ಆಸೆ, ಆಮಿಷ, ಬಲವಂತದ ಮತಾಂತರ ನಿಷೇಧಕ್ಕೆ ಕಾಯ್ದೆ : ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.28- ಆಸೆ, ಆಮಿಷವೊಡ್ಡಿ ಇಲ್ಲವೇ ಬಲವಂತವಾಗಿ ಮತಾಂತರ ಮಾಡುವುದನ್ನು ತಡೆಗಟ್ಟುವ ಸದುದ್ದೇಶದಿಂದ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಚಿಂತನೆಯಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವ ಇಚ್ಛೆಯಿಂದ ಮಾತ್ರ ಮತಾಂತರವಾಗಲು ಕಾನೂನಿನಲ್ಲಿ ಅವಕಾಶವಿದೆ. ಕೆಲವು ಕಡೆ ಹಣದ ಆಸೆ, ಬೇರೆ ಆಮಿಷಗಳನ್ನು ಒಡ್ಡಿ ಮತಾಂತರಗೊಳಿಸುವ ಪ್ರಕರಣಗಳು ಅಲ್ಲಲ್ಲಿ ನಡೆಯುತ್ತಿವೆ ಎಂಬುದನ್ನು ಸಿಎಂ ಒಪ್ಪಿಕೊಂಡರು.

ಇತ್ತೀಚೆಗೆ ನಾನು ಕಲಬುರಗಿ ಸೇರಿದಂತೆ ಮತ್ತಿತರ ಕಡೆ ಭೇಟಿ ನೀಡಿದಾಗ ಕೆಲವು ಕಡೆ ಮತಾಂತರವಾಗುತ್ತಿವೆ ಎಂಬ ಆರೋಪಗಳು ಕೇಳಿಬಂದಿವೆ. ಬಲವಂತವಾಗಿ ಮತಾಂತರವಾಗುವುದನ್ನು ತಡೆಗಟ್ಟಲು ಜಿಲ್ಲಾಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.

ರಾಜ್ಯದಲ್ಲಿ ಇದು ಪದೇ ಪದೇ ಕೇಳಿ ಬರುತ್ತಲೇ ಇದೆ. ಇದಕ್ಕೆ ಶಾಶ್ವತವಾಗಿ ಕಡಿವಾಣ ಹಾಕುವ ಅಗತ್ಯವಿರುವುದರಿಂದ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಚಿಂತನೆಯಿದೆ ಎಂದು ತಿಳಿಸಿದರು.

# ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ:
ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಇಂದು ದಿನಾಂಕವನ್ನು ಘೋಷಣೆ ಮಾಡಿದೆ. ಹಾನಗಲ್ ಮತ್ತು ಸಿಂಧಗಿ ಕ್ಷೇತ್ರಗಳಿಗೆ ಶೀಘ್ರದಲ್ಲೇ ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತೇವೆ ಎಂದರು. ಎರಡು ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲು ಸಾಕಷ್ಟು ಅವಕಾಶವಿದೆ.

ಬಲಿಷ್ಠವಾದ ಕಾರ್ಯಕರ್ತರ ಪಡೆ, ಬೂತ್ ಮಟ್ಟದಲ್ಲೂ ಪಕ್ಷದ ಸಂಘಟನೆ ಪ್ರಬಲವಾಗಿರುವುದರಿಂದ ಸಿಂಧಗಿ ಮತ್ತು ಹಾನಗಲ್‍ನಲ್ಲಿ ನಮ್ಮ ಅಭ್ಯರ್ಥಿಗಳೇ ಗೆಲ್ಲಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಈಗಾಗಲೇ ಕಳೆದ ಕೋರ್ ಕಮಿಟಿ ಸಭೆಯಲ್ಲಿ ಉಪಚುನಾವಣೆ ಸಂಬಂಧ ಚರ್ಚೆ ಮಾಡಲಾಗಿತ್ತು.

ಪಕ್ಷದ ರಾಜ್ಯಾಧ್ಯಕ್ಷರಾದ ನಳೀನ್‍ಕುಮಾರ್ ಕಟೀಲ್ ಅವರು ಎರಡು ಕ್ಷೇತ್ರಗಳಿಗೆ ವೀಕ್ಷಕರನ್ನು ಕಳುಹಿಸಿ ಸ್ಥಳೀಯರಿಂದ ಮಾಹಿತಿ ಪಡೆಯುತ್ತಾರೆ. ಎಲ್ಲರೂ ಒಗ್ಗಟ್ಟಿನಿಂದ ಸಾಮೂಹಿಕ ನಾಯಕತ್ವದಡಿ ಚುನಾವಣೆ ಎದುರಿಸಿ ಗೆಲ್ಲಲಿದ್ದೇವೆ ಎಂದರು.

ಹಾನಗಲ್‍ನಲ್ಲಿ ಮಾಜಿ ಸಚಿವರಾದ ಸಿ.ಎಂ.ಉದಾಸಿ ಅವರು ಆರು ಬಾರಿ ಗೆದ್ದು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಹೀಗಾಗಿ ನಮ್ಮ ಗೆಲುವಿಗೆ ಇದು ಸಹಕಾರಿಯಾಗಲಿದೆ. ಅದೇ ರೀತಿ ಸಿಂಧಗಿಯಲ್ಲಿ ಮಾಜಿ ಶಾಸಕ ರಮೇಶ್ ಭೂಸನೂರುಮಠ ಕೂಡ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರು. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಕೆಲವೇ ಮತಗಳ ಅಂತರದಲ್ಲಿ ಸೋಲುಂಟಾಯಿತು ಎಂದು ಹೇಳಿದರು.

ಶೀಘ್ರದಲ್ಲೇ ಪಕ್ಷದ ಮುಖಂಡರು ಮತ್ತೊಮ್ಮೆ ಸಭೆ ಸೇರಿ ಅಭ್ಯರ್ಥಿಗಳ ಹೆಸರನ್ನು ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡಲಾಗುವುದು. ಮತದಾರರು ಬುದ್ದಿವಂತರಾಗಿದ್ದು, ಯಾರನ್ನು ಆಯ್ಕೆ ಮಾಡಬೇಕು ಎಂಬುದು ಅವರಿಗೆ ಗೊತ್ತಿದೆ. ಈ ಉಪಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸವಿದೆ ಎಂದು ಸಿಎಂ ತಿಳಿಸಿದರು.

Facebook Comments