ರಾಜ್ಯದ ಪ್ರಮುಖ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಹೂಡಿಕೆದಾರರ ಸಮಾವೇಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.18- ರಾಜ್ಯದ ಪ್ರಮುಖ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಹೆಚ್ಚಿನ ಹಣ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸಭೆಯಲ್ಲಿ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ನಿರಂಜನ್‍ಕುಮಾರ್ ಅವರ ಪ್ರಶ್ನೆಗೆ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಉತ್ತರಿಸುತ್ತಿದ್ದ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಮುಖ್ಯಮಂತ್ರಿಗಳು, ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾದ ಸುಧಾಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ. ಆ ಸಮಿತಿ ಮೂಲಕ ಪ್ರಮುಖ ಪ್ರವಾಸಿ ತಾಣಗಳನ್ನು ಗುರುತಿಸಲಾಗುತ್ತಿದೆ ಎಂದರು.

ಇದಕ್ಕೂ ಮುನ್ನ ಉತ್ತರ ನೀಡಿದ ಸಚಿವ ಸಿ.ಟಿ.ರವಿ, ಕರ್ನಾಟಕ ಪ್ರವಾಸೋದ್ಯಮ ನೀತಿ-2015-20ರಲ್ಲಿ 319 ಪ್ರವಾಸಿ ತಾಣಗಳನ್ನು ಗುರುತಿಸಲಾಗಿದೆ. ವಿಸ್ತೃತವಾಗಿ ಪ್ರವಾಸಿ ತಾಣಗಳನ್ನು ಗುರುತಿಸುವಾಗ ಬಿಟ್ಟು ಹೋಗಿರುವ ಬರಚುಕ್ಕಿಯಂತಹ ಪ್ರವಾಸಿ ತಾಣಗಳನ್ನು ಸೇರ್ಪಡೆ ಮಾಡಲಾಗುವುದು ಎಂದು ಹೇಳಿದರು.

ಪ್ರವಾಸಿ ತಾಣಗಳ ಪೈಕಿ ಚಾಮರಾಜನಗರದ ಕನಕಗಿರಿ, ಚಿಕ್ಕಹೊಳೆ ಜಲಾಶಯ, ಕರಿವರದರಾಜ ಬೆಟ್ಟ, ಗುಂಡ್ಲುಪೇಟೆ ತಾಲ್ಲೂಕಿನ ಬಂಡಿಪುರ, ಹಿಮವದ್ ಗೋಪಾಲಸ್ವಾಮಿ ಬೆಟ್ಟ, ಕೊಳ್ಳೇಗಾಲ ತಾಲ್ಲೂಕಿನ ಹೊಗೇನಕಲ್ ಜಲಪಾತ, ಬಿಳಿಗಿರಿ ರಂಗನಬೆಟ್ಟ, ಮಲೆಮಹದೇಶ್ವರ ಬೆಟ್ಟ ಈ ಪ್ರವಾಸಿ ತಾಣಗಳ ಅಭಿವೃದ್ಧಿಗೆ 17.33 ಕೋಟಿ ರೂ. ಮಂಜೂರಾಗಿದೆ.

ಪ್ರವಾಸೋದ್ಯ ಇಲಾಖೆಗೆ ವಾರ್ಷಿಕ 20 ಕೋಟಿ ಅನುದಾನ ಸೇರಿದೆ. ಲಭ್ಯವಿರುವ ಅನುದಾನದಡಿ ಸಾಧ್ಯವಾದಷ್ಟು ಮೂಲ ಸೌಕರ್ಯ ಕಲ್ಪಿಸಲಾಗುವುದು. ಹೆಚ್ಚುವರಿ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಪ್ರವಾಸಿ ತಾಣಗಳು ಅರಣ್ಯ ಇಲಾಖೆ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸುವ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

# ಪ್ರವಾಸಿ ಹೂಡಿಕೆದಾರರ ಸಮಾವೇಶ:
ಜೆಡಿಎಸ್ ಶಾಸಕ ಎಚ್.ಕೆ.ಕುಮಾರಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಹೂಡಿಕೆದಾರರ ಸಮಾವೇಶ ಕರೆಯಬೇಕೆಂಬ ಉದ್ದೇಶವಿದ್ದು, ಕೈಗಾರಿಕೆಗಳ ಸಿಎಸ್‍ಆರ್ ನಿಧಿ ಹಣ ಬಳಕೆ ಹಾಗೂ ಉದ್ಯಮಿಗಳು ಪ್ರವಾಸಿ ತಾಣಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತಿದೆ.

ಮಲೆನಾಡು ಪ್ರದೇಶ ಯಾವ ಸ್ವಿಡ್ಜರ್‍ಲ್ಯಾಂಡಿಗೂ ಕಡಿಮೆ ಇಲ್ಲದ ಪ್ರವಾಸಿ ತಾಣವಾಗಿದೆ. ಸಕಲೇಶಪುರದ ಮಂಜಿರಬಾದ್ ಕೋಟೆ ಕೇಂದ್ರ ಪುರಾತತ್ವ ಇಲಾಖೆಗೆ ಒಳಪಟ್ಟಿದ್ದು, ಮೂಲ ಸೌಲಭ್ಯ ಕಲ್ಪಿಸಲು ಅನುಮತಿ ನೀಡುವಂತೆ ಕೇಂದ್ರ ಸಚಿವರೊಂದಿಗೆ ಸಮಾಲೋಚನೆ ಮಾಡಲಾಗುವುದು. ಹಾಸನ ಜಿಲ್ಲೆ ವಿಶ್ವ ಪ್ರವಾಸಿ ತಾಣವಾಗಿ ಗುರುತಿಸಲಾಗಿದ್ದು, ಪ್ರವಾಸಿಗರನ್ನು ಆಕರ್ಷಿಸಲು ಅಗತ್ಯ ಮೂಲಸೌಕರ್ಯ ಅಭಿವೃದ್ಧಿ ಪಡಿಸಲಾಗುವುದು ಎಂದು ಸಿ.ಟಿ.ರವಿ ತಿಳಿಸಿದರು.

Facebook Comments