ಸುಗ್ರೀವಾಜ್ಞೆ ಮೂಲಕ ಭೂ ಸುಧಾರಣಾ ಕಾಯ್ದೆ ಜಾರಿ : ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.13- ವಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಭೂ ಸುಧಾರಣಾ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಸ್ಪಷ್ಟಪಡಿಸಿದರು.

ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಬೆಂಗಳೂರಿನ ಯಡಿಯೂರು ವಾರ್ಡ್‍ನಲ್ಲಿ ನಿರ್ಮಿಸಿದ್ದ ಸರ್ದಾರ್ ವಲ್ಲಭಭಾಯ್ ಅಕಾಡೆಮಿ ಹಾಗೂ ಸಾವಯವ ಗೊಬ್ಬರ ಘಟಕ ಕಾರ್ಯಕ್ರಮ ಉದ್ಘಾಟಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಭೂ ಸುಧಾರಣಾ ಕಾಯ್ದೆಯನ್ನು ಬಹುತೇಕ ಎಲ್ಲ ರಾಜ್ಯಗಳೂ ಜಾರಿ ಮಾಡಿವೆ. ಕೃಷಿ ಚಟುವಟಿಕೆಗಳಿಗೆ ಇದರಿಂದ ಅನುಕೂಲವಾಗಲಿದೆ.

ಕೈಗಾರಿಕೆಗಳು ಸ್ಥಾಪನೆಯಾಗಲು ಸಹಕಾರಿಯಾಗುತ್ತದೆ. ಇದನ್ನು ನಾವು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುತ್ತೇವೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಇದಕ್ಕೆ ಸಹಕರಿಸಬೇಕು ಎಂದು ಹೇಳಿದರು.

ವಿಪಕ್ಷಗಳನ್ನು ವಿಶ್ವಾಸಕ್ಕೆ ಪಡೆದು ಈ ಕಾಯ್ದೆಯನ್ನು ನಾವು ಜಾರಿಗೆ ತರುತ್ತೇವೆ. ಸಿದ್ದರಾಮಯ್ಯನವರ ಜತೆ ಚರ್ಚೆ ಮಾಡುತ್ತೇನೆ ಎಂದು ಅವರು ಹೇಳಿದರು. ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುತ್ತಿರುವುದನ್ನು ಎಲ್ಲರೂ ಸ್ವಾಗತಿಸಿದ್ದಾರೆ. ತಿದ್ದುಪಡಿ ಬಗ್ಗೆ ಸಿದ್ದರಾಮಯ್ಯನವರಿಗೆ ಮನವರಿಕೆ ಮಾಡಿಕೊಡುತ್ತೇವೆ.

ಯಡಿಯೂರು ವಾರ್ಡ್‍ನಲ್ಲಿ ಸಾವಯವ ಗೊಬ್ಬರ ಘಟಕ ಉದ್ಘಾಟನೆ ಮಾಡಲಾಗಿದೆ. ನಗರದಲ್ಲಿ ಶೇ.60ರಷ್ಟು ಹಸಿಕಸ ಉತ್ಪಾದನೆಯಾಗುತ್ತಿದ್ದು, ಇದರಿಂದ ಗೊಬ್ಬರ ತಯಾರಿಕೆ ಮಾಡಬಹುದು. ತ್ಯಾಜ್ಯ ವಿಲೇವಾರಿ ಸಮಸ್ಯೆ ಬಗೆಹರಿಯಲಿದೆ ಎಂದು ಅವರು ಹೇಳಿದರು.

ಕಂದಾಯ ಸಚಿವ ಆರ್.ಅಶೋಕ್, ಮೇಯರ್ ಗೌತಮ್‍ಕುಮಾರ್, ಸಂಸದ ತೇಜಸ್ವಿ ಸೂರ್ಯ, ಬೆಂಗಳೂರು ನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಆರ್.ರಮೇಶ್, ಸ್ಥಳೀಯ ಪಾಲಿಕೆ ಸದಸ್ಯರಾದ ಪೂರ್ಣಿಮಾ ರಮೇಶ್ ಮುಂತಾದವರು ಈ ಸಂದರ್ಭದಲ್ಲಿದ್ದರು.

Facebook Comments