ಅಮಿತ್ ಷಾ ಜೊತೆ ಮಾತುಕತೆ ನಂತರವೇ ಸಂಪುಟ ವಿಸ್ತರಣೆ : ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜ.15- ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಬೆಂಗಳೂರಿಗೆ ಬಂದ ನಂತರವೇ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ತಮ್ಮ ಸ್ವಕ್ಷೇತ್ರ ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 17 ಮತ್ತು 18ರಂದು ಎರಡು ದಿನಗಳ ಕಾಲ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ರಾಜ್ಯಕ್ಕೆ ಆಗಮಿಸುವರು. ಈ ವೇಳೆ ಸಂಪುಟ ವಿಸ್ತರಣೆ ಸೇರಿದಂತೆ ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಇದೇ 19ರಂದು ತಾವು ಸ್ವಿಟ್ರ್ಜಲ್ಯಾಂಡ್‍ನ ಡಾವೋಸ್‍ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದೇನೆ. ಅವರ ಜೊತೆ ಮಾತನಾಡಿ ಆದಷ್ಟು ಬೇಗ ಸಂಪುಟ ವಿಸ್ತರಣೆ ಮಾಡುವುದಾಗಿ ತಿಳಿಸಿದರು. ಮಾ.5ರಂದು ಬಜೆಟ್ ಮಂಡನೆ ಮಾಡಲಾಗುವುದು. ಈಗಾಗಲೇ ಅದಕ್ಕಾಗಿ ಪೂರ್ವ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ.

ಈ ಬಾರಿ ರೈತ ಪರವಾದ ಪರಿಶಿಷ್ಟ ಜಾತಿ/ಪಂಗಡ , ಹಿಂದುಳಿದ ವರ್ಗಗಳ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಲಾಗುವುದು. ರಾಜ್ಯದ ಜನತೆಯ ನಿರೀಕ್ಷೆಗಳನ್ನು ಈಡೇರಿಸುವ ಆಯವ್ಯಯ ಇದಾಗಲಿದೆ ಎಂದರು.  ನಿನ್ನೆ ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನಲ್ಲಿ ಸಾರ್ವಜನಿಕ ಸಮಾರಂಭವೊಂದರಲ್ಲಿ ತಾವು ಮಾತನಾಡಿರುವುದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Facebook Comments

Sri Raghav

Admin