ಪೆಟ್ರೋಲ್-ಡೀಸೆಲ್-ಗ್ಯಾಸ್ ಬೆಲೆಏರಿಕೆ ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಸೈಕಲ್ ಜಾಥಾ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.7- ಪೆಟ್ರೋಲ್, ಡೀಸೆಲ್, ಗ್ಯಾಸ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಇಂದು ಸೈಕಲ್ ಜಾಥಾದ ಮೂಲಕ ಪ್ರತಿಭಟನೆ ನಡೆಸಿದ್ದು, ರಾಜ್ಯದಲ್ಲೂ ಕಾಂಗ್ರೆಸ್ ನಾಯಕರು ವಿಧಾನಸಭಾ ಕ್ಷೇತ್ರಗಳಲ್ಲಿ ಸೈಕಲ್ ತುಳಿದು ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉಡುಪಿಯಲ್ಲಿ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮೈಸೂರಿನಲ್ಲಿದ್ದು, ಅಲ್ಲಿಯೇ ಸೈಕಲ್ ಜಾಥಾದಲ್ಲಿ ಭಾಗವಹಿದ್ದಾರೆ. ಬೆಂಗಳೂರಿನ ಕೇಂದ್ರ, ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಗಳು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಅವರ ನೇತೃತ್ವದಲ್ಲಿ 32 ವಿಧಾನಸಭಾ ಕ್ಷೇತ್ರಗಳಲ್ಲಿ ಸೈಕಲ್ ಜಾಥಾ ನಡೆಸಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಜಿಲ್ಲಾಧ್ಯಕ್ಷರಾದ ಜಿ.ಶೇಖರ್, ರಾಜಕುಮಾರ್, ಕೃಷ್ಣಪ್ಪ, ಮುನಿಶಾಮಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಬ್ಲಾಕ್ ಮಟ್ಟದಿಂದ ಸೈಕಲ್ ಜಾಥ ನಡೆದಿದೆ. ಪೆಟ್ರೋಲ್, ಡೀಸೆಲ್ ಬೆಲೆ ರಾಜ್ಯದಲ್ಲಿ 100 ಗಡಿ ದಾಟಿದಾಗ ನಾಕ್‍ಔಟ್ 100 ಎಂಬ ಹೆಸರಿನಲ್ಲಿ ಕಾಂಗ್ರೆಸ್ ರಾಜ್ಯಾದ್ಯಂತ ಐದು ಸಾವಿರ ಪೆಟ್ರೋಲ್ ಬಂಕ್‍ಗಳ ಮುಂದೆ ಪ್ರತಿಭಟನೆ ನಡೆಸಿತ್ತು.

ಇಂದು ಬೆಂಗಳೂರಿನಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಕಡಿಮೆಯಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶೇ.60ರಷ್ಟು ತೆರಿಗೆ ಹಾಕಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು ದುಬಾರಿ ಮಾಡುತ್ತಿವೆ. ನಾಕ್‍ಔಟ್ 100 ಪ್ರತಿಭಟನೆಯ ಬಳಿಕವೂ ದರ ಏರಿಕೆಯಾಗುತ್ತಲೆ ಇದೆ. ಅಡುಗೆ ಅನಿಲ ಪ್ರತಿ 15 ದಿನಗಳಿಗೆ ಒಮ್ಮೆ ಏರಿಕೆ ಕಾಣುತ್ತಲೇ ಇದೆ ಎಂದು ಆತಂಕ ವ್ಯಕ್ತ ಪಡಿಸಿದರು.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಅಗತ್ಯ ವಸ್ತುಗಳ ಬೆಲೆ ಕೂಡ ದುಬಾರಿಯಾಗಿದೆ. ಕೊರೊನಾ ಸಂಕಷ್ಟ ಕಾಲದಲ್ಲಿ ಜನ ಸಾಮಾನ್ಯರು ಬದುಕುವುದೇ ಕಷ್ಟವಾಗಿರುವಾಗ ಇಂಧನಗಳ ಬೆಲೆ ಏರಿಕೆಯಿಂದ ಜನ ಜೀವನ ಮತ್ತಷ್ಟು ಜರ್ಝರಿತವಾಗಿದೆ ಎಂದು ಅವರು ಆರೋಪಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸುತ್ತಿರುವ ತೆರಿಗೆಯನ್ನು ಕಡಿಮೆ ಮಾಡಬೇಕು ಆಗ್ರಹಿಸಿ ನಮ್ಮ ಪಕ್ಷದ ನಾಯಕರು ನಿರಂತರವಾಗಿ ಪ್ರತಿಭಟನೆ ನಡೆಸಿದರೂ ಸರ್ಕಾರಗಳು ಗಂಭೀರವಾಗಿ ಪರಿಗಣಿಸಿಲ್ಲ. ಇವು ಜನಸಾಮಾನ್ಯರಿಗಾಗಿ ಸರ್ಕಾರ ನಡೆಸುತ್ತಿಲ್ಲ. ಬಡವರನ್ನು ಶೋಷಣೆ ಮಾಡಿ ಶ್ರೀಮಂತರನ್ನು ಉದ್ಧಾರ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಉಡುಪಿಯಲ್ಲಿ ಡಿ.ಕೆ.ಶಿವಕುಮಾರ್, ಮೈಸೂರಿನಲ್ಲಿ ಸಿದ್ದರಾಮಯ್ಯ ಅವರು ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಕಿಡಿಕಾರಿದರು. ಬಿಜೆಪಿ ಜನ ವಿರೋಧಿ ಸರ್ಕಾರ, ಅಧಿಕಾರಕ್ಕೆ ಬಂದಾಗಿನಿಂದಲೂ ಜನರಿಗೆ ಹೊರೆಯಾಗುವ ನಿರ್ಧಾರಗಳನ್ನೇ ಜಾರಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಜನಸಾಮಾನ್ಯರು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳಿಗೆ ಕಾಂಗ್ರೆಸ್‍ನಿಂದ ಮಾತ್ರ ಉತ್ತಮ ಸರ್ಕಾರ ನೀಡಲು ಸಾಧ್ಯ. ಜನ ಬಿಜೆಪಿ ಆಡಳಿತದಿಂದ ಬೇಸತ್ತು ಹೋಗಿದ್ದಾರೆ. ಕೊರೊನಾ ಕಾಲದಲ್ಲಿಯೂ ತಮ್ಮ ಕಷ್ಟದಲ್ಲಿ ಸ್ಪಂದಿಸದ ಸರ್ಕಾರ ಅಸ್ತಿತ್ವದಲ್ಲಿ ಇರಬೇಕೆ ಎಂದು ಹೋದ ಕಡೆಯಲೆಲ್ಲಾ ಪ್ರಶ್ನಿಸಲಾರಂಭಿಸಿದ್ದಾರೆ ಎಂದು ಕಿಡಿಕಾರಿದರು.

Facebook Comments