ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಪರಿಸ್ಥಿತಿ ಸುಧಾರಣೆಗೆ ಸಿಎಂ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿರುವ ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಪರಿಸ್ಥಿತಿ ಉತ್ತಮ ಪಡಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ವಿಶೇಷ ಗಮನ ಹರಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಿಕ್ಷಣ ಇಲಾಖೆಗೆ ಸೂಚಿಸಿದ್ದಾರೆ.

ಗೃಹಕಚೇರಿ ಕೃಷ್ಣಾದಲ್ಲಿ ಕೋವಿಡ್ ನಂತರದ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿಯವರು, ಯಾವುದೇ ಪ್ರದೇಶದ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಸಾಧನವಾಗಿರುವುದರಿಂದ ಕಲ್ಯಾಣ ಕರ್ನಾಟಕದ ಅಲ್ಲಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಬೋಧನಾ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಬೇಕೆಂದು ಸಲಹೆ ನೀಡಿದರು.

ಶಿಕ್ಷಣ ಇಲಾಖೆ ಕೈಗೊಂಡಿರುವ ಹಲವು ವಿಶಿಷ್ಟ ಉಪಕ್ರಮಗಳನ್ನು ವಿವರಿಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೊರತೆಯಿರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ವಿಶೇಷ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದೆಂದು ತಿಳಿಸಿದರು.

ಕಳೆದ ಮೂರು ತಿಂಗಳ ಅವಧಿಯಲ್ಲಿ ಕೋವಿಡ್ ನಂತರದ ಪರಿಸ್ಥಿತಿಯನ್ನು ಸರ್ವ ಸನ್ನದ್ಧವಾಗಿ ಎದುರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಣ ಇಲಾಖೆ ಹಲವು ಶಿಕ್ಷಣ ಸ್ನೇಹಿ, ವಿದ್ಯಾಸ್ನೇಹಿಯಾದ ನಿರ್ಣಯಗಳನ್ನು ತೆಗೆದುಕೊಂಡಿದೆ ಎಂದು ವಿವರಿಸಿದ ಸಚಿವರು, ಕೋವಿಡ್ನಿಂದಾಗಿ ನಿಗದಿತ ದಿನಾಂಕಕ್ಕೆ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಸಾಧ್ಯತೆಗಳು ಕಡಿಮೆಯಿರುವ ಹಿನ್ನೆಲೆಯಲ್ಲಿ, ಕಡಿತವಾಗಬಹುದಾದ ದಿನಗಳಿಗನುಗುಣವಾಗಿ ಪ್ರತಿ ತರಗತಿಗಳ ಪಠ್ಯ ಕಡಿತಕ್ಕೆ ತಜ್ಞರ ಸಮಿತಿ ವರದಿ ಆಧಾರದಲ್ಲಿ ಇಲಾಖೆ ಕ್ರಮ ವಹಿಸುತ್ತಿದೆ ಎಂದರು.

ಎಲ್ಲ ವಯೋಮಾನದ ವಿದ್ಯಾರ್ಥಿಗಳಿಗೆ ಕೋವಿಡ್-19 ಸಾಂಕ್ರಾಮಿಕ ರೋಗದ ಕುರಿತು ಪಠ್ಯವನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮಕ್ಕಳವಾಣಿ ಯೂ-ಟ್ಯೂಬ್ ಚಾನೆಲ್ ಮೂಲಕ ಮಕ್ಕಳ ಮನೋರಂಜನಾ ಕಲಿಕೆಗೆ ಒತ್ತು ನೀಡಲಾಗಿದೆ. ಶಿಕ್ಷಣಕ್ಕಾಗಿಯೇ ಪ್ರತ್ಯೇಕ ಚಾನೆಲ್ ಪ್ರಾರಂಭಿಸಲಾಗುತ್ತಿದೆ.

ಎಸ್ಸೆಸ್ಸೆಲ್ಸಿ ಚಂದನ ವಾಹಿನಿಯಲ್ಲಿ ಪುನರ್ಮನನ ತರಗತಿಗಳನ್ನು ನಡೆಸಲಾಗುತ್ತಿದೆ, ಡಿಜಿಟಲ್ ಗ್ರಂಥಾಲಯಗಳು, ಸಾರ್ವಜನಿಕ ಗ್ರಂಥಾಲಯ ಆಪ್ ಅನ್ನು ಲೋಕಾರ್ಪಣೆಗೊಳಿಸಲಾಗಿದೆ. ಒಟ್ಟಾರೆಯಾಗಿ ಕಲಿಕಾ ಕಾಯಿದೆಯ ಅವಕಾಶಗಳಲ್ಲಿ ನಿರಂತರ ಕಲಿಕಾ ಮೌಲ್ಯಮಾಪನದ ಆಶಯವನ್ನು ಸಮಗ್ರವಾಗಿ ಅನುಷ್ಠಾನಗೊಳಿಸುವಲ್ಲಿ ಇಂದಿನ ಪರಿಸ್ಥಿತಿಯನ್ನು ಸದ್ಬಳಕೆ ಮಾಡಿಕೊಳ್ಳಲು ಅವಶ್ಯಕವಿರುವ ಎಲ್ಲ ಉಪಕ್ರಮಗಳನ್ನು ಶಿಕ್ಷಣ ಇಲಾಖೆ ಜಾರಿ ಮಾಡಿದೆ ಎಂದು ಸುರೇಶ್ಕುಮಾರ್ ಹೇಳಿದರು.

# ಕರ್ನಾಟಕ ಶಿಕ್ಷಣ ನೀತಿ:
ವಲಸೆ ಬಂದ ಹಾಗೂ ಮನೆ ತೊರೆದು ಬಂದ ಮಕ್ಕಳಿಗೆ ಶಿಕ್ಷಣ ಕಾಯ್ದೆಯಡಿಯಲ್ಲಿ ವಿಶೇಷ ನೀತಿ ನಿರೂಪಣೆಗೆ ಇಲಾಖೆ ಈಗಾಗಲೇ ಕ್ರಮ ವಹಿಸಿದ್ದು, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸ್ಥಳೀಯ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಗತ್ಯಗಳಿಗೆ ಒಗ್ಗುವ ರೀತಿಯಲ್ಲಿ ಕರ್ನಾಟಕ ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸುವ ಕುರಿತಂತೆ ಶಿಕ್ಷಣ ಇಲಾಖೆ ಈಗಾಗಲೇ ತಜ್ಞರ ಸಮಿತಿ ರಚಿಸಿದ್ದು, ಮುಂದಿನ ದಿನಗಳಲ್ಲಿ ವಿಶೇಷ ಶಿಕ್ಷಣ ನೀತಿ ಹೊರತರಲಾಗುವುದು ಎಂದರು.

# ಪರೀಕ್ಷಾ ಮಂಡಳಿ ವಿಲೀನ
ಪರೀಕ್ಷಾ ವ್ಯವಸ್ಥೆಯನ್ನು ಇನ್ನಷ್ಟು ಸಬಲೀಕರಣಗೊಳಿಸುವ ಉದ್ದೇಶದಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳನ್ನು ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿಯನ್ನು ಜಾರಿಗೆ ತರಲು ಉದ್ದೇಶಿಸಲಾಗಿದ್ದು, ಪೂರ್ವಭಾವಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ ಎಂದರು.

ಆಡಳಿತ ವ್ಯವಸ್ಥೆಯಲ್ಲಿ ಉತ್ತರದಾಯಿತ್ವವನ್ನು ತುಂಬುವ ನಿಟ್ಟಿನಲ್ಲಿ ‘ಶಿಕ್ಷಕ ಮಿತ್ರ’ ಮೊಬೈಲ್ ಆಪ್, ಸಹಾಯವಾಣಿಯಂತಹ ತಂತ್ರಜ್ಞಾನಾಧಾರಿತ ಉಪಕ್ರಮಗಳನ್ನು ಜಾರಿಗೆ ತರಲು ಕ್ರಮ ವಹಿಸಲಾಗುತ್ತಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಶಿಕ್ಷಣ ಇಲಾಖೆಗೆ ಪ್ರಸಕ್ತ ಸಾಲಿನಲ್ಲಿ ಸಮವಸ್ತ್ರ, ಪಠ್ಯಪುಸ್ತಕ, ಆರ್.ಟಿ.ಇ. ಮರುಪಾವತಿಯಂತಹ ಪ್ರಮುಖ ಯೋಜನಾ ಕಾರ್ಯಕ್ರಮಗಳಿಗೆ ಒದಗಿಸಲಾಗಿರುವ 2362 ಕೋಟಿ ರೂ.ಗಳ ಅನುದಾನ ಅತ್ಯಾದ್ಯತೆಯ ವಲಯಕ್ಕೆ ನೀಡಬೇಕಾಗಿರುವ ಅನುದಾನವಾಗಿರುವ ಹಿನ್ನೆಲೆಯಲ್ಲಿ ಯಾವುದೇ ಕಡಿತಕ್ಕೆ ಮುಂದಾಗದೇ ಪೂರ್ಣವಾಗಿ ಬಿಡುಗಡೆ ಮಾಡಬೇಕೆಂದು ಸುರೇಶ್ ಕುಮಾರ್ ಮನವಿ ಮಾಡಿದರು.

ಶಿಕ್ಷಣ ಇಲಾಖೆಯ ಉಪಕ್ರಮಗಳನ್ನು ಸಾವಧಾನದಿಂದ ಆಲಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಶಿಕ್ಷಣ ಇಲಾಖೆಯ ಕೆಲಸಗಳಿಗೆ ಸರ್ಕಾರದ ಪೂರ್ಣ ಬೆಂಬಲ ಇದೆ ಎಂದು ಆಭಯ ನೀಡಿದರು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ, ಸಿ.ಎಂ. ರವರ ಅಪರ ಮುಖ್ಯಕಾರ್ಯದರ್ಶಿ ರವಿಕುಮಾರ್, ಆರ್ಥಿಕ ಇಲಾಖೆ ಎಸಿಎಸ್ ಐ.ಎಸ್.ಎನ್. ಪ್ರಸಾದ್, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

Facebook Comments

Sri Raghav

Admin