ಮಹಾಜನ್ ವರದಿಯೇ ಅಂತಿಮ: ಠಾಕ್ರೆ ಉದ್ದಟತಕ್ಕೆ ಸಿಎಂ ಬಿಎಸ್ವೈ ತಿರುಗೇಟು..!
ಬೆಂಗಳೂರು,ಜ.18- ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾಜನ್ ವರದಿಯೇ ಅಂತಿಮ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತೆ ಪುನರುಚ್ಚರಿಸಿದ್ದಾರೆ. ಬೆಳಗಾವಿ ಗಡಿಯ ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಅಲ್ಲಿನ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಎಸ್ವೈ ಅವರು, ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ ಎಂದು ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕøತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತುಗಳನ್ನಾಡಿರುವುದು ಅವರ ಉದ್ದಟತನದ ಪ್ರದರ್ಶನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರಿಗೂ ಗೊತ್ತಿರುವ ಸತ್ಯ. ಹೀಗಿರುವಾಗ ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿದೆ. ಇದನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ. ಕರ್ನಾಟದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ. ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ ಎಂದು ಯಡಿಯೂರಪ್ಪನವರು ಉದ್ದವ್ ಠಾಕ್ರೆಗೆ ನೀತಿ ಪಾಠ ಹೇಳಿದ್ದಾರೆ.
ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಯವರಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟದ ತತ್ವವನ್ನು ಗೌರವಿಸುವ ಬದ್ದತೆಯನ್ನು ತೋರಲಿ ಎಂದು ಸಲಹೆ ಮಾಡಿದ್ದಾರೆ.
ನಿನ್ನೆಯಷ್ಟೇ ಉದ್ದವ್ ಠಾಕ್ರೆ ಅವರು ಮಹಾರಾಷ್ಟ್ರ ಗಡಿ ವಿವಾದವನ್ನು ಕೆದಕಿ ಬೆಳಗಾವಿ ಗಡಿಭಾಗದಲ್ಲಿರುವ ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಿಕೊಳ್ಳಲು ಸರ್ಕಾರ ಸಿದ್ದವಿದೆ ಎಂದು ಹೇಳಿದ್ದರು. ಅವರ ಈ ಹೇಳಿಕೆಗೆ ರಾಜ್ಯದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಅನೇಕ ಕನ್ನಡಪರ ಸಂಘಟನೆಗಳು, ಉದ್ಧವ್ ಠಾಕ್ರೆ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿವೆ. ಅಲ್ಲದೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕರು ಉದ್ಧವ್ ಠಾಕ್ರೆ ಹೇಳಿಕೆಗೆ ಕೆಂಡ ಕಾರಿದ್ದಾರೆ.