ನ್ಯಾಯಾಲಯಗಳಿಗೆ 4ನೇ ಶನಿವಾರ ರಜಾ ಘೋಷಿಸುವಂತೆ ಸಿಎಂಗೆ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.18-ರಾಜ್ಯದ ಎಲ್ಲಾ ಅಧೀನ ನ್ಯಾಯಾಲಯಗಳಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರವನ್ನು ರಜಾ ದಿನವನ್ನಾಗಿ ಘೋಷಿಸುವಂತೆ ಬೆಂಗಳೂರು ವಕೀಲರ ಸಂಘ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಸಂಘದ ವಿಶೇಷ ಸರ್ವಸದಸ್ಯರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ ಸಲ್ಲಿಸಿ ಈ ಹಿಂದೆ ಘೋಷಿಸಿದಂತೆ ನಾಲ್ಕನೇ ಶನಿವಾರವನ್ನು ರಜಾ ದಿನವನ್ನಾಗಿ ಘೋಷಿಸಲು ನಿರ್ಣಯ ಕೈಗೊಳ್ಳಲಾಗಿದೆ. ಸಂಘದ ಮನವಿಯನ್ನು ಪರಿಗಣಿಸಲು 15ದಿನಗಳ ಗಡುವು ನೀಡುವುದು. ಸಂಘದ ಮನವಿಗೆ ಸರ್ಕಾರ ಸ್ಪಂದಿಸದಿದ್ದರೆ ಜ.11 ರಂದು ನಡೆಯುವ ಬೃಹತ್ ಲೋಕ ಅದಾಲತ್‍ನ್ನು ರಾಜ್ಯಾದ್ಯಂತ ಬಹಿಷ್ಕರಿಸಲು ತೀರ್ಮಾನಿಸಲಾಗಿದೆ.

ಕಾನೂನು ಸೇವಾ ಪ್ರಾಧಿಕಾರ ನಡೆಸುವ ಎಲ್ಲಾ ಕಾರ್ಯಕ್ರಮಗಳನ್ನು ಬಹಿಷ್ಕರಿಸಿ ಪ್ರತಿಭಟಿಸುವುದು, ಜನವರಿ 25ರಂದು ರಾಜ್ಯಾದ್ಯಂತ ಕೋರ್ಟ್ ಕಲಾಪಗಳಿಂದ ಹೊರಗುಳಿದು ಪ್ರತಿಭಟಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಬೆಂಗಳೂರು ವಕೀಲರ ಸಂಘವು ಕೈಗೊಂಡಿರುವ ನಿರ್ಣಯಗಳಿಗೆ ರಾಜ್ಯದ ಎಲ್ಲಾ ವಕೀಲರ ಸಂಘಗಳು ಸಹಕರಿಸಬೇಕೆಂದು ಮನವಿ ಮಾಡಲು ತೀರ್ಮಾನಿಸಲಾಗಿದೆ.

Facebook Comments