ರಾಜ್ಯದಲ್ಲಿ ಮಾದರಿ ಆರೋಗ್ಯ ವ್ಯವಸ್ಥೆ: ಡಿಸಿಎಂ ಅಶ್ವತ್ಥನಾರಾಯಣ
ಬೆಂಗಳೂರು: ಮುಂಬರುವ ದಿನಗಳಲ್ಲಿ ಇಡೀ ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ಆರೋಗ್ಯ ವ್ಯವಸ್ಥೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಕಲ್ಪಿಸಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. ವಿಶ್ವವಾಣಿ ಫೌಂಡೇಷನ್ ಸಹಯೋಗದಲ್ಲಿ ಅಜೀಂ ಪ್ರೇಮ್ ಜಿ ಪ್ರತಿಷ್ಠಾನ ಹಾಗೂ ಡಾಕ್ಟರ್ಸ್ ಫಾರ್ ಯೂ ಸಂಸ್ಥೆಯ ಸಹಯೋಗದಲ್ಲಿ ಬೆಂಗಳೂರಿನ ಯಲಹಂಕದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ 14 ವೆಂಟಿಲೇಟರ್ ಸಹಿತ ಬೆಡ್ ಗಳ ವ್ಯವಸ್ಥೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೋವಿಡ್ -19 ಸಾಂಕ್ರಾಮಿಕವು ಇಡೀ ಆರೋಗ್ಯ ವ್ಯವಸ್ಥೆಯ ಮೇಲೆ ಬಹಳಷ್ಟು ಪರಿಣಾಮ ಬೀರುವಂತೆ ಮಾಡಿದೆ. ಸೋಂಕು ಪ್ರಮಾಣ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಐಸಿಯು ಮತ್ತು ವೆಂಟಿಲೇಟರ್ ವ್ಯವಸ್ಥೆಗೆ ಭಾರೀ ಬೇಡಿಕೆ ಬಂದಿತ್ತು. ಕೊರತೆ ಉದ್ಭವಿಸಿತಾದರೂ ಅದನ್ನು ತಕ್ಷಣಕ್ಕೆ ಪರಿಹರಿಸುವಲ್ಲಿ ರಾಜ್ಯ ಸರ್ಕಾರ ಸಫಲವಾಗಿದೆ ಎಂದು ತಿಳಿಸಿದರು.
ಎಲ್ಲೆಲ್ಲಿ ವ್ಯತ್ಯಾಸಗಳು ಮತ್ತು ಕೊರತೆಗಳು ಇವೆಯೋ ಅವೆಲ್ಲವನ್ನೂ ಪತ್ತೆ ಮಾಡಿ ಪರಿಹಾರ ಕಂಡುಕೊಂಡು ಸೂಕ್ತ ತಂತ್ರಜ್ಞಾನಗಳನ್ನು ಬಳಸಿಕೊಂಡು ಸಿಬ್ಬಂದಿ ಕೊರತೆಯನ್ನು ನೀಗಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಅಲ್ಲದೇ, ಆರೋಗ್ಯ ಕ್ಷೇತ್ರಕ್ಕೆ ಸೂಕ್ತವಾದ ಮೂಲ ಸೌಕರ್ಯಗಳನ್ನು ಒದಗಿಸುವ ಮೂಲಕ ದೇಶದಲ್ಲೇ ಒಂದು ಮಾದರಿಯಾದ ಆರೋಗ್ಯ ವ್ಯವಸ್ಥೆಯನ್ನು ಸೃಷ್ಟಿ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಸಂಕಲ್ಪ ಮಾಡಿದೆ ಎಂದರು.
ಯಲಹಂಕದಲ್ಲಿ ಕ್ಷೇತ್ರದ ಶಾಸಕರೂ ಆಗಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು ತಮ್ಮ ಕ್ಷೇತ್ರದಲ್ಲಿ ಆರೋಗ್ಯ ಸೇವೆಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಇದರ ಜತೆಗೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಅವರು ಆಸಕ್ತಿ ತೋರಿ ಖಾಸಗಿ ಸಂಸ್ಥೆಗಳ ಮನವೊಲಿಸಿದ ಪರಿಣಾಮ ಅಜೀಂ ಪ್ರೇಮ್ ಜಿ, ಡಾಕ್ಟರ್ಸ್ ಫಾರ್ ಯೂ ನಂತಹ ಸಂಸ್ಥೆಗಳ ಜತೆಗೆ ಮಾತುಕತೆ ನಡೆಸಿ ತಮ್ಮ ಕ್ಷೇತ್ರಕ್ಕೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುತ್ತಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಉಪಮುಖ್ಯಮಂತ್ರಿ ಶ್ಲಾಘಿಸಿದರು.
ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು ಮಾತನಾಡಿ, ಕ್ಷೇತ್ರದಲ್ಲಿ ಯಾರೊಬ್ಬರೂ ಆರೋಗ್ಯ ಸೇವೆಯಿಂದ ವಂಚಿತರಾಗಬಾರದು ಎಂಬ ದೃಷ್ಟಿಯಿಂದ ಖಾಸಗಿ ಸಹಭಾಗಿತ್ವದಲ್ಲಿ ಉತ್ತಮ ರೀತಿಯ ಆರೋಗ್ಯ ಸೇವೆಯನ್ನು ಒದಗಿಸುತ್ತಿರುವುದಾಗಿ ತಿಳಿಸಿದರು.
ಕ್ಷೇತ್ರದಲ್ಲಿ ಜನಸಾಮಾನ್ಯರಿಗೂ ವೆಂಟೆಲೇಟರ್ ಸೌಲಭ್ಯ ದೊರೆಯುವಂತೆ ಮಾಡುವ ಉದ್ದೇಶದಿಂದ ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಇದರ ಉಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಆಸ್ಪತ್ರೆಯಲ್ಲಿ ಅಜೀಂ ಪ್ರೇಮ್ ಜಿ ಪ್ರತಿಷ್ಠಾನ ಮತ್ತು ಡಾಕ್ಡರ್ಸ್ ಫಾರ್ ಯೂ ಸಂಸ್ಥೆಯ ಸಿಬ್ಬಂದಿ ರೋಗಿಗಳ ಆರೈಕೆಯಲ್ಲಿ ತೊಡಗಿದ್ದಾರೆ.
ಈ ಸಂದರ್ಭದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್, ಆಸ್ಪತ್ರೆ ಮುಖ್ಯಸ್ಥೆ ಡಾ.ಅಸ್ಮಾ, ಡಿಎಚ್ಒ ಡಾ.ಶ್ರೀನಿವಾಸ್, ಅಜೀಂ ಪ್ರೇಮ್ ಜಿ ಪ್ರತಿಷ್ಠಾನ ಮತ್ತು ಡಾಕ್ಟರ್ ಫಾರ್ ಯೂ ಸಂಸ್ಥೆಯ ಪ್ರತಿನಿಧಿಗಳು ಇದ್ದರು.