ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯದಿಂದ ಕೊರೊನಾ ಸೋಂಕಿತ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ.30- ಖಾಸಗಿ ಆಸ್ಪತ್ರೆಗಳ ನಿರ್ಲಕ್ಷದಿಂದ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾರೆ.  ನಗರ್ತಪೇಟೆಯ ನಿವಾಸಿಯೊಬ್ಬರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು.

ತಕ್ಷಣ ಅವರು ಕೊರೊನಾ ಚಿಕಿತ್ಸೆಗೆ ಮೀಸಲಿಟ್ಟಿರುವ ಖಾಸಗಿ ಆಸ್ಪತ್ರೆಗಳನ್ನು ಎಡತಾಕಿದರೂ ಯಾರೂ ಅಡ್ಮಿಟ್ ಮಾಡಿಕೊಳ್ಳದ ಪರಿಣಾಮ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದಾರೆ.

ಈ ಮಧ್ಯೆ ಗುಟ್ಟಿಗೆರೆ ಮೂಲದ ವ್ಯಕ್ತಿಯೊಬ್ಬರಿಗೂ ಸೋಂಕು ಕಾಣಿಸಿಕೊಂಡಿದ್ದು ಅವರು 7 ಖಾಸಗಿ ಆಸ್ಪತ್ರೆಗಳಿಗೆ ತೆರಳಿ ಅಡ್ಮಿಟ್ ಮಾಡಿಕೊಳ್ಳುವಂತೆ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಲಿಲ್ಲ.  ಆದರೆ ಮತ್ತೊಂದು ಖಾಸಗಿ ಆಸ್ಪತ್ರೆಯವರು ದಾಖಲು ಮಾಡಿಕೊಂಡು ಚಿಕಿತ್ಸೆ ನೀಡುತ್ತಿರುವುದರಿಂದ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಕೊರೊನಾದಿಂದ ತಡರಾತ್ರಿ 69 ವರ್ಷದ ವೃದ್ಧನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅದೇ ರೀತಿ ವಿಧಾನಸೌಧದ ಆರ್‍ಡಿಪಿಆರ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ 39 ವರ್ಷದ ನೌಕರನೊಬ್ಬ ಮೈಸೂರಿನಲ್ಲಿ ಮೃತಪಟ್ಟಿರುವುದು ದೃಢಪಟ್ಟಿದೆ. ಒಟ್ಟಾರೆ ಬೆಂಗಳೂರಿನಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರ ಜೊತೆ ಸಾವನ್ನಪ್ಪುತ್ತಿರುವವರ ಸಂಖ್ಯೆಯು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

# ಮತ್ತಷ್ಟು ಸೋಂಕಿತರು:
ಕಳೆದ ಮೂರ್ನಾಲ್ಕು ದಿನಗಳಿಂದ ನಗರದಲ್ಲಿ 700ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ಪತ್ತೆಯಾಗುತ್ತಿವೆ. ಇಂದು 1500ಕ್ಕೂ ಹೆಚ್ಚು ಜನರ ಸ್ವಾಬ್ ವರದಿ ಇಂದು ಸಂಜೆ ಹೊರಬೀಳಲಿದ್ದು, 500ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆಗಳಿವೆ.

# ಪರೀಕ್ಷಾರ್ಥಿಗಳ ನೇಮಕ:
ನಗರದಲ್ಲಿ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಅಗತ್ಯ ಸಿಬ್ಬಂದಿ ಕೊರತೆ ಎದುರಾಗಿದ್ದು, ಪರೀಕ್ಷಾರ್ಥ ತಹಸೀಲ್ದಾರ್‍ಗಳನ್ನು ಕೊರೊನಾ ಕಾರ್ಯಕ್ಕೆ ಬಳಕೆ ಮಾಡಿಕೊಳ್ಳಲು ಬಿಬಿಎಂಪಿ ತೀರ್ಮಾನಿಸಿದೆ.  2015ರ ಬ್ಯಾಚ್‍ನ 64 ಪರೀಕ್ಷಾರ್ಥ ತಹಸೀಲ್ದಾರ್‍ಗಳನ್ನು ಕಂದಾಯ ಇಲಾಖೆ ಬಿಬಿಎಂಪಿಗೆ ಹಸ್ತಾಂತರಿಸಿದೆ.

 

Facebook Comments