ಜನಪ್ರತಿನಿಧಿಗಳಿಗೆ ಪ್ರತ್ಯೇಕ ಹೈಟೆಕ್ ಕೋವಿಡ್ ಚಿಕಿತ್ಸಾ ಕೇಂದ್ರ ಸ್ಥಾಪನೆ, ವಿವಾದ ಹುಟ್ಟುಹಾಕಿದ ಸರ್ಕಾರ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ.25-ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳು ಒಂದೇ, ಜನಸಾಮಾನ್ಯರೂ ಒಂದೇ ಎಂಬ ನಿಯಮವನ್ನು ರಾಜ್ಯ ಸರ್ಕಾರ ಗಾಳಿಗೆ ತೂರಿದೆ.

ಏಕೆಂದರೆ ಕರ್ನಾಟಕದಲ್ಲಿ ಸಾವಿರಾರು ಜನರು ಕೊರೊನಾ ಸೋಂಕು ಆವರಿಸಿದ್ದು ಅನೇಕರಿಗೆ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಸಾವು ಬದುಕಿನ ನಡುವೆ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.

ಇಂತಹ ಸಂದರ್ಭದಲ್ಲೇ ರಾಜ್ಯ ಸರ್ಕಾರ ಸಚಿವರು ಮತ್ತು ಶಾಸಕರಿಗಾಗಿ ಕೋವಿಡ್ ಚಿಕಿತ್ಸೆ ಪಡೆಯಲು ಪ್ರತ್ಯೇಕ ಹಾಸಿಗೆಗಳನ್ನು ಮೀಸಲಿಡುವಂತೆ ಆದೇಶ ಹೊರಡಿಸಿರುವುದು ವಿವಾದಕ್ಕೆ ಕಾರಣವಾಗಿದೆ.

ಬೆಂಗಳೂರಿನ ಪ್ರತಿಷ್ಠಿತ ಕುಮಾರಕೃಪ ಅತಿಥಿಗೃಹದಲ್ಲಿ ಸಚಿವರು ಮತ್ತು ಶಾಸಕರಿಗಾಗಿಯೇ 100 ಹಾಸಿಗೆಯುಳ್ಳ ಕೋವಿಡ್ ಚಿಕಿತ್ಸಾ ಕೇಂದ್ರವನ್ನು ಮೀಸಲಿಡಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಸರ್ಕಾರದ ಈ ಆದೇಶಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇಲಾಖೆ ಹೊರಡಿಸಿರುವ ಆದೇಶದಲ್ಲಿ ಕುಮಾರಕೃಪ ಅತಿಥಿ ಗೃಹದಲ್ಲಿ ಸಚಿವರು ಮತ್ತು ಶಾಸಕರಿಗಾಗಿಯೇ 100 ಹಾಸಿಗೆಗಳನ್ನು ಮೀಸಲಿಡಬೇಕು. ಸಚಿವರು, ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು, ಹಿರಿಯ ಅಧಿಕಾರಿಗಳು ಹಾಗೂ ಸರ್ಕಾರಿ ಅಧಿಕಾರಿಗಳಿಗೆ ಇಲ್ಲಿ ಚಿಕಿತ್ಸೆ ನೀಡಬೇಕೆಂದು ಸೂಚಿಸಲಾಗಿದೆ.

ಕುಮಾರಕೃಪ ಅತಿಥಿಗೃಹದಲ್ಲಿ ಜನಪ್ರತಿನಿಧಿಗಳಿಗೆ ಏಕೆ ಹಾಸಿಗೆಗಳನ್ನು ಮೀಸಲಿಡಲಾಗಿದೆ ಎಂದು ಅಧಿಕಾರಿಯೊಬ್ಬರನ್ನು ಪ್ರಶ್ನಿಸಿದರೆ ಹೋಟೆಲ್ ಹಾಗೂ ಆಸ್ಪತ್ರೆಗಳಿಗಿಂತ ಇಲ್ಲಿ ಕಡಿಮೆ ದರದಲ್ಲಿ ಚಿಕಿತ್ಸೆ ಸಿಗುತ್ತದೆ. ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಬಾರದೆಂಬ ಕಾರಣಕ್ಕಾಗಿ ನಾವು ಕೆಕೆ ಅತಿಥಿಗೃಹದಲ್ಲಿ 100 ಹಾಸಿಗೆಗಳನ್ನು ಮೀಸಲಿಡುವಂತೆ ಸೂಚಿಸಿದ್ದೇವೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಸರ್ಕಾರದ ಎಷ್ಟೇ ಸಮರ್ಥಿಸಿಕೊಂಡರೂ ಸಾರ್ವಜನಿಕರು ಮಾತ್ರ ಇದಕ್ಕೆ ಹಿಡಿಶಾಪ ಹಾಕಿದ್ದಾರೆ. ನಾವೇ ಆರಿಸಿ ಕಳುಹಿಸಿದ ಜನಪ್ರತಿನಿಧಿಗಳು ಈ ರೀತಿ ಬೇಧಭಾವ ಮಾಡುವುದು ಎಷ್ಟರಮಟ್ಟಿಗೆ ಸರಿ ಎಂಬ ಮೂಲಭೂತ ಪ್ರಶ್ನೆ ಎತ್ತಿದ್ದಾರೆ.

Facebook Comments