“ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಲು ಸಾಧ್ಯವೇ ಇಲ್ಲ” : ಸವದಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಡಿ.14- ಯಾವುದೇ ಕಾರಣಕ್ಕೂ ಸಾರಿಗೆ ನೌಕರರನ್ನು ಸದ್ಯದ ಪರಿಸ್ಥಿತಿಯಲ್ಲಿ ಸರ್ಕಾರಿ ನೌಕರರು ಎಂದು ಪರಿಗಣಿಸಲು ಸಾಧ್ಯವೇ ಇಲ್ಲ. ಉಳಿದ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಸಿದ್ದವಿದೆ ಎಂದು ಉಪಮುಖ್ಯಮಂತ್ರಿಯೂ ಆಗಿರುವ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದರು.

ಮುಖ್ಯಮಂತ್ರಿ ಯಡಿಯೂರಪ್ಪನವರ ಜೊತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲದ ಕಾರಣ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನೌಕರರು 10 ಬೇಡಿಕೆಗಳನ್ನು ಮುಂದಿಟ್ಟಿದ್ದರು. ಅದರಲ್ಲಿ 9 ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ದವಿದೆ. ಸಾರ್ವಜನಿಕರಿಗೆ ತೊಂದರೆ ಕೊಟ್ಟು ಪ್ರತಿಭಟನೆ ನಡೆಸುವುದು ಸರಿಯಲ್ಲ. ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕೆಂದು ಮನವಿ ಮಾಡಿದರು.

ಸರ್ಕಾರಿ ನೌಕರರನ್ನಾಗಿ ಮಾಡುವುದರಿಂದ ಸರ್ಕಾರಕ್ಕೆ ಬಹಳಷ್ಟು ಹಣಕಾಸಿನ ಸಮಸ್ಯೆ ಎದುರಾಗುತ್ತದೆ. ಇಲಾಖೆಯಲ್ಲಿ 40 ನಿಗಮಗಳಿವೆ. ಇದರಿಂದ ಅಭಿವೃದ್ಧಿ ಕಾರ್ಯ ಕುಂಠಿತವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ನಿನ್ನೆ ಸಾರಿಗೆ ನೌಕರರ ಮುಖಂಡರ ಜೊತೆ ಸುದೀರ್ಘವಾಗಿ ಚರ್ಚೆ ಮಾಡಲಾಗಿತ್ತು. ಪ್ರತಿಭಟನೆಯನ್ನು ಹಿಂಪಡೆಯುವುದಾಗಿ ಘೋಷಣೆ ಮಾಡಿದ್ದರು. ನಂತರ ಉಲ್ಟಾ ಹೊಡೆದಿದ್ದಾರೆ. ಯಾವ ಕಾರಣಕ್ಕಾಗಿ ಯೂ ಟರ್ನ್ ಹೊಂದಿದ್ದಾರೆ ಎಂದು ಪ್ರಶ್ನಿಸಿದರು.

ಸರ್ಕಾರದ ಮನವಿ ಮೇರೆಗೆ ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ರಾಜ್ಯಾದ್ಯಂತ ಬಸ್‍ಗಳ ಸಂಚಾರ ಆರಂಭವಾಗಿದೆ . ಸಾರಿಗೆ ನೌಕರರು ಈಗಾಗಲೇ ಕೆಲವು ಕಡೆ ಕರ್ತವ್ಯಕ್ಕೆ ಮರಳಿದ್ದಾರೆ. ಸಾರ್ವಜನಿಕರಿಗೆ ತೊಂದರೆಯಾಗಬಾರದೆಂದು ಮಾಡಿಕೊಂಡ ಮನವಿಗೆ ಎಲ್ಲರೂ ಸ್ಪಂದಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸರ್ಕಾರ ಎಲ್ಲಿಯೂ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ಮಾಡಲಿಲ್ಲ. ಮಾತುಕತೆ ಮೂಲಕ ಸಮಸ್ಯೆಯನ್ನು ಇತ್ಯರ್ಥಪಡಿಸಲು ನಾವು ಪ್ರಾಮಾಣಿಕ ಪ್ರಯತ್ನ ಮಾಡಿದೆವು. ಆದರೆ ಕೆಲವರ ಕುಮ್ಮಕ್ಕಿನಿಂದ ಸಮಸ್ಯೆ ಬಿಗಡಾಯಿಸಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‍ಗೂ ನಮಗೂ ಯಾವುದೇ ರೀತಿಯ ಸಂಬಂಧವಿಲ್ಲ. ನಾವು ಅವರನ್ನು ಮಾತುಕತೆಗೂ ಆಹ್ವಾನಿಸಿಲ್ಲ. ಸಾರಿಗೆ ನೌಕರರಿಗೂ ಅವರಿಗೂ ಏನು ಸಂಬಂಧ ಎಂದು ಸವದಿ ಪ್ರಶ್ನಿಸಿದರು.
ಕೋಡಿಹಳ್ಳಿ ಚಂದ್ರಶೇಖರ್ ರಾಜಕೀಯ ಪ್ರೇರಿತ ಕುಮ್ಮಕ್ಕಿನಿಂದಾಗಿ ನೌಕರರನ್ನು ಸರ್ಕಾರದ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಶೋಭೆ ತರುವುದಿಲ್ಲ ಎಂದು ಆಕ್ಷೇಪಿಸಿದರು.

ನೌಕರರ ವಿರುದ್ಧ ಎಸ್ಮಾ ಜಾರಿ ಮಾಡುವಂತ ಸಂದರ್ಭ ಬರುವುದಿಲ್ಲ. ಈ ಬ್ರಹ್ಮಾಸ್ತ್ರವನ್ನು ನಾವು ಉಪಯೋಗಿಸುವುದೂ ಇಲ್ಲ. ಕೋಡಿಹಳ್ಳಿ ಬಂದಿರುವುದು ರಾಜಕೀಯ ಪ್ರೇರಿತ ಎಂದು ಎಲ್ಲರಿಗೂ ಗೊತ್ತಿದೆ ಎಂದು ಟೀಕಿಸಿದರು.

Facebook Comments

Sri Raghav

Admin