ಕೊರೊನಾಗೆ ಕೋಲಾರದಲ್ಲಿ ಮೊದಲ ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

ಕೋಲಾರ,ಜೂ.26- ರಾಜ್ಯಾದ್ಯಂತ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಏರುತ್ತಲೇ ಇದ್ದು, ಜಿಲ್ಲೆಯಲ್ಲಿ ಕೊರೊನಾಕ್ಕೆ ಮೊದಲ ಬಲಿಯಾಗಿದೆ.  ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕೆಜಿಎಫ್ ತಾಲ್ಲೂಕು ತೂಕಲ ಗ್ರಾಮದ 46 ವರ್ಷದ ಮಹಿಳೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕಳೆದ ಜೂ.19ರಂದು ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿನ ಜಾಲಪ್ಪ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಾಗ ಕೊರೊನಾ ಪಾಸಿಟಿವ್ ಕಂಡುಬಂದಿದೆ.

ಕೂಡಲೇ ಅವರನ್ನು ಕೋವಿಡ್-19 ಚಿಕಿತ್ಸಾ ಘಟಕಕ್ಕೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ತಿಳಿಸಿದ್ದು, ಇಂದು ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ತಿಳಿಸಿದ್ದಾರೆ.

ಇವರ ಮಗ, ತಂದೆ, ತಾಯಿ ಎಸ್‍ಎನ್‍ಆರ್ ಸರ್ಕಾರಿ ಆಸ್ಪತ್ರೆಯಲ್ಲಿ ಕ್ವಾರಂಟೈನ್‍ನಲ್ಲಿದ್ದು, ಮೃತ ಮಹಿಳೆಯ ಪತಿಯೂ ಕೂಡ ಕೊರೊನಾ ಸೋಂಕಿತರಾಗಿ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋಲಾರದಲ್ಲಿ 84 ಕೊರೊನಾ ಸೋಂಕು ಪ್ರಕರಣಗಳಿದ್ದು, 36 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 48 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Facebook Comments