ಸದ್ಯಕ್ಕೆ ಬಸ್ ಪ್ರಯಾಣ ದರ ಹೆಚ್ಚಳ ಮಾಡಲ್ಲ : ಡಿಸಿಎಂ ಸವದಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 18-ಕೆಎಸ್‍ಆರ್‍ಟಿಸಿ, ಬಿಎಂಟಿಸಿ, ಎನ್‍ಇಕೆಎಸ್‍ಆರ್‍ಟಿ ಹಾಗೂ ಎನ್‍ಡಬ್ಲು ಕೆಎಸ್‍ಆರ್‍ಟಿಸಿ ಸೇರಿದಂತೆ ನಾಲ್ಕು ನಿಗಮಗಳು ನಷ್ಟದಲ್ಲಿದ್ದರೂ ಸದ್ಯದ ಪರಿಸ್ಥಿತಿಯಲ್ಲಿ ಬಸ್ ಪ್ರಯಾಣವನ್ನು ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿಗೆ ನಿಗಮಗಳು ನಷ್ಟದಲ್ಲಿವೆ. ದರ ಹೆಚ್ಚಳ ಮಾಡುವುದು ಅನಿವಾರ್ಯವಾದರೂ ಇಂದಿನ ಪರಿಸ್ಥಿತಿಯಲ್ಲಿ ದರ ಏರಿಕೆ ಮಾಡುವುದಿಲ್ಲ ಎಂದು ಹೇಳಿದರು.

ಲಾಕ್‍ಡೌನ್ ಜಾರಿಯಾಗಿ ಸರಿಸುಮಾರು ಒಂದೂವರೆ ತಿಂಗಳಾಗಿವೆ. ಸದ್ಯಕ್ಕೆ ಯಾವುದೇ ರೀತಿಯ ಆದಾಯ ಇಲ್ಲದ ಕಾರಣ ನಷ್ಟ ಸರಿದೂಗಿಸುವುದು ಸುಲಭದ ಮಾತಲ್ಲ. ಸರ್ಕಾರ ನಷ್ಟದ ಪ್ರಮಾಣವನ್ನು ಭರಿಸಲಿದೆ ಎಂದು ತಿಳಿಸಿದರು.

ಮಹಾರಾಷ್ಟ್ರ, ಒಡಿಶಾ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಪ್ರಯಾಣ ದರವನ್ನು ಏರಿಕೆ ಮಾಡಲಾಗಿದೆ. ನಮ್ಮ ಸರ್ಕಾರ ನಷ್ಟದಲ್ಲಿದ್ದರೂ ಪ್ರಯಾಣಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ದರ ಏರಿಕೆ ಮಾಡಬಾರದೆಂಬ ತೀರ್ಮಾನಕ್ಕೆ ಬಂದಿದ್ದೇವೆ ಎಂದರು.

ನಾಳೆ ಪ್ರಾಯೋಗಿಕವಾಗಿ ನಿರ್ಧಿಷ್ಟ ಪ್ರಮಾಣದ ಬಸ್‍ಗಳು ಸಂಚರಿಸಲಿವೆ. ಜನರ ಪ್ರತಿಕ್ರಿಯೆ ನೋಡಿಕೊಂಡು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹೆಚ್ಚಿನ ಬಸ್ ಸೌಲಭ ಹೆಚ್ಚಿಸುವುದಾಗಿ ಹೇಳಿದರು.

ಬಸ್, ಟ್ಯಾಕ್ಸಿ, ವೋಲಾ, ಊಬರ್ ಮತ್ತಿತರ ವಾಹನಗಳಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಒಂದು ವೇಳೆ ನಿಯಮಗಳನ್ನು ಉಲ್ಲಂಘಿಸಿದರೆ ಅಂಥವರ ಮೇಲೆ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟರು.

ಈಗಾಗಲೇ ಇಲಾಖೆ ಅಧಿಕಾರಿಗಳು ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಯಾಣಿಕರು ಕೂಡ ಈ ಹಿಂದೆ ನೀಡಿದ ಸಹಕಾರದಂತೆ ಮುಂದೆಯೂ ನೀಡಬೇಕು ಎಂದು ಮನವಿ ಮಾಡಿದರು.

ಕಂಟೋನ್ಮೆಂಟ್ ಮತ್ತು ರೆಡ್‍ಜೋನ್‍ಗಳಲ್ಲಿ ಯಥಾಸ್ಥಿತಿ ಮುಂದುವರೆಯಲಿದೆ. ಇಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರವನ್ನು ತೆಗೆದುಕೊಳ್ಳಲಿದ್ದೇವೆ ಎಂದು ಹೇಳಿದರು.

Facebook Comments

Sri Raghav

Admin