Saturday, April 20, 2024
Homeರಾಷ್ಟ್ರೀಯಬರ ಪರಿಹಾರ ಅನುದಾನ ಬಿಡುಗಡೆಗೆ ಕಾಂಗ್ರೆಸ್ ಒತ್ತಾಯ

ಬರ ಪರಿಹಾರ ಅನುದಾನ ಬಿಡುಗಡೆಗೆ ಕಾಂಗ್ರೆಸ್ ಒತ್ತಾಯ

ಬೆಂಗಳೂರು, ಜ.3- ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಿರುವ ಬರ ಪರಿಹಾರ ಹಾಗೂ ಇತರೆ ಅನುದಾನಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕರ್ನಾಟಕದಿಂದ 18177.44 ಕೋಟಿ ರೂ. ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. 42 ಸಾವಿರ ಕೋಟಿ ರೂ. ಜಿ.ಎಸ್.ಟಿ.ಪಾಲು ಸೇರಿ ಇತರ ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ವತಃ ಪ್ರಧಾನಿ ಮೋದಿ ಅವರನ್ನು ಭೇಟಿಯಾದರೂ ಸ್ಪಂದನೆ ಇಲ್ಲ. ಅನುದಾನ ಬಿಡುಗಡೆಗೆ ಒತ್ತಾಯಿಸದ ಬಿಜೆಪಿ ಸಂಸದರ ವಿರುದ್ಧ ಸುರ್ಜೆವಾಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ 236 ರಲ್ಲಿ 223 ತಾಲೂಕುಗಳನ್ನು ಬರ ಪೀಡಿತ ಎಂದು ಗುರುತಿಸಲಾಗಿದೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ ಎಂದು ಅಧ್ಯಯನ ನಡೆಸಿ ವರದಿ ಮಾಡಲಾಗಿದೆ.

ಜಪಾನ್ ಭೂಕಂಪಕ್ಕೆ 62 ಬಲಿ, ಮುಂದುವರೆದ ರಕ್ಷಣಾ ಕಾರ್ಯಚರಣೆ

ಬರದಿಂದ ಸಣ್ಣ ಹಾಗೂ ಅತಿ ಸಣ್ಣ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಎನ್.ಡಿ.ಆರ್.ಎಫ್. ನಿಯಮಾವಳಿಯಂತೆ 18,177.44 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಅದರಲ್ಲಿ 4663.12 ಕೋಟೊ ರೂ. ಇನ್ಪುಟ್ ಸಬ್ಸಿಡಿ, 12,577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಅನುದಾನ, 363.68 ಕೋಟಿ ರೂ. ಜಾನುವಾರುಗಳ ರಕ್ಷಣೆಗೆ ಹಣ ಒದಗಿಸುವಂತೆ ಮನವಿ ಮಾಡಲಾಗಿದೆ. ಆದರೆ, ಕೇಂದ್ರ ಸರ್ಕಾರ ಮಾತ್ರ ಕಿವುಡಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೆಗೌಡ ಅವರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಶೀಘ್ರ ಹಣ ಬಿಡುಗಡೆಗೆ ಒತ್ತಾಯಿಸಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಹಾಗೂ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಮಾತನಾಡಿದ್ದಾರೆ. ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದಾರೆ. ಇಷ್ಟಾದರೂ ಕೇಂದ್ರ ಇದುವರೆಗೂ ಬರ ಪರಿಹಾರ ಬಿಡುಗಡೆ ಮಾಡಿಲ್ಲ. ಇದು ಕೇಂದ್ರ ಸರ್ಕಾರ ನಡೆದುಕೊಳ್ಳುವ ರೀತಿಯೇ? ಎಂದು ಸುರ್ಜೆವಾಲಾ ಕಟುವಾಗಿ ಪ್ರಶ್ನಿಸಿದ್ದಾರೆ.

ಕೇವಲ ಬರ ಪರಿಹಾರ ಮಾತ್ರವಲ್ಲ ಜಿಎಸ್ ಟಿಯ ರಾಜ್ಯದ ಪಾಲು, ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡುವುದು ಬಾಕಿ ಇದೆ. 14 ನೇ ಹಣಕಾಸು, 15 ನೇ ಹಣಕಾಸು ಸೇರಿ ಕೇಂದ್ರ ಪುರಸ್ಕೃತ ಯೋಜನೆಗೆ ಬರಬೇಕಾದ ಸುಮಾರು 42 ಸಾವಿರ ಕೋಟಿ ರೂ. ಅನುದಾನ ಬಾಕಿ ಇದೆ. ಆ ಅನುದಾನವನ್ನೂ ಶೀಘ್ರ ಬಿಡುಗಡೆ ಮಾಡಬೇಕು ಎಂದು ಸುರ್ಜೆವಾಲಾ ಒತ್ತಾಯಿಸಿದ್ದಾರೆ.

ಸಂಸದರು ಏನು ಮಾಡುತ್ತಿದ್ದಾರೆ ?
ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಬೆಳೆ ನಷ್ಟದಿಂದ ಕಂಗಾಲಾಗಿದ್ದಾರೆ. ಸರ್ಕಾರದಿಂದ ಪರಿಹಾರದ, ನೆರವಿನ ನಿರೀಕ್ಷೆಯಲ್ಲಿದ್ದಾರೆ. ರಾಜ್ಯದಿಂದ 26 ಬಿಜೆಪಿಯಿಂದ ಆಯ್ಕೆಯಾದ ಹಾಗೂ ಒಬ್ಬರು ಬಿಜೆಪಿ ಬೆಂಬಲಿತ ಸಂಸದರಿದ್ದಾರೆ. ಈಗ ಅವರು ಏನು ಮಾಡುತ್ತಿದ್ದಾರೆ ಎಂಬುದೇ ಅರ್ಥವಾಗದು. ಜನರ ಮುಂದೆ ಹೇಗೆ ಮುಖ ಹೊತ್ತು ಹೋಗುತ್ತಾರೆ ? ಎಂದು ಸುರ್ಜೆವಾಲಾ ಪ್ರಶ್ನಿಸಿದ್ದಾರೆ.
ಈ ಎಲ್ಲ ಸಂಸದರು ರಾಜಕೀಯ ಮಾಡದೇ ರೈತರ ಹಿತಾಸಕ್ತಿಯ ಪರವಾಗಿ ಕೆಲಸ ಮಾಡಬೇಕು. ಪ್ರಧಾನಿ ಅವರನ್ನು ಭೇಟಿಯಾಗಿ ಅನುದಾನ ಬಿಡುಗಡೆಗೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದ್ದಾರೆ.

RELATED ARTICLES

Latest News