ಸರ್ಕಾರಿ ಆಸ್ಪತ್ರೆಗಳ ಸೌಲಭ್ಯಗಳನ್ನು ಸಾರ್ವಜನಿಕರು ಬಳಸಿಕೊಳ್ಳಬೇಕು: ಡಿಸಿಎಂ ಅಶ್ವತ್ಥ ನಾರಾಯಣ್

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಜ.23- ಸಾರ್ವಜನಿಕರು ಹೆಚ್ಚು ಹೆಚ್ಚಾಗಿ ಆಸ್ಪತ್ರೆಗಳ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಕಾತೆ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ತಿಳಿಸಿದರು. ನಗರದ ವೈದ್ಯಕೀಯ ಮಹಿಳಾ ಯುಜಿ ಕಾಲೇಜಿನ ವಿದ್ಯಾರ್ಥಿನಿಯರ ವಸತಿ ನಿಲಯ ಆವರಣದಲ್ಲಿಂದು ನೂತನ ಹಾಸ್ಟೆಲ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಹಣ ತೆರುವ ಬದಲು ಸರ್ಕಾರಿ ಆಸ್ಪತ್ರೆಗಳಿಗೆ ರೋಗಿಗಳು ಹೋಗಬೇಕೆಂದು ಸಲಹೆ ನೀಡಿದರು. 2021ರಲ್ಲಿ ಮೈಸೂರು ಮೆಡಿಕಲ್ ಕಾಲೇಜು ಶತಮಾನೋತ್ಸವ ಆಚರಿಸಿಕೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇರುವ ಸರ್ಕಾರಿ ಆಸ್ಪತ್ರೆಗಳಿಗೆ ಎಲ್ಲ ರೀತಿಯ ಮೂಲ ಸೌಲಭ್ಯ ಒದಗಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

ಖಾಸಗಿ ಆಸ್ಪತ್ರೆಗಳಲ್ಲಿರುವ ಸೌಲಭ್ಯಗಳು ಸರ್ಕಾರಿ ಆಸ್ಪತ್ರೆಯಲ್ಲೂ ಸಿಗುವಂತೆ ಮಾಡಲು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್‍ಗಳಲ್ಲಿ ನಿರ್ಮಿಸಲು ಸರ್ಕಾರ ಮುಂದಾಗಿದೆ. ಖಾಸಗಿ ಆಸ್ಪತ್ರೆಗಳಂತೆಯೇ ಸರ್ಕಾರಿ ಆಸ್ಪತ್ರೆಗಳಲ್ಲೂ ಎಲ್ಲ ಸೌಲಭ್ಯ ಸಿಗಲಿದೆ. ಜನತೆ ಸರ್ಕಾರಿ ಆಸ್ಪತ್ರೆಗಳಲ್ಲೇ ಚಿಕಿತ್ಸೆ ಪಡೆಯಬೇಕೆಂದು ಅಶ್ವತ್ಥ ನಾರಾಯಣ್ ತಿಳಿಸಿದರು.

ಯಾದಗಿರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ನಿರ್ಮಿಸಲಾಗುವುದು ಎಂದು ತಿಳಿಸಿದರು. ಕನಕಪುರಕ್ಕೆ ವೈದ್ಯಕೀಯ ಕಾಲೇಜು ನೀಡುವುದಿಲ್ಲವೆ ಎಂಬ ಪ್ರಶ್ನೆಗೆ ಜಿಲ್ಲಾ ಕೇಂದ್ರಗಳಲ್ಲಿ ಮೊದಲು ತೆರೆಯುತ್ತೇವೆ. ನಂತರ ತಾಲ್ಲೂಕು ಕೇಂದ್ರಗಳಲ್ಲಿ ವೈದ್ಯಕೀಯ ಕಾಲೇಜು ತೆರೆಯಲಾಗುತ್ತದೆ ಎಂದು ಉಪಮುಖ್ಯಮಂತ್ರಿ ತಿಳಿಸಿದರು.

ಮಂಗಳೂರು ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ ಅಶ್ವತ್ಥ ನಾರಾಯಣ್ ಉತ್ತರಿಸಿ, ಬಾಂಬ್ ತಯಾರಿಸಲು ಅಗತ್ಯವಾದ ಸಾಮಗ್ರಿಗಳು ಸಾರ್ವಜನಿಕರಿಗೆ ಸಿಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಹಾಗಿದ್ದರೂ ಸಹ ಇಂತಹ ವಸ್ತುಗಳು ಸಿಗುತ್ತಿವೆ. ಹಾಗಾಗಿ ಇನ್ನೂ ಹೆಚ್ಚು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಮೇಲೆ ನಡೆದ ಬಾಂಬ್ ದಾಳಿ ಕುರಿತು ಪ್ರತಿಕ್ರಿಯಿಸಿದ ಅವರು ಇಂತಹ ಘಟನೆಗಳಿಗೆ ಹಿಂದಿನ ಸರ್ಕಾರವೇ ಕಾರಣ. ತಾವೇ ಬೆಳೆಸಿದವರಿಂದ ಇಂತಹ ಘಟನೆಗಳಿಗೆ ಒಳಗಾಗುತ್ತಿದ್ದಾರೆ. ನಾವು ಇಂತಹ ಕೃತ್ಯ ಎಸಗಿದವರ ವಿರುದ್ಧ ಕ್ರಮಕ್ಕೆ ಮುಂದಾದಾಗ ಇವರುಗಳೇ ಮೊಕದ್ದಮೆಗಳನ್ನು ಹಿಂಪಡೆಯುತ್ತಾರೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ದುಷ್ಕøತ್ಯ ಎಸಗಿದವರ ವಿರುದ್ಧ ಇದ್ದ ಮೊಕದ್ದಮೆಗಳನ್ನು ಹಿಂಪಡೆಯಲಾಗಿದೆ. ಹಾಗಾಗಿ ಇಂತಹ ಪ್ರಕರಣಗಳು ಮರುಕಳಿಸುತ್ತಿವೆ. ಇತ್ತೀಚೆಗೆ ಶಾಸಕ ತನ್ವೀರ್ ಸೇಠ್ ಮೇಲೆ, ನಿನ್ನೆ ಹ್ಯಾರಿಸ್ ಮೇಲೆ ಕೃತ್ಯಗಳು ನಡೆದಿವೆ ಎಂದು ತಿಳಿಸಿದರು. ಸಚಿವ ಸಂಪುಟ ವಿಸ್ತರಣೆ ಕುರಿತು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿಗಳು ದಾವೋಸ್ ಪ್ರವಾಸದಿಂದ ಬಂದ ತಕ್ಷಣ ಸಂಪುಟ ವಿಸ್ತರಣೆಯಾಗಲಿದೆ ಎಂದು ಅಶ್ವತ್ಥ ನಾರಾಯಣ್ ಉತ್ತರಿಸಿದರು.

Facebook Comments