ಅನರ್ಹ ಶಾಸಕರ ತೀರ್ಪಿನ ಬಗ್ಗೆ ಸಿಎಂ ಪ್ರತಿಕ್ರಿಯೆ ಏನು ಗೊತ್ತೇ..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.13- ನಾಳೆಯಿಂದಲೇ ಉಪಚುನಾವಣೆ ನಡೆಯುವ ಕ್ಷೇತ್ರಗಳಿಗೆ ಸಚಿವರನ್ನು ಮತ್ತು ಮುಖಂಡರನ್ನು ಉಸ್ತುವಾರಿಗಳನ್ನು ನೇಮಿಸಿ 17 ಕ್ಷೇತ್ರಗಳನ್ನು ಗೆಲ್ಲಲು ಕಾರ್ಯತಂತ್ರ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಅನರ್ಹ ಶಾಸಕರ ಕುರಿತಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಅವರು, ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಅಂದಿನ ವಿಧಾನಸಭೆ ಸ್ಪೀಕರ್ ರಮೇಶ್‍ಕುಮಾರ್ ಅವರ ಕುತಂತ್ರದಿಂದ ಶಾಸಕರನ್ನು ಅನರ್ಹ ಮಾಡಲಾಗಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸಿದ ಅವರು, ನ್ಯಾಯಾಲಯದಲ್ಲಿ ಅನರ್ಹರಿಗೆ ನ್ಯಾಯ ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸವಿತ್ತು. ಇದೀಗ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿರುವುದು ಸಿದ್ದರಾಮಯ್ಯ ಮತ್ತು ರಮೇಶ್‍ಕುಮಾರ್‍ಗೆ ಹಿನ್ನಡೆಯಾಗಿದೆ ಎಂದು ಟೀಕಿಸಿದರು.

ಉಪಚುನಾವಣೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದು, 17 ಕ್ಷೇತ್ರಗಳಲ್ಲೂ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸುತ್ತೇವೆ. ಒಂದೊಂದು ಕ್ಷೇತ್ರಗಳಿಗೂ ಸಚಿವರು ಹಾಗೂ ಪಕ್ಷದ ಮುಖಂಡರನ್ನು ನಾಳೆಯಿಂದಲೇ ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗುವುದು. 100ಕ್ಕೆ ನೂರು ನಾವೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈಗಾಗಲೇ ಉಪಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಕಾರ್ಯಕರ್ತರು ಪಕ್ಷದ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುತ್ತೇವೆ. ಯಾರಿಗೂ ಅಸಮಾಧಾನಕ್ಕೆ ಅವಕಾಶವಿಲ್ಲದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಉಪಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂಬುದರ ಕುರಿತಂತೆ ಸಂಜೆ ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ತಿಳಿಸಿದರು.

Facebook Comments

Sri Raghav

Admin