗಳು, ಜಾನುವಾರುಗಳು ಕೊಚ್ಚಿಹೋಗಿದ್ದು, ಅನೇಕ ಕಡೆ ಮನೆಗಳು ಕುಸಿದು ಬಿದ್ದಿವೆ. ಈಗಾಗಲೇ ಸರ್ಕಾರ ಕೆಲವು ಕಡೆ ಪರಿಹಾರ ಕೇಂದ್ರಗಳನ್ನು ತೆರೆದಿದ್ದು, ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ.  ಸಚಿವರಾದ ಆರ್.ಅಶೋಕ್, ಶಶಿಕಲಾ ಜೊಲ್ಲೆ, ಪ್ರಭು ಚವ್ಹಾಣ್, ಲಕ್ಷ್ಮಣ್ ಸವದಿ ಸೇರಿದಂತೆ ಅನೇಕರು ಪ್ರವಾಹಪೀಡಿತ ಸ್ಥಳಗಳಿಗೆ ಭೇಟಿ ಕೊಟ್ಟಿದ್ದಾರೆ.

ಮನೆ ಕಳೆದುಕೊಂಡವರಿಗೆ ತಕ್ಷಣವೇ 10 ಸಾವಿರ ರೂ. ಪರಿಹಾರ, ಪರಿಹಾರ ಕೇಂದ್ರಗಳಲ್ಲಿ ಪೌಷ್ಟಿಕ ಆಹಾರ, ಮಾಸ್ಕ್ ಧರಿಸುವುದು, ಸ್ಯಾನಿಟಿಸರ್ ಸೇರಿದಂತೆ ಹಲವು ರೀತಿಯ ತುರ್ತು ಕಾರ್ಯಕ್ರಮಗಳನ್ನು ಕೈಗೊಂಡಿದೆ. ನಾಳೆ ಮುಖ್ಯಮಂತ್ರಿಯವರೇ ವೈಮಾನಿಕ ಸಮೀಕ್ಷೆ ನಡೆಸುತ್ತಿರುವುದರಿಂದ ಆತಂಕದಲ್ಲಿರುವ ಸಂತ್ರಸ್ತರ ಬಾಳಲ್ಲಿ ಸಣ್ಣದೊಂದು ಆಶಾಕಿರಣ ಮೂಡಿದೆ.

Facebook Comments