ಸೈನೆಡ್ ಸೇವಿಸಿ ದಂಪತಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಮುಳಬಾಗಿಲು,ಡಿ.18- ಅನಾರೋಗ್ಯದಿಂದ ಮನನೊಂದಿದ್ದ ದಂಪತಿ ಸೈನೆಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮುಳಬಾಗಿಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಟೀಚರ್ ಕಾಲೋನಿ ನಿವಾಸಿಗಳಾದ ರಾಮು(55) ಮತ್ತು ಪ್ರಮೀಳಾ(48) ಮೃತಪಟ್ಟ ದಂಪತಿ.

ಕಳೆದ ಒಂದುವಾರದ ಹಿಂದಷ್ಟೇ ದಂಪತಿ ಟೀಚರ್ಸ್ ಕಾಲೋನಿಗೆ ಬಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪ್ರಮೀಳಾ ಅವರ ಆರೋಗ್ಯದಲ್ಲಿ ತೀವ್ರ ಸಮಸ್ಯೆ ಕಾಡುತ್ತಿತ್ತು. ಇದರಿಂದಾಗಿ ದಂಪತಿ ನೊಂದಿದ್ದರು ಎನ್ನಲಾಗಿದೆ. ಇಂದು ಬೆಳಗ್ಗೆ 7.30ರ ಸುಮಾರಿನಲ್ಲಿ ಮನೆಯ ಪಕ್ಕದ ರಸ್ತೆಯಲ್ಲಿ ದಂಪತಿ ಸೈನೆಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮಾರ್ಗದಲ್ಲಿ ಹೋಗುತ್ತಿದ್ದವರು ಗಮನಿಸಿ ತಕ್ಷಣ ಪೊಲೀಸರಿಗೆ ತಿಳಿಸಿದ್ದಾರೆ.

ಸುದ್ದಿ ತಿಳಿದ ಮುಳಬಾಗಿಲು ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ನೆರೆಹೊರೆಯವರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಗುಣಮುಖವಾಗದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

Facebook Comments