ಬಿಜೆಪಿ 15 ಕ್ಷೇತ್ರಗಳಲ್ಲೂ ಗೆದ್ದರೂ ಅಚ್ಚರಿ ಇಲ್ಲ : ಡಿಸಿಎಂ ಅಶ್ವಥನಾರಾಯಣ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.7-ರಾಜ್ಯ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು 15 ಕ್ಷೇತ್ರಗಳಲ್ಲೂ ಗೆದ್ದರೂ ಆಶ್ಚರ್ಯಪಡಬೇಕಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥನಾರಾಯಣ ತಿಳಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಗಾಂಧಿಭವನದಲ್ಲಿಂದು ಹಮ್ಮಿಕೊಂಡಿದ್ದ ಹೊರರಾಜ್ಯಗಳ ವಿಶ್ವವಿದ್ಯಾನಿಲಯಗಳಲ್ಲಿ ಕನ್ನಡ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ 12ಕ್ಕಿಂತಲೂ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಲಿದೆ. ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀಡಿದ ಭರವಸೆಯನ್ನು ಉಪಚುನಾವಣೆ ಫಲಿತಾಂಶ ಹೊರಬಿದ್ದ ನಂತರ ಈಡೇರಿಸುತ್ತೇವೆ.

ಉಪಮುಖ್ಯಮಂತ್ರಿಗಳ ಸ್ಥಾನವನ್ನು ಹೆಚ್ಚಿಸುವ ವಿಚಾರ ಪಕ್ಷ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟಿದ್ದು ಎಂದರು.ಹೊರರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಕನ್ನಡದ ರಾಯಭಾರಿಗಳಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಹೆಚ್ಚಿನ ರೀತಿಯ ಪ್ರೋತ್ಸಾಹ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ಸಹಕಾರ ನೀಡಬೇಕು. ಹೊರರಾಜ್ಯದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಿರುವುದು ಶಕ್ತಿ ತುಂಬುವಂತಹ ಸತ್ಕಾರ್ಯವಾಗಿದೆ ಎಂದರು.

ಮಾಹಿತಿ ತಂತ್ರಜ್ಞಾನ ಬೆಳೆದಂತೆ ಕನ್ನಡವು ಬದಲಾವಣೆಗಳಿಗೆ ಹೊಂದಿಕೊಳ್ಳಬೇಕು. ಎಲ್ಲಾ ಹಂತಗಳಲ್ಲೂ ಡಿಜಟಲೀಕರಣವಾಗಬೇಕು. ಸಿಬಿಎಸ್‍ಇ ಮತ್ತು ಐಸಿಎಸ್‍ಇ ಶಾಲೆಗಳಲ್ಲೂ ಕಡ್ಡಾಯವಾಗಿ ಕನ್ನಡ ಕಲಿಯುವಂತಾಗಬೇಕು ಎಂದರು.

Facebook Comments